Breaking News

ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ

Meeting of District Level Disaster Management Authority








ಕೊಪ್ಪಳ ಜುಲೈ 13 (ಕರ್ನಾಟಕ ವಾರ್ತೆ): ಮಳೆಯಿಂದಾಗುವ ಹಾನಿಗೆ ಕಾಲಮಿತಿಯೊಳಗೆ ಪರಿಹಾರ ಒದಗಿಸಲು ಅಗತ್ಯ ಕ್ರಮ ವಹಿಸಬೇಕು. ಮಳೆ ಕೊರತೆಯಾದಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆಯತ್ತ ಗಮನ ಹರಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜುಲೈ 13ರಂದು ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಪರಿಸ್ಥಿತಿಯ ಬಗ್ಗೆ ಜಿಲ್ಲಾಧಿಕಾರಿಗಳು ತಾಲೂಕುವಾರು ಪರಿಶೀಲಿಸಿದರು. ನಗರ ಪ್ರದೇಶಗಳಲ್ಲಿ ಪಾಳಿ ಪ್ರಕಾರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಹ ನಿಯಮಿತವಾಗಿ ಕುಡಿಯುವ ನೀರಿನ ಸರಬರಾಜಿಗೆ ಅಗತ್ಯ ಕ್ರಮ ವಹಿಸಬೇಕು ಎಂದು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಮಳೆ ಸುರಿದಾಗ ಚರಂಡಿ ಸೇರಿದಂತೆ ಯಾವುದೇ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಗಟಾರುಗಳಲ್ಲಿನ ಹೂಳು ತೆಗೆಯಿಸಲು ಹಾಗೂ ತಗ್ಗು ಪ್ರದೇಶಗಳನ್ನು ಸಮತಟ್ಟುಗೊಳಿಸಲು ಕ್ರಮವಹಿಸಬೇಕು. ವಿಪರೀತ ಮಳೆ ಸುರಿದು ಯಾವುದೇ ಕಡೆಗಳಲ್ಲಿ ಹಾನಿಯಾದಲ್ಲಿ ಅಧಿಕಾರಿಗಳು ಘಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿ ಹಾನಿಯ ಬಗ್ಗೆ ಪರಿಹಾರಕ್ಕಾಗಿ ವರದಿ ಮಾಡಬೇಕು. ಜನತೆಗೆ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೆ ಅವರು ಮಾತನಾಡಿ, ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಸುವ ಮೊದಲು ಪರೀಕ್ಷಿಸಿಯೇ ನೀರು ಪೂರೈಸಬೇಕು. ಕುಡಿಯುವ ನೀರಿನ ಬೊರವೆಲ್ ಹಾಗೂ ಟ್ಯಾಂಕರ್ ಸೇರಿದಂತೆ ಯಾವುದೇ ಬಗೆಯ ನೀರಿನ ಮೂಲಗಳನ್ನು ಸಹ ಕಾಲಕಾಲಕ್ಕೆ ಪರೀಕ್ಷಿಸಬೇಕು ಎಂದು ಸೂಚನೆ ನೀಡಿದರು.
ಮಳೆಗಾಲ ಹಿನ್ನಲೆಯಲ್ಲಿ ಅಲ್ಲಲ್ಲಿ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಮಿಕ ಕಾಯಿಲೆಗಳು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಕಡೆಗಳಲ್ಲಿ ಶುಚಿತ್ವ ಕಾಯ್ದುಕೊಳ್ಳಲು ನೀರು ಸಂಗ್ರಹಣೆಗೊಂಡು ಸೊಳ್ಳೆ ಉತ್ಪತ್ತಿಯಾಗದ ಹಾಗೆ ಎಲ್ಲಾ ಕಡೆಗಳಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಳೆಗಾಲ ಹಿನ್ನೆಲೆಯಲ್ಲಿ ಕಾಯಿಸಿ ಆರಿಸಿದ ನೀರನ್ನು ಕುಡಿಯಲು, ಮನೆ ಸುತ್ತಲು ನೀರು ನಿಲ್ಲದಂತೆ ಶುಚಿತ್ವ ಕಾಯ್ದುಕೊಳ್ಳಲು, ಬಿಸಿ ಆಹಾರ ಸೇವೆನೆ ಸೇರಿದಂತೆ ನಾನಾ ವಿಷಯಗಳ ಬಗ್ಗೆ ಆರೋಗ್ಯ ಜಾಗೃತಿ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಿಗೆ ತಿಳಿವಳಿಕೆ ಮೂಡಿಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.
ಮಳೆಯಿಂದಾಗಿ ಜೀವ ಹಾನಿ, ಜಾನುವಾರು ಪ್ರಾಣ ಹಾನಿ ಮತ್ತು ಆಸಿಪಾಸ್ತಿ ಹಾನಿ ಮತ್ತು ಪರಿಹಾರ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಮಾಹಿತಿ ಪಡೆದರು. ಜಿಲ್ಲೆಯಲ್ಲಿ ಕುಷ್ಟಗಿ, ಕುಕನೂರ, ಯಲಬುರ್ಗಾ, ಕೊಪ್ಪಳ ಮತ್ತು ಗಂಗಾವತಿ ತಾಲೂಕುಗಳಲ್ಲಿ ವರದಿಯಾದ 5 ಸಿಡಿಲಿನಿಂದ ಮೃತಪಟ್ಟ ಪ್ರಕರಣಗಳಿಗೆ ಹಾಗೂ ಕನಕಗಿರಿ ತಾಲೂಕಿನಲ್ಲಿ ವರದಿಯಾದ ಮನೆಕುಸಿದು ಮೃತಪಟ್ಟ 2 ಪ್ರಕರಣಗಳಿಗೆ ತಲಾ 5 ಲಕ್ಷ ರೂ.ಗಳಂತೆ ಮಾನವ ಜೀವ ಹಾನಿ ಪ್ರಕರಣಗಳಿಗೆ 35,00,000 ರೂ.ಪರಿಹಾರ ವಿತರಿಸಲಾಗಿದೆ. ಏಪ್ರಿಲ್‌ನಿಂದ ಜೂನ್ ಮಾಹೆವರೆಗೆ ಕೊಪ್ಪಳ ತಾಲೂಕಿನಲ್ಲಿ 12, ಕುಷ್ಟಗಿ ತಾಲೂಕಿನಲ್ಲಿ 10, ಕುಕನೂರ ತಾಲೂಕಿನಲ್ಲಿ 9 ಹಾಗು ಯಲಬುರ್ಗಾ ತಾಲೂಕಿನಲ್ಲಿ 24 ಮತ್ತು ಗಂಗಾವತಿ ತಾಲೂಕಿನಲ್ಲಿ 5 ಸೇರಿ ಒಟ್ಟು ಒಟ್ಟು 60 ಮನೆಹಾನಿ ಪ್ರಕರಣಗಳಿಗೆ ಪೂರ್ಣಪ್ರಮಾಣದಲ್ಲಿ ಪರಿಹಾರ ವಿತರಿಸಲಾಗಿದೆ. ಮಳೆಯಿಂದಾಗಿ ಜಿಲ್ಲೆಯಲ್ಲಿ ಏಪ್ರಿಲ್‌ದಿಂದ ಇಲ್ಲಿಯವರೆಗೆ ಕೊಪ್ಪಳ ತಾಲೂಕಿನಲ್ಲಿ 16, ಕುಷ್ಟಗಿ ತಾಲೂಕಿನಲ್ಲಿ 12, ಕನಕಗಿರಿ ತಾಲೂಕಿನಲ್ಲಿ 1, ಕಾರಟಗಿ ತಾಲೂಕಿನಲ್ಲಿ 3, ಕೂಕನೂರ ತಾಲೂಕಿನಲ್ಲಿ 4 ಮತ್ತು ಯಲಬುರ್ಗಾ ತಾಲೂಕಿನಲ್ಲಿ 5 ಸೇರಿ ಒಟ್ಟು 41 ಜಾನುವಾರುಗಳು ಸಾವಿಗೀಡಾಗಿದ್ದು, ಈ ಪೈಕಿ 38 ಜಾನುವಾರಗಳ ಪರಿಹಾರ ಮೊತ್ತವನ್ನು ಸಂಬಂಧಪಟ್ಟ ಸಂತ್ರಸ್ಥರಿಗೆ ವಿತರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಸಭೆಗೆ ಮಾಹಿತಿ ನೀಡಿದರು.
ಜುಲೈ 1 ರಿಂದ ಜುಲೈ 12ರವರೆಗೆ ಗಂಗಾವತಿ ತಾಲೂಕಿನಲ್ಲಿ ವಾಡಿಕೆ ಮಳೆ 18 ಮಿಮಿ ಇದ್ದು, ವಾಸ್ತವಿಕವಾಗಿ 41 ಮಿಮಿ ಸುರಿದು ಶೇ.130ರಷ್ಟು, ಕಾರಟಗಿ ತಾಲೂಕಿನಲ್ಲಿ ವಾಡಿಕೆ ಮಳೆ 17 ಮಿಮಿ ಇದ್ದು ವಾಸ್ತವಿಕವಾಗಿ 36 ಮಿಮಿ ಸುರಿದು ಶೇ.104ರಷ್ಟು, ಕನಕಗಿರಿ ತಾಲೂಕಿನಲ್ಲಿ ವಾಡಿಕೆ ಮಳೆ 14 ಮಿಮಿ ಇದ್ದು, ವಾಸ್ತವಿಕವಾಗಿ 40 ಮಿಮಿ ಮಳೆ ಸುರಿದು ಶೇ.195ರಷ್ಟು, ಕೊಪ್ಪಳ ತಾಲೂಕಿನಲ್ಲಿ ವಾಡಿಕೆ ಮಳೆ 18 ಮಿಮಿ ಇದ್ದು ವಾಸ್ತವಿಕವಾಗಿ 34 ಮಿಮಿ ಸುರಿದು ಶೇ.90ರಷ್ಟು, ಕುಷ್ಟಗಿ ತಾಲೂಕಿನಲ್ಲಿ ವಾಡಿಕೆ ಮಳೆ 16 ಮಿಮಿ ಇದ್ದು ವಾಸ್ತವಿಕವಾಗಿ 16 ಮಿಮಿ ಮಳೆ ಸುರಿದು ಶೇ.2ರಷ್ಟು, ಯಲಬುರ್ಗಾ ತಾಲೂಕಿನಲ್ಲಿ ವಾಡಿಕೆ ಮಳೆ 17 ಮಿಮಿ ಇದ್ದು, ವಾಸ್ತವಿಕವಾಗಿ 42 ಮಿಮಿ ಮಳೆ ಸುರಿದು ಶೇ.151ರಷ್ಟು, ಕುಕನೂರ ತಾಲೂಕಿನಲ್ಲಿ ವಾಡಿಕೆ ಮಳೆ 16 ಮಿಮಿ ಇದ್ದು ವಾಸ್ತವಿಕವಾಗಿ 40 ಮಿಮಿ ಮಳೆ ಸುರಿದು ಶೇ.154ರಷ್ಟು ಮಳೆ ಸುರಿದಿದೆ. ಒಟ್ಟಾರೆ ಜಿಲ್ಲೆಯಲ್ಲಿ ವಾಡಿಕೆ ಮಳೆ 18 ಮಿಮಿ ಇದ್ದು ವಾಸ್ತವಿಕವಾಗಿ 33 ಮಿಮಿ ಸುರಿದು ಶೇ.84ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್ ಅವರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕಾವ್ಯರಾಣಿ ಕೆ.ವಿ., ವಿವಿಧ ತಾಲೂಕುಗಳ ತಹಶೀಲ್ದಾರರು, ತಾಪಂ ಕಾರ್ಯನಿರ್ವಹಣಾಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಶುಪಾಲನಾ ಇಲಾಖೆ, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಸೇರಿದಂತೆ ಇನ್ನೀತರ ಇಲಾಖೆಗಳ ಅಧಿಕಾರಿಗಳು ಇದ್ದರು.

ಜಾಹೀರಾತು
ಜಾಹೀರಾತು

About Mallikarjun

Check Also

ಮಾರ್ಟಳ್ಳಿ ಪಂಚಾಯ್ತಿಯಲ್ಲಿ ಮನರೇಗಾ ಯೋಜನೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ..!

Universe corruption in Manrega scheme in Martalli Panchayat..! ವರದಿ :ಬಂಗಾರಪ್ಪ ಸಿ ಹನೂರು .ಹನೂರು :ಕ್ಷೇತ್ರ ವ್ಯಾಪ್ತಿಯಲ್ಲಿನ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.