Public relations meeting at district level every month: Shivraj Thangadagi
ಕೊಪ್ಪಳ ಜುಲೈ 26 (ಕರ್ನಾಟಕ ವಾರ್ತೆ): ಜಿಲ್ಲೆಯ ಸಾರ್ವಜನಿಕರ ಕುಂದುಕೊರತೆಗಳ ನಿವಾರಣೆಗಾಗಿ ಪ್ರತಿ ಮಾಹೆ ಜಿಲ್ಲಾಮಟ್ಟದಲ್ಲಿ ಜನಸಂಪರ್ಕ ಸಭೆ ನಡೆಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಹೇಳಿದರು.
ಮುಂಗಾರು ಮಳೆಯಿಂದಾದ ತೊಂದರೆಗಳು ಮತ್ತು ಕೈಗೊಂಡ ಕ್ರಮಗಳ ಬಗ್ಗೆ ಜುಲೈ 26ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ನಡೆಸಿದ ವಿಶೇಷ ಸಭೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಜಿಲ್ಲಾಮಟ್ಟದಲ್ಲಿ ಜನ ಸಂಪರ್ಕ ಸಭೆಯಂತೆ ತಾಲೂಕುಮಟ್ಟದಲ್ಲಿ ಸಹ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮಕ್ಷಮದಲ್ಲಿ ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆಗಳನ್ನು ನಡೆಸಿ ಆಯಾ ತಾಲೂಕುಗಳ ಸಮಗ್ರ ಅಭಿವೃದ್ಧಿಗೆ ಸಹ ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.
ಇನ್ನು ಮೂರು ನಾಲ್ಕು ದಿನಗಳ ಕಾಲ ನಿರಂತರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಜಿಟಿ ಜಿಟಿ ಮಳೆಯಿಂದಾಗಿ ಹತ್ತಿ ಸೇರಿದಂತೆ ಯಾವುದೇ ಬೆಳೆ ಹಾನಿಯಾಗಿದ್ದಲ್ಲಿ ಕೃಷಿ, ತೋಟಗಾರಿಕೆ ಸೇರಿದಂತೆ ಇನ್ನೀತರ ಅಧಿಕಾರಿಗಳು ಜಂಟಿ ಸಮೀಕ್ಷೆ ಕೈಗೊಂಡು ಪರಿಹಾರಕ್ಕಾಗಿ ತಹಸೀಲ್ದಾರಗೆ ವರದಿ ಮಾಡಬೇಕು. ಮಳೆಯಿಂದಾಗಿ ರೈತರು ಹತ್ತಿ ಬೆಳೆ ನಷ್ಟ ಅನುಭವಿಸಿದ್ದಲ್ಲಿ ಅಂತಹ ರೈತರಿಗೆ ತ್ವರಿತವಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ಹೇಳಿದರು.
ಯಾವುದೇ ಸಮಯದಲ್ಲಿ ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ಈ ಭಾಗದ ಅನ್ನದಾತರ ಯಾವುದೇ ಕುಂದುಕೊರತೆಗಳು, ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹಾರ ಕಲ್ಪಿಸಲಾಗುವುದು. ತುಂಗಭದ್ರ ಜಲಾಶಯದಿಂದ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಚರ್ಚಿಸಲಾಗುವುದು. ನೀರಾವರಿ ಸಲಹಾ ಸಮಿತಿಯ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದ್ದು, ಒಟ್ಟಾರೆ ಜಲಾಶಯದಿಂದ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ರಾಘವೇಂದ್ರ ಹಿಟ್ನಾಳ, ದೊಡ್ಡನಗೌಡ ಪಾಟೀಲ, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು ಹಾಗೂ ಇನ್ನೀತರರು ಇದ್ದರು.