Receipt of report from Deputy Lokayukta from October 07 to 09, Inquiry: Lokayukta SP Dr. Ram L Arsiddhi

ಕೊಪ್ಪಳ ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಗೌರವಾನ್ವಿತ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎಸ್. ಫಣೀಂದ್ರ ಅವರು ಅಕ್ಟೋಬರ್ 07 ರಿಂದ ಅಕ್ಟೋಬರ್ 09ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ನಡೆಸಲಿದ್ದಾರೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ಧಿ ಅವರು ಹೇಳಿದರು.
ಕಿನ್ನಾಳ ರಸ್ತೆಯಲ್ಲಿರುವ ಪ್ರವಾಸಿ ಮಂದಿರದಲ್ಲಿ ಅಕ್ಟೋಬರ್ 05ರಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಅಧಿಕಾರಿ ಅಥವಾ ನೌಕರರಿಂದ ಕೊಪ್ಪಳ ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕರಿಗೆ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದಲ್ಲಿ ಅಥವಾ ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ಅಧಿಕಾರಿ, ನೌಕರರು ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ಗೌರವಾನ್ವಿತ ಉಪ ಲೋಕಾಯುಕ್ತರ ಮುಂದೆ ತಮ್ಮ ಅಹವಾಲುಗಳನ್ನು ಲಿಖತ ರೂಪದಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಗೌರವಾನ್ವಿತ ಉಪಲೋಕಾಯುಕ್ತರು ಅಕ್ಟೋಬರ್ 07 ರಿಂದ ಅಕ್ಟೋಬರ್ 09ರವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 01.30 ರವರೆಗೆ ಹಾಗೂ ಮಧ್ಯಾಹ್ನ 02.30 ರಿಂದ 05.00 ಗಂಟೆಯವರೆಗೆ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ಮಾಡಲಿದ್ದಾರೆ. ಇದೆ ಅವಧಿಯಲ್ಲಿ ಅಹವಾಲು ಸ್ವೀಕಾರ ಜತೆಗೆ ಕೊಪ್ಪಳ ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಗೌರವಾನ್ವಿತ ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ) ತನಿಖೆ ಅಥವಾ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆಯನ್ನು ಗೌರವಾನ್ವಿತ ಉಪಲೋಕಾಯುಕ್ತರು ನಡೆಸುತ್ತಾರೆ ಎಂದು ತಿಳಿಸಿದರು.
ಈ ಕಾರ್ಯಕ್ರಮವು ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿನ ಆಡಿಟೋರಿಯಂ ಹಾಲನಲ್ಲಿ ನಡೆಯಲಿದೆ. ಇದಕ್ಕಾಗಿ ಈಗಾಗಲೇ ಎಲ್ಲ ರೀತಿಯ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ದೂರುದಾರರು ನಿಗದಿತ ಸಮಯದಲ್ಲಿ ಹಾಜರಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತ ಕೊಪ್ಪಳ ಕಚೇರಿಯ ಪೊಲೀಸ್ ಉಪಾಧೀಕ್ಷಕರಾದ ಸಲೀಂ ಪಾಶಾ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಲೋಕಾಯುಕ್ತ ಪೊಲೀಸ್ ಇನ್ಸಪೆಕ್ಟರ್‌ಗಳಾದ ಗಿರೀಶ್ ರೋಡಕರ್, ಚಂದ್ರಪ್ಪ, ರಾಜೇಶ ಮತ್ತು ಕೊಪ್ಪಳ ಲೋಕಾಯುಕ್ತ ಕಚೇರಿಯ ರಾಮಣ್ಣ ಅವರು ಉಪಸ್ಥಿತರಿದ್ದರು.