Public’s cooperation is needed to eradicate child labour: Santosh Lad
ರಾಯಚೂರು ಜ.20 (ಕರ್ನಾಟಕ ವಾರ್ತೆ): ಗ್ರಾಮೀಣ ಭಾಗದ ಹಲವೆಡೆ ಇನ್ನು ಜೀವಂತವಾಗಿದೆ ಎನ್ನಲಾಗುವ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸಾರ್ವಜನಿಕರ ಸಹಕಾರ ಅಗತ್ಯವಿದೆ. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆಯಿದೆ ಎಂದು ಕಾರ್ಮಿಕ ಇಲಾಖೆಯ ಸಚಿವರಾದ ಸಂತೋಷ ಎಸ್. ಲಾಡ್ ಅವರು ಹೇಳಿದರು.
ಜನವರಿ 20ರಂದು, ಸೋಮವಾರ, ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. ಇಂಡಸ್ಟ್ರಿಯಲ್ ಡಿಸ್ಪೋರ್ಟ್ ಕಾಯ್ದೆಯಡಿ ಸುಮಾರು 183 ಪ್ರಕರಣಗಳು ದಾಖಲಾಗಿದ್ದು, ಸುಮಾರು 133 ಪ್ರಕರಣಗಳನ್ನು ಬಗೆಹರಿಸಲಾಗಿದೆ ಎಂದರು.
ಬಾಲ ಕಾರ್ಮಿಕ ಕಾಯ್ದೆಯಡಿ ಸುಮಾರು 256 ಮಕ್ಕಳನ್ನು ಪತ್ತೆ ಮಾಡಲಾಗಿದೆ. ಬೇರೆ ರಾಜ್ಯಗಳಿಂದ ಬರುವಂತಹ ಮಕ್ಕಳನ್ನು ರಕ್ಷಣೆ ಮಾಡುವಂತ ಕಾರ್ಯ ಸಹ ಮಾಡಲಾಗುತ್ತಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಬಾಲ ಕಾರ್ಮಿಕ ಇಲಾಖೆಯಲ್ಲಿ ದೊರಕುವಂತೆ ಕಾರ್ಯವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆಯಡಿ ರಾಯಚೂರ ಜಿಲ್ಲೆಯಲ್ಲಿ 12, ಕಲಬುರಗಿ ಜಿಲ್ಲೆಯಲ್ಲಿ 37, ಬೀದರ ಜಿಲ್ಲೆಯಲ್ಲಿ 9, ಯಾದಗಿರಿ ಜಿಲ್ಲೆಯಲ್ಲಿ 34, ಕೊಪ್ಪಳ ಜಿಲ್ಲೆಯಲ್ಲಿ 5 ಹಾಗೂ ವಿಜಯನಗರ ಜಿಲ್ಲೆಯಲ್ಲಿ 9 ಮತ್ತು ಬಳ್ಳಾರಿ ಜಿಲ್ಲೆಯಲ್ಲಿ 20 ಸೇರಿದಂತೆ ಒಟ್ಟು 126 ಮೊಕದ್ದಮೆಗಳನ್ನು ದಾಖಲಿಸಲಾಗಿದೆ. ಮೊಕದ್ದಮೆ ಹೂಡಲು 43 ಪ್ರಕರಣಗಳು ಬಾಕಿ ಇವೆ. 226 ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಮಾನ್ವಿ ವಿಧಾನಸಭೆ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ್, ದೇವದುರ್ಗ ವಿಧಾನಸಭೆ ಕ್ಷೇತ್ರದ ಶಾಸಕರಾದ ಕರೆಮ್ಮ ಜಿ.ನಾಯಕ, ಆಯುಕ್ತರಾದ ಡಾ.ಹೆಚ್.ಎನ್.ಗೋಪಾಲಕೃಷ್ಣ, ಜಿಲ್ಲಾಧಿಕಾರಿ ನಿತೀಶ್ ಕೆ., ಕಾರ್ಮಿಕ ಇಲಾಖೆಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕಾರ್ಯದರ್ಶಿಯಾದ ಭಾರತಿ ಡಿ., ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಂ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ.ಪುಟ್ಟಮಾದಯ್ಯ ಇದ್ದರು.