The government is going to close down government schools in the name of ‘hub and spoke’

ಕೊಪ್ಪಳ: ರಾಜ್ಯದ ಕಾಂಗ್ರೆಸ್ ಸರ್ಕಾರವು ‘ ಹಬ್ ಅಂಡ್ ಸ್ಪೋಕ್ ‘ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಕಡಿಮೆ ಹಾಜರಾತಿ ಇರುವ ಶಾಲೆಗಳನ್ನು ಇತರ ಶಾಲೆಗಳೊಂದಿಗೆ ಸಂಯೋಜನೆಗೊಳಿಸುವುದಾಗಿ ಸರ್ಕಾರವು ತಿಳಿಸಿದೆ. ಈ ಮೂಲಕ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜ್ಯದ ಬಡಜನರ ಮಕ್ಕಳ ಶಿಕ್ಷಣದ ಆಶಾಕಿರಣವಾಗಿರುವ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. 4 ಸಾವಿರಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚುತ್ತಿರುವ ಸರ್ಕಾರದ ಈ ನಡೆಯನ್ನು ಎಐಡಿಎಸ್ಓ ಕೊಪ್ಪಳ ಜಿಲ್ಲಾ ಮಿತಿಯು ಅತ್ಯುಗ್ರ ಪದಗಳಲ್ಲಿ ಖಂಡಿಸುತ್ತದೆ.
ಹಿಂದಿನ ಬಿಜೆಪಿ ರಾಜ್ಯ ಸರ್ಕಾರವು ಇದೇ ನೆಪವೊಡ್ಡಿ ಎನ್ಈಪಿ-2020ರ ಅಡಿಯಲ್ಲಿ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿತ್ತು. ಅದರ ವಿರುದ್ಧ ರಾಜ್ಯದ ವಿದ್ಯಾರ್ಥಿಗಳು ಎಐಡಿಎಸ್ಓ ನೇತೃತ್ವದಲ್ಲಿ ಬೃಹತ್ ಆಂದೋಲನ ನಡೆಸಿ 35 ಲಕ್ಷಕ್ಕೂ ಹೆಚ್ಚು ಸಹಿಗಳನ್ನು ಸಂಗ್ರಹಿಸುವುದರ ಮೂಲಕ ಶಾಲೆಗಳನ್ನ ರಕ್ಷಿಸಿದ್ದರು. ಆದರೆ, ಈಗ ಮತ್ತೆ ಸರ್ಕಾರಿ ಶಾಲೆಗಳನ್ನು ಮುಚ್ಚುವುದರ ಮುಖಾಂತರ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜ್ಯದ ರೈತ-ಕಾರ್ಮಿಕರು ಹಾಗೂ ಜನ ಸಾಮಾನ್ಯರಿಗೆ ವಿಶ್ವಾಸದ್ರೋಹವೆಸಗಿದೆ. ಬಡವರ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಿತ್ತುಕೊಳ್ಳುವ ಹುನ್ನಾರ ಇದಾಗಿದೆ. ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಮುಚ್ಚುವುದು, ‘ನೆಗಡಿ ಬಂದರೆ ಮೂಗು ಕತ್ತರಿಸಿದಂತೆ’! ಸರ್ಕಾರವು ತನ್ನ ಈ ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಜನವಿರೋಧಿ ನಿರ್ಧಾರವನ್ನು ಕೈಬಿಡಬೇಕು ಹಾಗೂ ಕೂಡಲೇ ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಅವಶ್ಯಕ ಸೌಲಭ್ಯಗಳನ್ನು ನೀಡಿ ರಕ್ಷಿಸಬೇಕೆಂದು ಎಐಡಿಎಸ್ಓ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತದೆ ಹಾಗೂ ಇದರ ವಿರುದ್ಧ ಪ್ರಬಲ ಪ್ರತಿರೋಧ ಚಳುವಳಿ ಬೆಳೆಸಬೇಕೆಂದು ರಾಜ್ಯದ ವಿದ್ಯಾರ್ಥಿಗಳು, ಪಾಲಕರು ಹಾಗೂ ಶಿಕ್ಷಣಪ್ರೇಮಿ ಜನತೆಗೆ ಕರೆ ನೀಡುತ್ತದೆಎಂದರು.