Important decision taken at the District Level Guarantee Scheme Implementation Authority Committee meeting

ಬ್ಯಾಂಕಿನ ಸಾಲಕ್ಕೆ ಸರ್ಕಾರದ ಸಹಾಯಧನ ಕಡಿತಗೊಳಿಸಿದರೆ ಕ್ರಮ
ರಾಯಚೂರು ಜುಲೈ 09 (ಕರ್ನಾಟಕ ವಾರ್ತೆ): ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರ ಅಧ್ಯಕ್ಷತೆಯಲ್ಲಿ ಜುಲೈ 9ರಂದು ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ತಮಗೆ ಗ್ಯಾರಂಟಿ ಯೋಜನೆಯ ಗೃಹಲಕ್ಷೀ ಯೋಜನೆಯ 2000 ರೂ.ಗಳ ಹಣ ಜಮಾ ಆದರು ಸಹ ಬ್ಯಾಂಕಿನವರು ನೀಡುತ್ತಿಲ್ಲ. ಇದುವರೆಗೆ 45,000 ಹಣ ಜಮಾ ಆಗಿದ್ದು ಬ್ಯಾಂಕಿನ ಅಧಿಕಾರಿಗಳು ಬ್ಯಾಂಕಿನ್ ಲೋನ್‌ಗೆ ಕಡಿತ ಮಾಡಿ ಅನ್ಯಾಯ ಮಾಡುತ್ತಿದ್ದಾರೆ ಎಂದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯೊಬ್ಬರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿಗೆ ತಿಳಿಸಿದ ವಿಷಯವನ್ನು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿಯ ಸದಸ್ಯರಾದ ಬಸವರಾಜ ಹೆಚ್.ಪಿ ಅವರು ಸಭೆಯಲ್ಲಿ ಪ್ರಸ್ತಾಪಿಸಿದರು. ಈ ಬಗ್ಗೆ ಸಭೆಯಲ್ಲಿ ಎಲ್ಲ ಸದಸ್ಯರು ಸುಧೀರ್ಘ ಚರ್ಚಿಸಿದರು.
ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮಿ ಸೇರಿದಂತೆ ಇನ್ನೀತರ ಯೋಜನೆಗಳ ಹಾಗೂ ವಿದವಾ ವೇತನ, ವಿಕಲಚೇತನ ವೇತನ, ವೃದ್ದಾಪ್ಯ ವೇತನ ಸೇರಿದಂತೆ ಯಾವುದೇ ಸಾಮಾಜಿಕ ಭದ್ರತಾ ಯೋಜನೆಯಡಿ ಸರ್ಕಾರ ನೀಡುವ ಸಹಾಯಧನವು ನೇರವಾಗಿ ಸಕಾಲಕ್ಕೆ ಅರ್ಹ ಫಲಾನುಭವಿಗಳಿಗೆ ಸಿಗಲೇಬೇಕು. ಫಲಾನುಭವಿಯು ಬ್ಯಾಂಕಿನಲ್ಲಿ ಸಾಲ ಮಾಡಿದ್ದಾರೆ ಎಂದಾಕ್ಷಣ ಸಹಾಯಧನದ ಮೊತ್ತವನ್ನು ಬ್ಯಾಂಕಿನ ಸಾಲದಲ್ಲಿ ಕಡಿತಗೊಳಿಸುವುದು ತಪ್ಪಾಗುತ್ತದೆ ಎಂದು ಎಲ್ಲ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.
ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮಿ ಸಹಾಯಧನ ಸೇರಿದಂತೆ ಯಾವುದೇ ರೀತಿಯ ಸಾಮಾಜಿಕ ಭದ್ರತಾ ಯೋಜನೆಯ ಸಹಾಯಧನವನ್ನು ಇನ್ಮುಂದೆ ಯಾವುದೇ ಬ್ಯಾಂಕುಗಳಲ್ಲಿ ಸಾಲದ ಹಣಕ್ಕೆ ಕಡಿಗೊಳಿಸಿದಲ್ಲಿ ಸಂಬಂಧಿಸಿದ ಶಾಖಾ ಮ್ಯಾನೇಜರ್ ಮೇಲೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿ ಸಭೆಯಲ್ಲಿ ನಿರ್ಣಯವಾಗಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರು ತಿಳಿಸಿದರು. ಈ ಅಭಿಪ್ರಾಯಕ್ಕೆ ಸದಸ್ಯರು ಸಹಮತ ವ್ಯಕ್ತಪಡಿಸಿ, ಅಂತಿಮವಾಗಿ ಎಲ್ಲ ಬ್ಯಾಂಕುಗಳಿಗೆ ಈ ಸಭೆಯ ನಿರ್ಣಯದ ವಿಷಯವನ್ನು ಜಾರಿ ಮಾಡಿ ಕ್ರಮವಹಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.
ಇದು ಅತ್ಯಂತ ಗಂಭೀರವಾದ ವಿಷಯವಾಗಿದೆ. ಈ ಬಗ್ಗೆ ವಿವಿಧ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಸಿಇಓ ಅವರಿಗೆ ಮಾಹಿತಿ ನೀಡಬೇಕು. ತಾವು ಸಹ ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರು ತಿಳಿಸಿದರು.
ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮಿ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಸರ್ಕಾರ ನೀಡುವ ಸಹಾಯಧನವನ್ನು ಬ್ಯಾಂಕಿನ ಅಧಿಕಾರಿಗಳು ಲೋನ್ ಹಣಕ್ಕೆ ಕಟ್ ಮಾಡುವುದು ಅಕ್ಷಮ್ಯವಾಗಿದೆ. ಈ ಬಗ್ಗೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿ ಸಭೆಯು ತೆಗೆದುಕೊಂಡ ನಿರ್ಣಯವು ಲೀಡ್ ಬ್ಯಾಂಕಿನಿಂದ ಎಲ್ಲ ಬ್ಯಾಂಕುಗಳ ಎಲ್ಲ ಶಾಖೆಗಳಿಗೆ ವಾರದೊಳಗೆ ತಲುಪಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿಯ ಸದಸ್ಯರಾದ ಪವನ ಕಿಶೋರ್ ಪಾಟೀಲ ಅವರು ಲೀಡ್ ಬ್ಯಾಂಕಿನ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಧಿಕಾರಿಗಳಿಗೆ ನೋಟೀಸ್ ಜಾರಿಗೆ ನಿರ್ಣಯ: ಗೃಹಲಕ್ಷ್ಮಿ ಯೋಜನೆಯ ಕುರಿತು ತಾಲೂಕುವಾರು, ಹೋಬಳಿವಾರು ಹಾಗೂ ಗ್ರಾಮವಾರು ಸಭೆಗಳನ್ನು ನಡೆಸಲು ತಿಳಿಸಿದಾಗ್ಯೂ ಸಭೆಗಳು ನಡೆಸಿದ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡುತ್ತಿಲ್ಲ. ತಮ್ಮ ಕೆಳಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಯ ಮೇಲೆ ಕ್ರಮವಹಿಸಲು ಜಿಲ್ಲಾಮಟ್ಟದ ಅಧಿಕಾರಿಗಳು ಮುಂದಾಗದೇ ಅಸಹಾಯಕರಂತೆ ವರ್ತಿಸಬಾರದು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಬಿ.ಕೆ.ಅಂಬರಿಷಪ್ಪ ಅವರು ಅಸಮಾಧಾನ ವ್ಯಕ್ತಪಡಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಾಲೂಕುವಾರು, ಹೋಬಳಿವಾರು ಹಾಗೂ ಗ್ರಾಮವಾರು ಸಭೆ ಮಾಡುವಾಗ ಸಂಬಂಧಪಟ್ಟ ಅಧ್ಯಕ್ಷರು ಹಾಗೂ ಸದಸ್ಯರ ಗಮನಕ್ಕೆ ತರಬೇಕು. ಇಲ್ಲದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಬೇಕು. ಸಭೆಗೆ ಸರಿಯಾದ ಮಾಹಿತಿ ನೀಡಬೇಕು ಎಂದು ಹಿಂದಿನ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ತಿಳಿಸಲಾಗಿತ್ತು. ಆದಾಗ್ಯೂ ತಾಲೂಕುವಾರು, ಹೋಬಳಿವಾರು ಹಾಗೂ ಗ್ರಾಮವಾರು ಸಭೆಗಳು ನಡೆಯುತ್ತಿಲ್ಲ ಎಂಬುದನ್ನು ಸಹಿಸಲಾಗುವುದಿಲ್ಲ ಎಂದು ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರು ತಿಳಿಸಿದರು.
ಸಭೆಯಲ್ಲಿ ಚರ್ಚಿಸಿದ ವಿಷಯಗಳ ಬಗ್ಗೆ ತಾಲೂಕುಮಟ್ಟದ ಅಧಿಕಾರಿಗಳಿಗೆ ತಾವು ತಿಳಿಸಿದಾಗ್ಯೂ ಅವರು ಸ್ಪಂದನೆ ಮಾಡುತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಸಭೆಗೆ ತಿಳಿಸಿದರು. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿದೆ. ಇದನ್ನು ಸಮಿತಿಯು ಗಂಭೀರವಾಗಿ ಪರಿಗಣಿಸಿದೆ ಎಂದು ಎಲ್ಲ ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿ ಎಂದು ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.
ತಾಪಂ ಇಓ ಹಾಜರಾತಿಗೆ ಠರಾವು: ಜನರಿಗೆ ಅನುಕೂಲವಾಗಲು ರಾಜ್ಯ ಸರ್ಕಾರವು ರೂಪಿಸಿರುವ ಎಲ್ಲಾ ಗ್ಯಾರಂಟಿ ಯೋಜನೆಗಳು ಸರಿಯಾಗಿ ಅನುಷ್ಠಾನವಾಗಬೇಕೆಂದೇ ಸರ್ಕಾರ ಈ ಬಗ್ಗೆ ಮೇಲ್ವಿಚಾರಣೆ ಮಾಡಲು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿಗಳನ್ನು ರಚಿಸಿದೆ. ಈ ಸಮಿತಿಯಲ್ಲಿ ಚರ್ಚೆಯಾಗುವ ವಿಷಯಗಳ ಬಗ್ಗೆ ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ತಾಲೂಕು, ಹೋಬಳಿ, ಗ್ರಾಮ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಿಳಿಸಬೇಕು. ಅಂದಾಗ ಮಾತ್ರ ಸಭೆ ನಡೆಸಿ ಚರ್ಚೆ ನಡೆಸಿದ್ದಕ್ಕೆ ಸಾರ್ಥಕವಾಗುತ್ತದೆ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯವಾಗುವ ವಿಷಯಗಳ ಬಗ್ಗೆ ತಾಲೂಕು ಅಧಿಕಾರಿಗಳಿಗೆ ತಿಳಿಯಬೇಕಾದಲ್ಲಿ ಈ ಸಭೆಗೆ ಎಲ್ಲ ತಾಲೂಕಿನ ತಾಲೂಕು ಪಂಚಾಯತ್ ಕಾರ್ಯನಿರ್ವಹಕ ಅಧಿಕಾರಿಗಳು ಸಹ ಬರಬೇಕಾಗುತ್ತದೆ. ಇನ್ಮುಂದೆ ಜಿಲ್ಲಾ ಕೇಂದ್ರದಲ್ಲಿ ನಡೆಯುವ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಗಳಿಗೆ ಕಡ್ಡಾಯವಾಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸಹ ಭಾಗಿಯಾಗಲು ಈ ಸಭೆಯಲ್ಲಿ ಠರಾವು ಪಾಸು ಮಾಡಬೇಕು ಎಂದು ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರು ತಿಳಿಸಿದರು. ಇದಕ್ಕೆ ಸಭೆಯಲ್ಲಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿಯ ಎಲ್ಲ ಸದಸ್ಯರು ಒಪ್ಪಿಗೆ ಸೂಚಿಸಿದರು. ಸಭೆಯಲ್ಲಿ ಅಂತಿಮವಾಗಿ ತಾಲೂಕು ಪಂಚಾಯತ್ ಇಓ ಅವರ ಹಾಜರಾತಿಗೆ ನಿರ್ಣಯ ಮಾಡಲಾಯಿತು.
ತಾಲೂಕುಮಟ್ಟದಲ್ಲಿ ಸಹ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿಯ ಸಭೆಗಳು ನಿಯಮಿತವಾಗಿ ನಡೆಯಬೇಕು. ಹೋಬಳಿ ಮತ್ತು ಗ್ರಾಮಮಟ್ಟದ ಅಧಿಕಾರಿಗಳಿಂದ ತಾಲೂಕುಮಟ್ಟದ ಅಧಿಕಾರಿಗಳು ಸರಿಯಾಗಿ ಮಾಹಿತಿ ಪಡದು ಮೇಲ್ವಿಚಾರಣೆ ಮಾಡಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿಯ ಉಪಾಧ್ಯಕ್ಷರಾದ ಹನುಮಂತಪ್ಪ ಜಾಲಿಬೆಂಚಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಯಾ ತಾಲೂಕುಗಳಲ್ಲಿ ಯಾವ ಯಾವ ಕಡೆಗೆ ನ್ಯಾಯಬೆಲೆ ಅಂಗಡಿಗಳಿವೆ. ಯಾವ ಸಮಯಕ್ಕೆ ರೇಷನ್ ನೀಡುತ್ತಾರೆ ಎಂಬುದರ ಬಗ್ಗೆ ನ್ಯಾಯಬೆಲೆ ಅಂಗಡಿಗಳಿಂದ ಮಾಹಿತಿ ಇಲ್ಲ. ನ್ಯಾಯಬೆಲೆ ಅಂಗಡಿಕಾರರು ಮನಸಿಗೆ ಬಂದಂತೆ ರೇಷನ್ ಹಂಚುತ್ತಾರೆ. ಯಾವುದೇ ಸರ್ಕಾರದ ಯೋಜನೆಗಳ ಲಾಭವು ಸಾರ್ವಜನಿಕರಿಗೆ ಸಮರ್ಪಕವಾಗಿ ದೊರೆಯಬೇಕು ಎಂಬುದು ನಮ್ಮ ಉದ್ದೇಶವಾಗಿದೆ. ಈ ಬಗ್ಗೆ ಆಹಾರ ಇಲಾಖೆಯ ಅಧಿಕಾರಿಗಳು ಸರಿಯಾಗಿ ಮೇಲ್ವಿಚಾರಣೆ ಮಾಡಬೇಕು ಎಂದು ಸಮಿತಿಯ ಉಪಾಧ್ಯಕ್ಷರಾದ ಗಫೂರ್‌ಸಾಬ್ ಅವರು ಸೂಚನೆ ನೀಡಿದರು.
ಕೆಲವು ಕಡೆಗಳಲ್ಲಿ ಸರಿಯಾದ ಬೀದಿದೀಪಗಳ ವ್ಯವಸ್ಥೆ ಇಲ್ಲ. ಇನ್ನು ಕೆಲವು ಕಡೆ ಅಪಾಯಕಾರಿ ರೀತಿಯಲ್ಲಿ ವಿದ್ಯುತ್ ಪರಿವರ್ತಕಗಳನ್ನು ಕೆಳಗಡೆ ಹಾಕಲಾಗಿದೆ. ಈ ಬಗ್ಗೆ ಜೆಸ್ಕಾಂ ಅಧಿಕಾರಿಗಳು ಪರಿಶೀಲಿಸಬೇಕು ಎಂದು ಸಮಿತಿಯ ಉಪಾಧ್ಯಕ್ಷರಾದ ನಾಗೇಂದ್ರ ಮಠಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆಲವು ತಾಲೂಕುಗಳಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಸರಿಯಾದ ರೀತಿಯಲ್ಲಿ ಸಾರ್ವಜನಿಕರಿಗೆ ವಿತರಣಾ ವ್ಯವಸ್ಥೆ ಇಲ್ಲ. ಕೆಲವು ಕಡೆ ಸರಿಯಾದ ಬಸ್ಸಿನ ವ್ಯವಸ್ಥೆ ಇಲ್ಲ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸಬೇಕು ಎಂದು ಸದಸ್ಯರಾದ ಮೆಹಬೂಬಸಾಬ್ ಮುದ್ದಾಪುರ ಅವರು ಸಲಹೆ ಮಾಡಿದರು.
ಯೋಜನೆಗಳ ಪ್ರಗತಿ: ಗೃಹಲಕ್ಷ್ಮೀ ಯೋಜನೆಯ ಸಹಾಯಧನವನ್ನು ಸಕಾಲಕ್ಕೆ ಫಲಾನುಭವಿಗಳಿಗೆ ತಲುಪಿಸಲಾಗುತ್ತಿದೆ. ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 3,52,582 ಫಲಾನುಭವಿಗಳಿಗೆ 301.08 ಕೋಟಿ ರೂ. ವೆಚ್ಚ ಭರಿಸಲಾಗಿದೆ. ಶಕ್ತಿ ಯೋಜನೆಯಡಿ ಇದುವರೆಗೆ 253.23 ಕೋಟಿ ರೂ. ವೆಚ್ಚ ಭರಿಸಲಾಗಿದೆ. ಯುವನಿಧಿ ಯೋಜನೆಯಡಿ ಜಿಲ್ಲೆಯಾದ್ಯಂತ ಒಟ್ಟು 107432 ಪದವಿ ಹಾಗೂ 896 ಡಿಪ್ಲೋಮಾ ಪೂರ್ಣಗೊಳಿಸಿದ ನೋಂದಾಯಿತ ಫಲಾನುಭವಿಗಳ ಖಾತೆಗೆ ಸಹಾಯಧನ ವರ್ಗಾಯಿಸಲಾಗಿದೆ ಎಂದು ಸಂಬಂಧಿಸಿದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸಮಿತಿಯ ಸದಸ್ಯರಾದ ಶಂಕರಗೌಡ ತುರುವಿಹಾಳ, ನಜೀರ್ ಪಂಜಾಬಿ, ಬಸವರಾಜ ಹೆಚ್‌ಪಿ ಜಾಲಹಳ್ಳಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎಸ್.ಚಂದ್ರಶೇಖರ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಿ.ಯು.ಹುಡೇದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನವೀನ್ ಕುಮಾರ್, ಜಿಲ್ಲಾ ಉದ್ಯೋಗಾಧಿಕಾರಿ ನವೀನಕುಮಾರ್ ಸಂಗೇಪಾಗ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಿಲ್ಲಾ ವ್ಯವಸ್ಥಾಪಕ ಹರೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಗವಿಸಿದ್ದಪ್ಪ ಹೊಸಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಭೆಯಲ್ಲಿ ಇದ್ದರು.