World AIDS Day: District level quiz program

ಹೆಚ್.ಐ.ವಿ. ಮುಕ್ತ ಭಾರತ ನಿರ್ಮಾಣಕ್ಕೆ ವಿವಿಧ ರೀತಿಯ ಜಾಗೃತಿ- ಡಾ. ಎ.ಶಶಿಧರ
ಕೊಪ್ಪಳ ಸೆಪ್ಟೆಂಬರ್ 01 (ಕರ್ನಾಟಕ ವಾರ್ತೆ): ಹೆಚ್.ಐ.ವಿ. ಮುಕ್ತ ಭಾರತ ನಿರ್ಮಾಣ ಮಾಡಲು ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಎ.ಶಶಿಧರ ಹೇಳಿದರು.
ಅವರು ಶನಿವಾರ ಕೊಪ್ಪಳ ನಗರದ ಹಳೇ ಜಿಲ್ಲಾಸ್ಪತ್ರೆ ಆವರಣದ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಅಧಿಕಾರಿಗಳ ಕಾರ್ಯಾಲಯದಲ್ಲಿ ವಿಶ್ವ ಏಡ್ಸ್ ದಿನದ ಪ್ರಯುಕ್ತ ಜಿಲ್ಲಾ ಮಟ್ಟದ Intensified IEC Campaign ಅಂಗವಾಗಿ ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಕೊಪ್ಪಳ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಜಿಲ್ಲಾ ಮಟ್ಟದ ರಸಪ್ರಶ್ನೆ ಕಾರ್ಯಕಮ ಉದ್ಘಾಟಿಸಿ ಮಾತನಾಡಿದರು.
ಹೆಚ್.ಐ.ವಿ. ಏಡ್ಸ್ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಹದಿಹರೆಯದಲ್ಲಿ ಗರ್ಭದಾರಣೆ, ಹೆಚ್.ಐ.ವಿ. ಸೋಂಕಿಗೆ ಒಳಗಾಗುವುದನ್ನು ತಡೆಯುವ ಹಾಗೂ ಉತ್ತಮ ಆರೋಗ್ಯದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ “ರಸಪ್ರಶ್ನೆ” ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮ, ಸ್ನೇಹಿತರ ಒತ್ತಡಕ್ಕೆ ಮಣಿದು ಕ್ಷಣಿಕ ಸುಖಕ್ಕಾಗಿ ಜೀವನವನ್ನೆ ಹಾಳುಮಾಡಿಕೊಳ್ಳುವ ರೀತಿ ವರ್ತಿಸಬಾರದು. 2030ರ ವೇಳೆಗೆ ಹೆಚ್.ಐ.ವಿ. ಮುಕ್ತಭಾರತ ಮಾಡುವ ನಿಟ್ಟಿನಲ್ಲಿ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, 8, 9 ಮತ್ತು 11ನೇ ತರಗತಿ ಮಕ್ಕಳಿಗೆ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಮಾಡಲಾಗುತ್ತಿದೆ. ಎಲ್ಲರೂ ಇದರ ಸದುಪಯೋಗ ಪಡೆದುಕೊಂಡು ಉತ್ತಮ ಆರೋಗ್ಯ ಹೊಂದಬೇಕು ಎಂದರು.
ಕಳೆದ ಬಾರಿ ನಮ್ಮ ಜಿಲ್ಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟ ಮತ್ತು ವಿಭಾಗೀಯ (ಅಂತರರಾಜ್ಯ) ಮಟ್ಟದವರೆಗೂ ಸ್ಪರ್ಧಿಸಿದ್ದು, ಈ ಬಾರಿ ರಾಷ್ಟ್ರ ಮಟ್ಟದಲ್ಲಿ ಜಯಶೀಲರಾಗಲಿ ಎಂದು ಆಶಿಸಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ತಯಾರು ಮಾಡಿ ಕಾಳಜಿಯಿಂದ ಕರೆತಂದ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗೆ ಅಭಿನಂದಿಸಿದರು.
*ವಿಜೇತರಿಗೆ ನಗದು ಬಹುಮಾನ ವಿತರಣೆ:* ರಸಪ್ರಶ್ನೆ ಸ್ಪರ್ಧೆಯಲ್ಲಿ 56 ಫ್ರೌಢ ಶಾಲೆ ಹಾಗೂ ಪ್ರಥಮ ಪಿಯು ಕಾಲೇಜುಗಳು ಭಾಗವಹಿಸಿದ್ದು, ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಕುಷ್ಟಗಿಯ ಕ್ರೈಸ್ ದ ಕಿಂಗ್ ಶಾಲೆಯ ವಿದ್ಯಾರ್ಥಿಗಳಾದ ಶ್ರಾವಣಿ ಮತ್ತು ಶ್ರೇಯಾಗೆ ರೂ. 6 ಸಾವಿರ ನಗದು ಬಹುಮಾನ ವಿತರಣೆ ಮಾಡಲಾಯಿತು. ಅದೇ ರೀತಿ ದ್ವಿತೀಯ ಸ್ಥಾನ ಪಡೆದ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಬಸಮ್ಮ ಮತ್ತು ಅವನೀತಗೆ ರೂ. 5 ಸಾವಿರ ಹಾಗೂ ತೃತೀಯ ಸ್ಥಾನ ಪಡೆದ ಭಾಗ್ಯನಗರದ ಜ್ಞಾನಬಂಧು ಪದವಿ ಪೂರ್ವ ಕಾಲೇಜಿನ ಐಶ್ವರ್ಯ ಮತ್ತು ಸೌಭಾಗ್ಯಗೆ ರೂ. 4 ಸಾವಿರಗಳ ನಗದು ಬಹುಮಾನ ವಿತರಿಸಲಾಯಿತು. ಪ್ರಥಮ ಸ್ಥಾನದಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಕಳುಹಿಸಲಾಗುವುದು ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಇನ್‌ವಾಲ್ ಸಂಸ್ಥೆಯ ಹೊನ್ನಕೇರಿ ಮಲ್ಲಪ್ಪ, ನವೀನ ಅವರು ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಶಿಕ್ಷಕರು, ಉಪನ್ಯಾಸಕರು, ಆರೋಗ್ಯ ಇಲಾಖೆಯ ಮಾಲತೇಶ, ದಾನನಗೌಡ, ಚಿದಾನಂದ, ಶಿವಾನಂದ, ಅಮರೇಶ, ರಾಜೀವ, ಕೃಷ್ಣಾ, ಅನಂತ್, ಸಿದ್ರಾಮಪ್ಪ, ಕಾಳಪ್ಪ, ರಾಘವೇಣಿ ಸೇರಿದಂತೆ ಸ್ಥಳಿಯ ಸಂಘ ಸಂಸ್ಥೆಗಳ ಸಿಬ್ಬಂದಿಗಳು ಉಪಸ್ಥಿತರಿದ್ದರು.