
Organize the district level awareness program of the PMFME project neatly – Dr. Suresh B. Itnal


ಕೊಪ್ಪಳ ಸೆಪ್ಟೆಂಬರ್ 10 (ಕರ್ನಾಟಕ ವಾರ್ತೆ): ಸೆಪ್ಟೆಂಬರ್ 18ರಂದು ನಡೆಯುವ ಪಿ.ಎಂ.ಎಫ್.ಎಂ.ಇ ಯೋಜನೆಯ ಜಿಲ್ಲಾ ಮಟ್ಟದ ಅರಿವು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಮ್ಮಿಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ.ಇಟ್ನಾಳ ಹೇಳಿದರು.
ಅವರು ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಪಿ.ಎಂ.ಎಫ್.ಎಂ.ಇ ಯೋಜನೆಯ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಮಾವಿನಕಾಯಿ ಉಪ್ಪಿನಕಾಯಿ, ಸಿರಿಧಾನ್ಯ ಸಂಸ್ಕರಣೆ ಹಾಗೂ ಶೇಂಗಾ ಚಿಕ್ಕಿ ಸೇರಿದಂತೆ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆಗೆ ಪಿ.ಎಂ.ಎಫ್.ಎಂ.ಇ ಯೋಜನೆಯಡಿ ಶೇ. 50 ಸಹಾಯಧನದವಿದ್ದು, ಇದರ ಬಗ್ಗೆ ಅರಿವು ಮೂಡಿಸಲು ಜಿಲ್ಲಾ ಮಟ್ಟದ ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ. ಪಿ.ಎಂ.ಎಫ್.ಎಂ.ಇ ಯೋಜನೆಯ ಅಡಿಯಲ್ಲಿ ಸಲ್ಲಿಸಿದ ಅರ್ಜಿಗಳನ್ನು ಬ್ಯಾಂಕುಗಳು ಗರಿಷ್ಟ 15 ದಿನಗಳ ಒಳಗಾಗಿ ವಿಲೇವಾರಿ ಮಾಡಲು ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಕ್ರಮ ವಹಿಸಬೇಕು. ವಿಲೇವಾರಿಯಾಗದ ಅರ್ಜಿಗಳಿಗೆ ನಿಗದಿತ ಕಾರಣವನ್ನು ಪಟ್ಟಿ ಮಾಡಿ ಅದಕ್ಕೆ ಸಂಬಂಧಿಸಿದ ಪರಿಹಾರವನ್ನು ಕಂಡುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಗೆ 50 ಅರ್ಜಿಯಂತೆ ಗುರಿ ನಿಗದಿಪಡಿಸಿ ಒಟ್ಟು ಕನಿಷ್ಟ 300 ಸಂಖ್ಯೆಯ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಿ.ಎಂ.ಎಫ್.ಎಂ.ಇ ಯೋಜನೆಯ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳಲು, ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳಾದ ತೋಟಗಾರಿಕೆ ಇಲಾಖೆ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಮೀನುಗಾರಿಗಿಕೆ ಇಲಾಖೆ, ಲೀಡ್ ಬ್ಯಾಂಕ್ ಮತ್ತು ಎನ್.ಆರ್.ಎಲ್.ಎಮ್. ವಿಭಾಗದ, ಜಿಲ್ಲಾ ವ್ಯವಸ್ಥಾಪಕರು, ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರು ಮಾತನಾಡಿ, ಪ್ರಧಾನ ಮಂತ್ರಿ ಮೈಕ್ರೋ ಫುಡ್ ಪ್ರೊಸೆಸಿಂಗ್ ಎಂಟರ್‌ಪ್ರೆಸಸ್ ಇದು “ಆತ್ಮನಿಕ್ಟರ್ ಭಾರತ” ಅಭಿಯಾನದ ಅಡಿಯಲ್ಲಿ ಪ್ರಾರಂಭಿಸಲಾದ ಕೇಂದ್ರ ಪ್ರಾಯೋಜಿತ ಯೋಜನೆಯಾಗಿದ್ದು, ಆಹಾರ ಸಂಸ್ಕರಣಾ ಉದ್ಯಮದಲ್ಲಿನ ಅಸಂಘಟಿತ ಸೂಕ್ತ ಉದ್ಯಮಗಳ ಸ್ಪರ್ದಾತ್ಮಕತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಇದು ಅಸ್ತಿತ್ವದಲ್ಲಿರುವ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ಯಮಗಳನ್ನು ಉನ್ನತೀಕರಿಸಲು ಹಣಕಾಸು, ತಾಂತ್ರಿಕ ಮತ್ತು ವ್ಯಾಪಾರ ಬೆಂಬಲವನ್ನು ಒದಗಿಸುತ್ತದೆ. ಒಟ್ಟಾರೆಯಾಗಿ ಕೇಂದ್ರ ಸರ್ಕಾರದ ರೂ. 6 ಲಕ್ಷ ಹಾಗೂ ರಾಜ್ಯ ಸರ್ಕಾರ್ದ ರೂ. 9. ಲಕ್ಷ ಸಹಾಯಧನ ಸೇರಿ ಈ ಯೋಜನೆಯಡಿಯಲ್ಲಿ ಶೇ. 50 ರಷ್ಟು ಅಥವಾ ಗರಿಷ್ಟ ರೂ. 15 ಪಕ್ಷವನ್ನು ಸಹಾಯಧನ ಒದಗಿಸಲಾಗುತ್ತದೆ. ಪಿ.ಎಂ.ಎಫ್.ಎಂ.ಇ ಯೋಜನೆಯ ಅರಿವು ಕಾರ್ಯಕ್ರಮವನ್ನು ಸೆ. 18 ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಪ್ರಧಾನ ಮಂತ್ರಿ ಮೈಕ್ರೋ ಫುಡ್ ಪ್ರೊಸೆಸಿಂಗ್ ಎಂಟರ್‌ಪ್ರೆಸಸ್ ಯೋಜನೆಯಲ್ಲಿ ಇದುವರೆಗೂ ಒಟ್ಟು 427 ಅರ್ಜಿಗಳು ಸಲ್ಲಿಕೆಯಾಗಿದ್ದು ಅದರಲ್ಲಿ 188 ಅರ್ಜಿಗಳು ಫಲಾನುಭವಿಗಳಿಗೆ ವಿಲೇವಾರಿಯಾಗಿರುತ್ತವೆ. 194 ಅರ್ಜಿಗಳು ವಿವಿಧ ಕಾರಣಗಳಿಂದ ತಿರಸ್ಕರಿಸಲ್ಪಟ್ಟಿರುತ್ತವೆ. ಉಳಿದಂತೆ 45 ಅರ್ಜಿಗಳು ಸಾಲ ಮಂಜೂರಾತಿಗೆ ಬ್ಯಾಂಕ್ಯನಲ್ಲಿ ಪ್ರಕ್ರಿಯೆಯಲ್ಲಿರುತ್ತವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಿ.ಎಂ.ಎಫ್.ಎಂ.ಇ ಯೋಜನೆಗೆ ಸಂಬಂಧಿಸಿದ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು




