Who should be ensured not to be left out of the survey – District Collector Dr. Suresh B. Itnal




ಕೊಪ್ಪಳ ಸೆಪ್ಟೆಂಬರ್ 12 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತ ಸಮೀಕ್ಷೆಯಲ್ಲಿ ಯಾರು ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
ಅವರು ಶುಕ್ರವಾರ ಕೊಪ್ಪಳ ಜಿಲ್ಲಾ ಪಂಚಾಯತ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕೊಪ್ಪಳ ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆ-2025ರ ಜಿಲ್ಲಾ ಮಟ್ಟದ ಮಾಸ್ಟರ್ ಟ್ರೈನರಗಳಿಗಾಗಿ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಾಗಾರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ತಾವು ಮಾಡುವ ಕೆಲಸ ಬಹಳ ಜವಾಬ್ದಾರಿಯಿಂದ ಇರುವುದರಿಂದ ಯಾವುದೇ ಮನೆಗಳು ಸಮೀಕ್ಷೆಯಲ್ಲಿ ಬಿಟ್ಟು ಹೋಗದಂತೆ ಎಚ್ಚರವಹಿಸಬೇಕು. ಸಮೀಕ್ಷೆಯಲ್ಲಿರುವ ಎಲ್ಲಾ ಪ್ರಶ್ನೆಗಳ ಬಗ್ಗೆ ಮೊದಲು ತಾವು ತಿಳಿದುಕೊಂಡು ಅರ್ಥಮಾಡಿಕೊಳ್ಳಬೇಕು. ಸಮಸ್ಯೆಗಳಿದ್ದರೆ ರಾಜ್ಯ ಮಟ್ಟದ ಮಾಸ್ಟರ್ ಟ್ರೇನರಗಳಿಂದ ಕೇಳಿ ತಿಳಿದಿಕೊಳ್ಳಬೇಕು. ಗಣತಿದಾರರು ಪ್ರತಿ ಮನೆಗಳ ಸಮೀಕ್ಷೆಗೆ ಹೋದಾಗ ತಮಗೆ ನೀಡಿದ ನೇಮಕಾತಿ ಆದೇಶ ಪ್ರತಿ ಮತ್ತು ಐಡಿ ಕಾರ್ಡಗಳನ್ನು ಕಡ್ಡಾಯವಾಗಿ ಧರಿಸಿಕೊಂಡು ಹೋಗಬೇಕು. ಸಮಗ್ರ ಮಾಹಿತಿ ಇರುವವರಿಂದ ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆಯಬೇಕು. ಮನೆಯಲ್ಲಿ ಯಾರು ಇಲ್ಲದಿದ್ದರೆ ಮತ್ತೊಮ್ಮೆ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬೇಕು ಎಂದು ಹೇಳಿದರು.
ಈ ಸಮೀಕ್ಷೆ ಕಾರ್ಯಕ್ಕೆ ಕೊಪ್ಪಳ ಜಿಲ್ಲೆಯಲ್ಲಿ 2685 ಪ್ರಾಥಮಿಕ ಶಾಲೆಯ ಶಿಕ್ಷಕರನ್ನು ನಿಯೋಜನೆ ಮಾಡಲಾಗಿದೆ. 150 ಮನೆಗಳಿಗೆ ಒಬ್ಬ ಗಣತಿದಾರರು ಇರಲಿದ್ದಾರೆ. ಜಿಲ್ಲೆಯಲ್ಲಿ ಅಂದಾಜು 3 ಲಕ್ಷ 55 ಸಾವಿರ ಮನೆಗಳಿದ್ದು, ಈ ಎಲ್ಲಾ ಮನೆಗಳಿಗೆ ಈಗಾಗಲೇ ಜೆಸ್ಕಾಂನವರು ಶೇ. 85 ಪ್ರತಿಶತ ಜಿಯೊ ಟ್ಯಾಗ್ ಮಾಡಿದ್ದಾರೆ ಇದನ್ನು ಮಾಡದ ಮನೆಗಳಿಗೆ ಚೀಟಿಗಳನ್ನು ಅಂಟಿಸಲಾಗಿದೆ ಎಂದರು.
ನಮ್ಮ ಸಂವಿಧಾನದ ಪ್ರಸ್ತಾವನೆಯಲ್ಲಿ ಹೇಳಿದಂತೆ ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ನೀಡುವುದಾಗಿದೆ. ಅಸಮಾನತೆ, ಲಿಂಗ ತಾರತಮ್ಯ, ವರ್ಗ, ಧರ್ಮ, ಜಾತಿ ಆಧಾರಿತ ಅಸಮಾನತೆ ಹೋಗಲಾಡಿಸಿ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಿ ಸಮ ಸಮಾಜ ನಿರ್ಮಾಣ ಮಾಡುವುದಾಗಿದೆ. ಪ್ರತಿ 10 ವರ್ಷಕ್ಕೆ ಸರಕಾರ ಜನರ ಸಾಮಾಜಿಕ. ಶೈಕ್ಷಣಿಕ ಸ್ಥಿತಿಗತಿಗಳ ಅಧ್ಯಯನ ಮಾಡುತ್ತದೆ ಎಂದು ಹೇಳಿದರು.
ಜಿಲ್ಲಾ ಮಟ್ಟದ ಮಾಸ್ಟರ್ ತರಬೇತಿದಾರರು ಈ ತರಬೇತಿ ಕಾರ್ಯಾಗಾರದಲ್ಲಿ ಹೇಳಿದ್ದನ್ನು ಸರಿಯಾಗಿ ತಿಳಿದುಕೊಂಡು ಮನೆ-ಮನೆಗೆ ಭೇಟಿ ನೀಡುವ ಗಣತಿದಾರರಿಗೆ ತಾವು ಚೆನ್ನಾಗಿ ತಿಳಿಸಬೇಕು. ಯಾವುದೇ ಸಮಸ್ಯೆಗಳಿದ್ದರೆ ಮೇಲಧಿಕಾರಿಗಳ ಗಮನಕ್ಕೆ ತರಬೇಕು. ಗಣತಿದಾರರು ತಮ್ಮ ಮನೆಗಳ ಸಮೀಕ್ಷೆಗೆ ಬಂದಾಗ ಜಿಲ್ಲೆಯ ಸಾರ್ವಜನಿಕರು ಅವರಿಗೆ ಸರಿಯಾದ ಮಾಹಿತಿ ನೀಡಿ ಸಹಕರಿಸಬೇಕೆಂದು ಹೇಳಿದರು.
ರಾಜ್ಯ ಮಟ್ಟದ ಮಾಸ್ಟರ್ ಟ್ರೈನರ್ ತರಬೇತಿದಾರರಾದ ಕೊಪ್ಪಳ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕರಾದ ಅಜ್ಜಪ್ಪ ಸೊಗಲದ., ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಜ್ಮಿರ್ ಅಲಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕರಾದ ಮಂಜುನಾಥ ಗುಂಡೂರ್ ಅವರು ತರಬೇತಿ ಕಾರ್ಯಾಗಾರದ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ನಾಗಮಣಿ ಹೊಸಮನಿ. ವಾರ್ತಾ ಇಲಾಖೆಯ ಸಹಾಯಕ ನಿರ್ದೆಶಕ ಸುರೇಶ ಜಿ. ಸೇರಿದಂತೆ ರಾಜ್ಯ ಮತ್ತು ಜಿಲ್ಲಾ ಮಟ್ಟದ ಮಾಸ್ಟರ ಟ್ರೈನರಗಳು ಈ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.