Meeting of the Women and Child Welfare Committee of the Karnataka Legislative Assembly

ಸರ್ಕಾರದ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿ ಪರೀಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು- ಎನ್.ಎಚ್. ಕೋನರಡ್ಡಿ
ಕೊಪ್ಪಳ ಅಕ್ಟೋಬರ್ 09 (ಕರ್ನಾಟಕ ವಾರ್ತೆ): ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿ ಪರೀಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು. ಸರಿಯಾಗಿ ಕರ್ತವ್ಯ ನಿರ್ವಹಿಸದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷೀಣ್ಯವಾಗಿ ಕ್ರಮ ಜರುಗಿಸಬೇಕಾಗುತ್ತದೆ ಎಂದು ಕರ್ನಾಟಕ ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು ಹಾಗೂ ನವಲಗುಂದಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಎನ್.ಎಚ್. ಕೋನರಡ್ಡಿ ಹೇಳಿದರು.
ಅವರು ಗುರುವಾರ ಕೊಪ್ಪಳ ಜಿಲ್ಲಾ ಪಂಚಾಯತ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಕರ್ನಾಟಕ ವಿಧಾನ ಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ರಾಜ್ಯದ ವಿವಿಧ ಜಿಲ್ಲೆಗಳಿಗೆ ನಾವು ಹೊರಟಿರುವ ಉದ್ದೇಶ ಆಯಾ ಜಿಲ್ಲೆಯ ಸಮಸ್ಯೆಗಳನ್ನು ತಿಳಿದುಕೊಳ್ಳುವುದಾಗಿದೆ. ಸರ್ಕಾರದ ಹಲವಾರು ಕಾರ್ಯಕ್ರಮಗಳು ಸರಿಯಾಗಿ ಅನುಷ್ಠಾನಗೊಳ್ಳದಿದ್ದರೆ ಏನು ಪ್ರಯೋಜನ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಮಿಷನ್ ಇಂದ್ರ ಧನುಷ್, ಮಾತೃ ವಾತ್ಸಲ್ಯ ಯೋಜನೆ, ಮಕ್ಕಳ ರಕ್ಷಣಾ ಘಟಕ, ಬಾಲ ನ್ಯಾಯ ಮಂಡಳಿ, ಮಕ್ಕಳ ಕಲ್ಯಾಣ ಸಮಿತಿ, ದೇವದಾಸಿ ಮಕ್ಕಳಿಗೆ ಸಹಾಯ ಸೇರಿದಂತೆ ಇತರೆ ಹಲವಾರು ಯೋಜನೆಗಳ ಬಗ್ಗೆ ಸರಿಯಾಗಿ ತಿಳಿದುಕೊಂಡು ಅವುಗಳನ್ನು ಜಿಲ್ಲೆಯಲ್ಲಿ ಪರೀಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕೆಂದರು.
ಇವತ್ತು ಕೊಪ್ಪಳದಲ್ಲಿ ಸಭೆ ನಡೆಸಿದ್ದೆವೆ ನಾಳೆ ರಾಯಚೂರು ಜಿಲ್ಲೆಯಲ್ಲಿ ಸಭೆ ಮಾಡಲಿದ್ದೆವೆ. ಅಧಿಕಾರಿಗಳು ಸಭೆಗೆ ತಪ್ಪು ಮಾಹಿತಿ ನೀಡಭಾರದು. ಹಾಗೇನಾದರು ಮಾಡಿದರೆ ಅದಕ್ಕೆ ತಮ್ಮನೆ ಜವಾಬ್ದಾರರನ್ನಾಗಿ ಮಾಡಲಾಗುವುದು. ಕಳೆದ ಕೆಲವು ತಿಂಗಳ ಹಿಂದೆ ಯಾದಗಿರಿ ಜಿಲ್ಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಅದು ರಾಷ್ಟ್ರವ್ಯಾಪಿ ಸುದ್ದಿಯಾಗುವುದರ ಜೊತೆಗೆ ಸಮಾಜವೆ ತಲೆ ತಗ್ಗಿಸುವಂತಹ ಘಟನೆ ನಡೆಯಿತು. ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಪೋಕ್ಸೊ ಪ್ರಕರಣಗಳು ಎಷ್ಟಾಗಿವೆ ಮಾಹಿತಿ ನೀಡಿ ಅಂತಹ ಘಟನೆಗಳನ್ನು ಜಿಲ್ಲೆಯಲ್ಲಿ ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಹೇಳಿದರು.

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದರೊಂದಿಗೆ ವಿದ್ಯಾರ್ಥಿಗಳಿಗೆ ಮತ್ತು ಮಹಿಳೆಯರಿಗಾಗಿ ಇರುವ ಸರ್ಕಾರದ ಸೌಲಭ್ಯಗಳು ಹಾಗೂ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಸರಿಯಾಗಿ ಅನುಷ್ಠಾನಗೊಳಿಸುವುದರ ಜೊತೆಗೆ ಅವುಗಳ ಬಗ್ಗೆ ಜಾಗೃತಿ ಮೂಡಿಸುವುದು ಈ ಸಮಿತಿಯ ಮುಖ್ಯ ಉದ್ದೇಶವಾಗಿದೆ. ಹೆಣ್ಣು ಮಕ್ಕಳ ರಕ್ಷಣೆ ಹಾಗೂ ಶಿಕ್ಷಣವನ್ನು ಉತ್ತೇಜಿಸಬೇಕು. ಮಹಿಳಾ ಮತ್ತು ಮಕ್ಕಳ ಅಭೀವೃದ್ಧಿ ಇಲಾಖೆಯ ಉಪನಿರ್ದೇಶಕರು, ಸಿಡಿಪಿಓ.ಗಳು ತಮ್ಮ ಹಂತದಲ್ಲಿ ಮಾತ್ರ ಕೆಲಸ ಮಾಡದೇ ಇತರೆ ಇಲಾಖೆಗಳೊಂದಿಗೆ ಸಮನ್ವಯತೆಯೊಂದಿಗೆ ಕೆಲಸ ಮಾಡಬೇಕು. ಈ ಭಾಗದ ಶೈಕ್ಷಣಿಕ ಅಭಿವೃದ್ಧಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಸಾಕಷ್ಟು ಅನುದಾನ ನೀಡಲಾಗುತ್ತಿದೆ. ಸಿ.ಎಸ್.ಆರ್ ಅನುದಾನದಡಿ ಗಣಿತ, ವಿಜ್ಞಾನ ಮತ್ತು ಇಂಗ್ಲೀಷ್ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅವಕಾಶವಿದ್ದು, ಅದನ್ನು ಬಳಕೆ ಮಾಡಿಕೊಂಡು ಜಿಲ್ಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಬಾಲ್ಯ ವಿವಾಹಗಳು ನಡೆಯದಂತೆ ನೋಡಿಕೊಂಡು ಎಲ್ಲಾ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಈ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪ್ರತಿ ತಿಂಗಳ ಮಾಸಿಕ ವರದಿ ಸಲ್ಲಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಧಾನಸಭಾ ಸದಸ್ಯರು ಹಾಗೂ ಕರ್ನಾಟಕ ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ಹೆಚ್.ಎ. ಇಕ್ಬಾಲ್ ಹುಸೇನ್ ಅವರು ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ಕಿಡ್ನಾಫ್, ರೇಫ್, ಮಿಸ್ಸಿಂಗ್, ಪೋಕ್ಸೋ ಪ್ರಕರಣಗಳ ಸಂಖ್ಯೆ ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿರುವುದರಿಂದ ಇದರ ನಿಯಂತ್ರಣಕ್ಕೆ ಅಧಿಕಾರಿಗಳು ಕಡಿವಾಣ ಹಾಕಬೇಕಿದೆ. ರಾಜ್ಯ ಮಟ್ಟದ ಈ ಸಮಿತಿಯು ಜಿಲ್ಲೆಗೆ ಬರಲು ಕಾರಣ ಇಲ್ಲಿನ ತಳಮಟ್ಟದ ಸಮಸ್ಯೆಯನ್ನು ತಿಳಿದುಕೊಳ್ಳಲು ಬಂದಿದ್ದೆವೆ. ಖಾಸಗಿಯವರ ದತ್ತು ಮಕ್ಕಳ ಕೇಂದ್ರಗಳು ದುಡ್ಡು ಮಾಡುವ ಕೇಂದ್ರಗಳಾಗಿವೆ. ನಾವು ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಾಗ. ಅಪರಾಧ ಪ್ರಕರಣಗಳ ಸಂಖ್ಯೆ ಕಡಿಮೆಯಾಗಬೇಕು. ಎಲ್ಲರಿಗೂ ರಕ್ಷಣೆ ನೀಡುವ ಜವಾಬ್ದಾರಿ ನಮ್ಮ ಮೇಲಿದೆ. ನಮ್ಮ ಮಕ್ಕಳು ಮತ್ತು ಸಮಾಜವನ್ನು ನಾವು ಸ್ವಚ್ಚವಾಗಿಡುವ ಕೆಲಸ ಮಾಡಬೇಕಿದೆ ಎಂದರು.
ಅನ್ನಭಾಗ್ಯ ಯೋಜನೆಯು ಬಡಜನರಿಗೆ ತುಂಬಾ ಅನುಕೂಲವಾಗಿದ್ದು, ಅಂತ್ಯೋದಯ ಕಾರ್ಡ್ಗಳನ್ನು ಯಾವುದೇ ಕಾರಣಕ್ಕೆ ರದ್ದು ಮಾಡಬಾರದು. ಮತ್ತೆ ರೇಷನ್ ಕಾರ್ಡ್ ಮಾಡಿಸುವುದು ಸುಲಭದ ಕೆಲಸವಲ್ಲ. ಅರ್ಹ ಮಹಿಳಾ ಕಾರ್ಮಿಕರಿಗೆ ಲೇಬರ್ ಕಾರ್ಡ್ ಮಾಡಿಸಿ, ಅವರಿಗೆ ಸಿಗುವ ಸರ್ಕಾರದ ಯೋಜನೆಗಳ ಸೌಲಭ್ಯವನ್ನು ದೊರಕಿಸಿ ಕೊಡಬೇಕು. ಅಲ್ಪಸಂಖ್ಯಾತರ ಸಮುದಾಯದ ಬಡ ಜನರಿಗೆ ಸರಳ ವಿವಾಹಕ್ಕಾಗಿ ಸರ್ಕಾರದ ಪ್ರೋತ್ಸಾಹಧನವಿದ್ದು, ಈ ಬಗ್ಗೆ ಅರಿವು ಮೂಡಿಸಿ, ಮದುವೆಯಾಗುವ ಬಡ ಹೆಣ್ಣು ಮಕ್ಕಳಿಗೆ ಈ ಯೋಜನೆಯ ಲಾಭ ಸಿಗುವಂತಾಗಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಧಾನಸಭಾ ಸದಸ್ಯರು ಹಾಗೂ ಕರ್ನಾಟಕ ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ಶರಣಗೌಡ ಕಂದಕೂರ ಅವರು ಮಾತನಾಡಿ, ನಮ್ಮ ಭಾಗದಲ್ಲಿ ಬಡತನ. ಬಾಲ್ಯವಿವಾಹ. ಮಕ್ಕಳ ಮಿಸ್ಸಿಂಗ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿರುವುದರಿಂದ ಅದನ್ನು ಸರಿಪಡಿಸುವ ಕೆಲಸವನ್ನು ನಾವು ಮಾಡಬೇಕಿದೆ. ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ. ರೇಫ್ ಕಿಡ್ನಾಫಗಳ ಸಂಖ್ಯೆ ಕಡಿಮೆಯಾಗಬೇಕಾದರೆ. ಸರಕಾರದ ವಿವಿಧ ಕಾರ್ಯಕ್ರಮಗಳ ಮೂಲಕ ಈ ಕುರಿತು ಜನರಲ್ಲಿ ಅರಿವು ಮೂಡಿಸು ಕಾರ್ಯಕ್ರಮಗಳನ್ನು ಸಂಬಂಧಿಸಿದ ಇಲಾಖೆಗಳ ಮೂಲಕ ಹಮ್ಮಿಕೊಳ್ಳಬೇಕಿದೆ. ಇಂತಹ ಪ್ರಕರಣ ನಡೆಯದಂತೆ ತಮ್ಮ ಸಲಹೆಗಳನ್ನು ನೀಡಿ. ಶಾಲಾ-ಕಾಲೇಜುಗಳಲ್ಲಿ ಈ ಕುರಿತು ಜಾಗೃತಿ ಮೂಡಿಸಬೇಕೆಂದು ಅಧಿಕಾರಿಗಳಿಗೆ ಹೇಳಿದರು.
ವಿಧಾನಸಭಾ ಸದಸ್ಯರು ಹಾಗೂ ಕರ್ನಾಟಕ ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ಕರೆಮ್ಮ ನಾಯ್ಕ ಅವರು ಮಾತನಾಡಿ, ಒಬ್ಬ ಮಹಿಳೆ ಮನೆಯಲ್ಲಿದ್ದುಕೊಂಡು ದೂರು ನೀಡಿದರೂ, ಅವಳಿಗೆ ನ್ಯಾಯ ದೊರಕಿಸಿಕೊಡಬೇಕು. ಮಕ್ಕಳ ಮತ್ತು ಮಹಿಳೆಯರ ಹಕ್ಕುಗಳ ರಕ್ಷಣೆಯ ಜೊತೆಗೆ ಅವರ ಮೇಲಿನ ದೌರ್ಜನ್ಯ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಮಾತನಾಡಿ, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ಕಾವಲು ಸಮಿತಿಗಳು ಕಾರ್ಯನಿರ್ವಹಿಸುತ್ತಿವೆ. ಅದೇ ರೀತಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿಯೂ ಮಕ್ಕಳ ಕಾವಲು ಸಮಿತಿಗಳ ರಚನೆಗಾಗಿ ಸಂಬಂಧಿಸಿದ ಇಲಾಖೆಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದಕ್ಕೆ ಅನುಮೋದನೆ ಸಿಕ್ಕ ನಂತರ ಜಿಲ್ಲೆಯ ನಗರ ಪ್ರದೇಶಗಳಲ್ಲಿಯೂ ಮಕ್ಕಳ ಕಾವಲು ಸಮಿತಿ ರಚಿಸಲಾಗುವುದು ಎಂದರು.
ಕರ್ನಾಟಕ ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಎನ್.ಎಚ್. ಕೋನರಡ್ಡಿ ಅವರು ಮಾತನಾಡಿ, ಕೊಪ್ಪಳ ಜಿಲ್ಲಾಧಿಕಾರಿಗಳು ಉತ್ತಮ ಸಲಹೆ ನೀಡಿದ್ದಾರೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿಯೂ ಮಕ್ಕಳ ಕಾವಲು ಸಮಿತಿಗಳ ರಚನೆಗೆ ಸರ್ಕಾರದಿಂದ ಅನುಮೊದನೆಗೆ ಕ್ರಮ ಕೈಗೊಳ್ಳಲಾಗುವುದು. ಅದರಂತೆ ರಾಜ್ಯಾದ್ಯಂತ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿಯೂ ಮಕ್ಕಳ ಕಾವಲು ಸಮಿತಿಗಳ ರಚನೆಗೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗಳ ರಾಜ್ಯಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
*ಸನ್ಮಾನ:* ಕರ್ನಾಟಕ ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರಿಗೆ ಜಿಲ್ಲಾಡಳಿತದ ಪರವಾಗಿ ಇದೇ ವೇಳೆ ಸನ್ಮಾನಿಸಲಾಯಿತು.
ಸಭೆಯಲ್ಲಿ ಪೋಲಿಸ್ ಮಹಾನಿರೀಕ್ಷಕರಾದ ಸತೀಶ್ ಕುಮಾರ್, ಬಳ್ಳಾರಿ ವಲಯದ ಪೊಲೀಸ್ ಮಹಾನಿರೀಕ್ಷಕರಾದ ವರ್ತಿಕ ಕಟಿಯಾರ್, ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ಧಿ, ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ವಿಭಾಗದ ಅಪರ ಆಯುಕ್ತರಾದ ಪಾಂಡ್ವೆ ರಾಹುಲ್ ತುಕಾರಾಮ್ ಹಾಗೂ ವಿಧಾನಸಭೆಯ ಅಧಿಕಾರಿಗಳು ಮತ್ತು ಕೊಪ್ಪಳ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ರಾಜ್ಯಮಟ್ಟದ ಅಧಿಕಾರಿಗಳು, ಕೊಪ್ಪಳ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.