
Prepare for Mahayogi Vemana Jayanti: Additional District Magistrate Sidrameshwar
ಕೊಪ್ಪಳ ಜನವರಿ 08 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಚರಿಸಲಾಗುವ ಮಹಾಯೋಗಿ ವೇಮನ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಅವರು ಗುರುವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಾಯೋಗಿ ವೇಮನ ಜಯಂತಿ ಆಚರಣೆ ಕುರಿತು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಮಹಾಯೋಗಿ ವೇಮನ ಜಯಂತಿಯ ಅಂಗವಾಗಿ ಇದೇ ಜನವರಿ 19ರಂದು ಬೆಳಿಗ್ಗೆ 10.30 ಗಂಟೆಗೆ ಶ್ರೀ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ವೇಮನರ ಭಾವಚಿತ್ರಕ್ಕೆ ವಿಶೇಷಪೂಜೆ, ವಿಶೇಷ ಉಪನ್ಯಾಸ ಸೇರಿದಂತೆ ಮತ್ತಿತರ ಕಾರ್ಯಕ್ರಮಗಳ ನಡೆಯಲಿವೆ. ಜಯಂತಿಯನ್ನು ಅರ್ಥಪೂರ್ಣವಾಗಿ ಮತ್ತು ವ್ಯವಸ್ಥಿತವಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಎಲ್ಲ ಗಣ್ಯರಿಗೆ ಆಹ್ವಾನ ನೀಡಬೇಕು. ಜಯಂತಿ ಆಚರಣೆ ಕುರಿತಂತೆ ಆಯಾ ಇಲಾಖೆಗಳಿಗೆ ಕೆಲಸ ಹಂಚಿಕೆ ಮಾಡಿದಂತೆ ಸಂಬಂಧಿಸಿದ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಜ.19 ರಂದು ಕಡ್ಡಾಯವಾಗಿ ಮಹಾಯೋಗಿ ವೇಮನ ಜಯಂತಿಯನ್ನು ಆಚರಿಸಬೇಕು. ಜಯಂತಿ ಕಾರ್ಯಕ್ರಮದಲ್ಲಿ ಎಲ್ಲಾ ಸಮಾಜ ಬಾಂಧವರು, ಸಾರ್ವಜನಿಕರು ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಪುಷ್ಪ ಲತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ್, ಸಮಾಜದ ಮುಖಂಡರಾದ ಕಾಶೀನಾಥ್ ರಡ್ಡಿ, ಪ್ರಭು ಹೆಬ್ಬಾಳ, ಹನುಮರಡ್ಡಿ, ಚಂದ್ರಶೇಖರಗೌಡ ಪಾಟೀಲ, ಹೆಚ್.ಸುರೇಶ, ಎನ್.ಬಿ.ಪ್ರಭು, ವಿರುಪಣ್ಣ ನವೋದಯ ಸೇರಿದಂತೆ ಮತ್ತಿತರರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು





