ಫೆಬ್ರವರಿ 1ರಂದು ಜಿಲ್ಲೆಯಲ್ಲಿ ಎನ್.ಎಂ.ಎಂ.ಎಸ್. ಪರೀಕ್ಷೆ: ನಿಷೇಧಾಜ್ಞೆ ಜಾರಿ

NMMS exam to be held in the district on February 1st: Prohibitory order imposed
ಕೊಪ್ಪಳ ಜನವರಿ 31 (ಕರ್ನಾಟಕ ವಾರ್ತೆ): ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್), ಮುನಿರಾಬಾದ್ ಕೊಪ್ಪಳ ಇವರ ವತಿಯಿಂದ ಎನ್.ಎಂ.ಎಂ.ಎಸ್ ಪರೀಕ್ಷೆ ಫೆಬ್ರವರಿ 1 ರಂದು ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 100 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.
ಎನ್.ಎಂ.ಎಂ.ಎಸ್ ಪರೀಕ್ಷೆಯು ಫೆ. 1ರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮತ್ತು ಮಧ್ಯಾಹ್ನ 2 ರಿಂದ 3.30 ಗಂಟೆಯವರೆಗೆ ಕೊಪ್ಪಳ ಜಿಲ್ಲೆಯ ಒಟ್ಟು 21 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷೆಗಳನ್ನು ಸುಗಮ ಮತ್ತು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 100 ಮೀಟರ್ ಅಂತರದ ಪ್ರದೇಶದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿಷೇಧಾಜ್ಞೆ ಜಾರಿಯನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲೂ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ. ಮೊಬೈಲ್, ಪೇಜರ್, ಜರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಹಾಗೂ ನಿಯೋಜಿತ ಶಿಕ್ಷಕರನ್ನು ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.



