ಬಿಸಿಲಿನ ಪ್ರಖರತೆ ಹಾಗೂ ತೀವ್ರತೆಯಿಂದ ಪಾರಾಗಲು ಆರೋಗ್ಯ ಇಲಾಖೆಯಿಂದ ಸಲಹೆಗಳು

Health Department's tips to avoid the harsh and intense sun




ಬಿಸಿಲಿನ ಪ್ರಖರತೆ ಹಾಗೂ ತೀವ್ರತೆಯಿಂದ ಪಾರಾಗಲು ಆರೋಗ್ಯ ಇಲಾಖೆಯಿಂದ ಸಲಹೆಗಳು

ಜಾಹೀರಾತು


ಕೊಪ್ಪಳ ಮಾರ್ಚ್ 24 (ಕರ್ನಾಟಕ ವಾರ್ತೆ): ಜಿಲ್ಲೆಯಾದ್ಯಂತ ಪ್ರಸ್ತುತ ತಿಂಗಳಿನಿಂದ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ ಕಂಡುಬಂದ ಹಿನ್ನೆಲೆಯಲ್ಲಿ ಸಾರ್ವಜನಿಕರು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ದರು ತಮ್ಮ ಆರೋಗ್ಯದ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾರ್ವಜನಿಕರಿಗೆ ಸಲಹೆಗಳನ್ನು ನೀಡಿದೆ.
ಬೇಸಿಗೆ ಸಮಯದಲ್ಲಿ ಹೆಚ್ಚು ನೀರನ್ನು ಕುಡಿಯಬೇಕು. ಮಜ್ಜಿಗೆ ಅಥವಾ ಎಳನೀರು, ಹಣ್ಣಿನ ರಸವನ್ನು ಹೆಚ್ಚಾಗಿ ಸೇವಿಸಬೇಕು. ನೀರಿನ ಅಂಶ ಹೆಚ್ಚಾಗಿರುವ ತರಕಾರಿಗಳು, ಹಣ್ಣುಗಳನ್ನು ಸೇವಿಸುವುದು ಉತ್ತಮ. ಸಡಿಲವಾದ ತೆಳು ಬಣ್ಣದ ಹತ್ತಿಯ ಬಟ್ಟೆಯನ್ನು ಧರಿಸಬೇಕು ಹಾಗೂ ಗಾಳಿಯಾಡುವ ಪಾದರಕ್ಷೆ ಧರಿಸಬೇಕು. ಹೊರಗಡೆ ತೆರಳುವ ವೇಳೆ ತಂಪು ಕನ್ನಡಕ, ಛತ್ರಿ, ಟವೆಲ್ ಅಥವಾ ಬಿಸಿಲಿನಿಂದ ಕಾಪಾಡಿಕೊಳ್ಳುವ ಸಾಮಾನ್ಯ ಕ್ರಮಗಳನ್ನು ಪಾಲಿಸಬೇಕು. ರೇಡಿಯೊ, ದೂರದರ್ಶನ ಹಾಗೂ ದಿನಪತ್ರಿಕೆಗಳಲ್ಲಿ ಬಿಸಿಯಾದ ಗಾಳಿ ಅಥವಾ ಶಾಖ ತರಂಗ(ಹೀಟ್ ವೇವ್)ದ ಬಗ್ಗೆ ನೀಡುವ ಮಾಹಿತಿ ಅನುಸಾರ ದೈನಂದಿನ ಚಟುವಟಿಕೆಗಳನ್ನು ಯೋಜಿಸಿಕೊಳ್ಳಬೇಕು.
‎ ಬಿಸಿಲಿನಲ್ಲಿ ಹೊರಗಡೆ ಕಾರ್ಯನಿರ್ವಹಿಸುವವರು (ಜಮೀನು ಕೆಲಸ, ರಸ್ತೆ ಕಾಮಗಾರಿ ಮುಂತಾದವು) ಆದಷ್ಟು ಬೆಳಗ್ಗೆ 11 ಗಂಟೆಯ ಒಳಗೆ ಮತ್ತು ಸಂಜೆ 4 ಗಂಟೆ ನಂತರ ಕೈಗೊಳ್ಳುವುದು ಉತ್ತಮ. ಈ ಅವಧಿಯಲ್ಲಿ ಶ್ರಮದಾಯಕ ಕೆಲಸಗಳಿಂದ ವಿಶ್ರಾಂತಿ ಪಡೆಯಬೇಕು. ಬಿಸಿಲಿನಲ್ಲಿ ನಡೆಯುವಾಗ ಕಡ್ಡಾಯವಾಗಿ ಚಪ್ಪಲಿ ಧರಿಸಿ. ಟೀ ಅಥವಾ ಕಾಫಿ, ಹೆಚ್ಚು ಸಕ್ಕರೆ ಅಂಶವನ್ನು ಹೊಂದಿರುವ ಕಾರ್ಬೋನೇಟೆಡ್ ಪಾನೀಯ ಹಾಗೂ ಮದ್ಯಪಾನದಿಂದ ದೂರವಿರಿ. ವ್ಯಕ್ತಿ ತೊದಲು ಮಾತು ಅಥವಾ ಅರ್ಥ ರಹಿತವಾಗಿ ಬಡಬಡಿಸಿದಲ್ಲಿ ಕೂಡಲೇ ನೆರಳಿನ ಪ್ರದೇಶಕ್ಕೆ ಸ್ಥಳಾಂತರಿಸಿ. ಕೆಳಗೆ ಮಲಗಿಸಿ ಕಾಲುಗಳನ್ನು ಮೇಲಕ್ಕೆ ಎತ್ತಿ ವಿಶ್ರಾಂತಿ ಪಡೆಯಿರಿ. ಬಿಸಿಗಾಳಿ ಮತ್ತು ಅತಿಯಾದ ತಾಪಮಾನದಿಂದ ಆರೋಗ್ಯ ಸಮಸ್ಯೆಗಳು ಉಂಟಾದಲ್ಲಿ ಸಮೀಪದ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಿ ಅಥವಾ 108 ಅಥವಾ 102ಕ್ಕೆ ಕರೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *