Task force meeting to eliminate child labor: Attack in Koppal, protection of juvenile laborers

ಬಾಲಕಾರ್ಮಿಕರ ನಿರ್ಮೂಲನೆಗೆ ಟಾಸ್ಕ್ ಫೋರ್ಸ್ ಸಭೆ: ಕೊಪ್ಪಳದಲ್ಲಿ ದಾಳಿ, ಕಿಶೋರ ಕಾರ್ಮಿಕ ರಕ್ಷಣೆ
ಕೊಪ್ಪಳ ಮಾರ್ಚ್ 27 (ಕರ್ನಾಟಕ ವಾರ್ತೆ): ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆಗೊಳಿಸುವ ನಿಟ್ಟಿನಲ್ಲಿ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ ಹಾಗೂ ದಾಳಿ/ತಪಾಸಣೆ ಕಾರ್ಯಾಚರಣೆಗಳನ್ನು ಗುರುವಾರ ಕೊಪ್ಪಳ ತಾಲೂಕಿನಲ್ಲಿ ಯಶಸ್ವಿಯಾಗಿ ನಡೆಸಲಾಯಿತು.
ಮಾನ್ಯ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ನವದೆಹಲಿ ಹಾಗೂ ಜಿಲ್ಲಾಧಿಕಾರಿಗಳ ಸೂಚನೆಯಂತೆ “PAN-INDIA Rescue & Rehabilitation Campaign of Child and Adolescent Labour” ಅಭಿಯಾನದ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಯಿತು. ಮೊದಲಿಗೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ದುಂಡಪ್ಪ ತುರಾದಿ ಅವರು, ತಾಲೂಕಿನಾದ್ಯಂತ ಬಾಲಕಾರ್ಮಿಕರನ್ನು ಪತ್ತೆ ಮಾಡುವುದು ಎಲ್ಲಾ ಇಲಾಖೆಗಳ ಜವಾಬ್ದಾರಿ ಎಂದು ತಿಳಿಸಿದರು. ಪ್ರತಿಯೊಬ್ಬ ಅಧಿಕಾರಿಯೂ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಬೇಕು ಎಂದು ಸೂಚಿಸಿದರು.
ಬೇಸಿಗೆ ಸಂದರ್ಭದಲ್ಲಿ ಮಕ್ಕಳು ಹಳ್ಳಕೊಳ್ಳಗಳಲ್ಲಿ ಈಜಾಡಲು ಹೋಗುವುದು ಹಾಗೂ ದನ-ಕುರಿಗಳನ್ನು ಕಾಯುವ ಸಂದರ್ಭಗಳಲ್ಲಿ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಸ್ಥಳೀಯ ಅಧಿಕಾರಿಗಳು, ಶಿಕ್ಷಕರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು, ಗ್ರಾಮ ಪಂಚಾಯತ್ ಸದಸ್ಯರು ಮತ್ತು ಪೋಷಕರು ಹೆಚ್ಚಿನ ಜಾಗೃತಿ ವಹಿಸಬೇಕೆಂದು ಹೇಳಿದರು.
ಬಾಲಕಾರ್ಮಿಕರನ್ನು ಗುರುತಿಸಲು ನಿರಂತರ ತಪಾಸಣೆ ನಡೆಸಬೇಕಿದ್ದು, ಕಾರ್ಮಿಕ ಇಲಾಖೆಯ ಜೊತೆಗೆ ಇತರೆ 11 ಇಲಾಖೆಗಳ ಅಧಿಕಾರಿಗಳಿಗೆ ಕಾಯಿದೆ ಕಲಂ-17ರಡಿ ನಿರೀಕ್ಷಕರಾಗಿ ಅಧಿಕಾರ ನೀಡಲಾಗಿದೆ. ಎಲ್ಲ ಅಧಿಕಾರಿಗಳೂ ತಮ್ಮ ವ್ಯಾಪ್ತಿಯಲ್ಲಿ ತಪಾಸಣೆ ನಡೆಸಬೇಕು ಎಂದು ಸೂಚಿಸಿದರು. ಸಾರ್ವಜನಿಕರಲ್ಲಿ ಅರಿವು ಮೂಡಿಸಲು 1098 ಮಕ್ಕಳ ಸಹಾಯವಾಣಿ ಸಂಖ್ಯೆಯ ಮಾಹಿತಿ ಗೋಡೆ ಬರಹಗಳನ್ನು ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಅಳವಡಿಸಲು ಸೂಚಿಸಲಾಯಿತು.
ಸಭೆಯ ನಂತರ ಕೊಪ್ಪಳ ನಗರದಲ್ಲಿ ದಾಳಿ ಹಾಗೂ ತಪಾಸಣೆ ಕಾರ್ಯಾಚರಣೆ ನಡೆಸಲಾಯಿತು. ವಿವಿಧ ಹೋಟೆಲ್, ಗ್ಯಾರೇಜ್, ಬೇಕರಿ ಹಾಗೂ ಅಂಗಡಿಗಳಲ್ಲಿ ಪರಿಶೀಲನೆ ನಡೆಸಿ, ಕರಪತ್ರಗಳನ್ನು ಹಂಚಿ ಜಾಗೃತಿ ಮೂಡಿಸಲಾಯಿತು. 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳಬಾರದೆಂದು ಮಾಲೀಕರಿಗೆ ಎಚ್ಚರಿಕೆ ನೀಡಲಾಯಿತು.
ಕಾರ್ಯಾಚರಣೆಯಲ್ಲಿ ಕಾರ್ಮಿಕ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ 1098 ಸಿಬ್ಬಂದಿ, ಮಹಿಳಾ ಸಾಂತ್ವನ ಕೇಂದ್ರ ಹಾಗೂ ವಿವಿಧ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದರು.
ಈ ವೇಳೆ ನಗರದ “ಮಾಜಿಸಾ ಕಲೇಕ್ಷನ್” ಬಟ್ಟೆ ಅಂಗಡಿಯಲ್ಲಿ ಒಬ್ಬ ಕಿಶೋರ ಕಾರ್ಮಿಕ ಪತ್ತೆಯಾಗಿದ್ದು, ಆತನನ್ನು ರಕ್ಷಿಸಿ ಮುಂದಿನ ಪೋಷಣೆ ಹಾಗೂ ಪುನರ್ವಸತಿಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ ಎಂದು ಕಾರ್ಮಿಕ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
