ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಶಿವರಾಜ ತಂಗಡಗಿ

H.Mallikarjun
H.Mallikarjun - Kalyanasiri
3 Min Read
ಜಾಹೀರಾತು
If there is a drinking water problem in any part of the district, the officials are responsible: Minister Shivaraj Thangadgi




ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಕುರಿತು ಅಧಿಕಾರಿಗಳೊಂದಿಗೆ ಸಚಿವರ ಸಭೆ

ಜಾಹೀರಾತು


ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ ಏಪ್ರಿಲ್ 27 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಸಮಗ್ರ ಯೋಜನೆ ರೂಪಿಸಿ ತ್ವರಿತವಾಗಿ ಜಾರಿಗೆ ತರಬೇಕು. ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬAದಲ್ಲಿ ಸಂಬAಧಿಸಿದ ಅಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೇಸಿಗೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಜನರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿದೆ. ತಹಶೀಲ್ದಾರರು ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಬೇಕು. ಸಮಸ್ಯೆ ಇರುವ ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆದು ಅಥವಾ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಿ. ಪ್ರತಿ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ತಹಶೀಲ್ದಾರ ಕಾರ್ಯಾಲಯಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ದೂರು ನೀಡಲು ಸಹಾಯವಾಣಿಯನ್ನು ಕಡ್ಡಾಯವಾಗಿ ತೆರೆಯಬೇಕು. ಪ್ರತಿ ನಿತ್ಯ ಬಂದ ದೂರುಗಳು, ಪರಿಹಾರಕ್ಕೆ ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸಬೇಕು. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ವಿಧಾನಸಭಾ ಕ್ಷೇತ್ರವಾರು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಎಂದು ಹೇಳಿದರು.
ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕುಡಿಯುವ ನೀರಿನ ಲಭ್ಯತೆ ಕುರಿತು ಪ್ರತಿದಿನ ವರದಿ ಸಲ್ಲಿಸಬೇಕು. ಕೆಟ್ಟಿರುವ ಪೈಪ್‌ಲೈನ್‌ಗಳು, ಮೋಟಾರ್‌ಗಳು ಹಾಗೂ ಬೋರ್‌ವೆಲ್‌ಗಳನ್ನು ತಕ್ಷಣ ದುರಸ್ತಿ ಮಾಡಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು. ಯಾವುದೇ ಗ್ರಾಮ ಅಥವಾ ವಾರ್ಡ್ನಲ್ಲಿ ನೀರಿನ ಕೊರತೆ ಉಂಟಾದರೆ ತಕ್ಷಣ ಸ್ಪಂದಿಸಿ ಸಮಸ್ಯೆ ಪರಿಹರಿಸಬೇಕು. ಜನರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಬರಬಾರದು. ನೀರಿನ ಸಮಸ್ಯೆ ಕುರಿತು ಆರಂಭಿಸಿದ ಸಹಾಯವಾಣಿಯ ಬಗ್ಗೆ ದೊಡ್ಡ ಅಕ್ಷರಗಳಲ್ಲಿ ಎಲ್ಲ ಸಂಬAಧಿಸಿದ ಕಚೇರಿಗಳಲ್ಲಿ ಸಹಾಯವಾಣಿ ಸಂಖ್ಯೆಯನ್ನು ಒಳಗೊಂಡ ಫಲಕಗಳನ್ನು ಹಾಕಬೇಕು. ಬೇಸಿಗೆ ಮುಗಿಯುವವರೆಗೂ ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಕಾರ್ಯನಿರ್ವಹಿಸಬೇಕು ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕುಡಿಯುವ ನೀರಿನ ಪೂರೈಕೆಗಾಗಿ ಸರ್ಕಾರದಿಂದ ಗ್ರಾಮೀಣ ಪ್ರದೇಶಕ್ಕೆ ರೂ. 1.50 ಕೋಟಿ, ನಗರ ಪ್ರದೇಶಗಳಿಗೆ ರೂ. 90 ಲಕ್ಷಗಳನ್ನು ಮೀಸಲಿಡಲಾಗಿದೆ. ಅನುದಾನದ ಕೊರತೆ ಇಲ್ಲ. ಆದ್ದರಿಂದ ನಿಯೋಜಿತ ನೋಡಲ್ ಅಧಿಕಾರಿಗಳು ಹಾಗೂ ತಹಶೀಲ್ದಾರ ಮತ್ತು ಇಒ ಗಳು ಖುದ್ದು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ನಂತರ ಗ್ರಾಮಗಳ ಸಮಸ್ಯೆಗಳ ಪಟ್ಟಿಯೊಂದಿಗೆ ಸಂಬAಧಿಸಿದ ಶಾಸಕರೊಂದಿಗೆ ಟಾಸ್ಕ್ ಫೋರ್ಸ್ ಸಭೆ ನಡೆಸಬೇಕು. ನಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಈ ವಾರದೊಳಗೆ ಕಡ್ಡಾಯವಾಗಿ ಟಾಸ್ಕ್ಫೋರ್ಸ್ ಸಭೆ ನಡೆಸಬೇಕು ಎಂದು ಅವರು ಹೇಳಿದರು.
ಅಮೃತ 2.0 ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದ ಸಚಿವರು, ಯೋಜನೆ ಕಾರ್ಯಗತಗೊಳಿಸುವಲ್ಲಿ ವಿಳಂಬವಾಗದAತೆ ಗಮನ ಹರಿಸಬೇಕು ಎಂದು ಸೂಚಿಸಿದರು. ನಗರ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆಯನ್ನು ಹೆಚ್ಚಿಸಲು ಈ ಯೋಜನೆ ಅತ್ಯಂತ ಪ್ರಮುಖವಾಗಿದ್ದು, ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಅಮೃತ 2.0 ಯೋಜನೆ ಜನರ ಜೀವನಮಟ್ಟವನ್ನು ಸುಧಾರಿಸುವ ಮಹತ್ವದ ಯೋಜನೆ. ಇದರ ಪ್ರಯೋಜನಗಳು ಶೀಘ್ರದಲ್ಲೇ ಜನರಿಗೆ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.
ಸಭೆಯಲ್ಲಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪ ವಿಭಾಗಾಧಿಕಾರಿ ಕ್ಯಾ.ಮಹೇಶ ಮಾಲಗಿತ್ತಿ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

Total Views: 0
Share This Article