
UG NEET exam on May 3: Prohibitory order imposed
ಮೇ 3 ರಂದು ಯುಜಿ ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಕೊಪ್ಪಳ ಏಪ್ರಿಲ್ 28 (ಕರ್ನಾಟಕ ವಾರ್ತೆ): ಯುಜಿ ನೀಟ್ 2026 ಪರೀಕ್ಷೆಯು ಮೇ 3 ರಂದು ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ.ಸುರೇಶ್. ಬಿ. ಇಟ್ನಾಳ್ ಅವ ರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಕೊಪ್ಪಳ ತಾಲೂಕಿನ 9 ಹಾಗೂ ಕುಕುನೂರು ತಾಲೂಕಿನ 1 ಪರೀಕ್ಷಾ ಕೇಂದ್ರ ಸೇರಿದಂತೆ ಜಿಲ್ಲಾದ್ಯಂತ ಒಟ್ಟು 10 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳನ್ನು ಸುಗಮ ಮತ್ತು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಅಂತರದ ಪ್ರದೇಶದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿಷೇಧಾಜ್ಞೆ ಆದೇಶದನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್, ಪೇಜರ್, ಜರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಹಾಗೂ ನಿಯೋಜಿತ ಶಿಕ್ಷಕರನ್ನು ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
