ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಮಟ್ಟದ ಜಾಗೃತ ಸಮಿತಿ ಸಭೆ

H.Mallikarjun
H.Mallikarjun - Kalyanasiri
3 Min Read
ಜಾಹೀರಾತು
District level vigilance committee meeting of National Pulse Polio Program




ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಮಟ್ಟದ ಜಾಗೃತ ಸಮಿತಿ ಸಭೆ

ಜಾಹೀರಾತು


ಯಾವುದೇ ಮಗು ಲಸಿಕೆಯಿಂದ ವಂಚಿತವಾಗಬಾರದು: ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ್

ಕೊಪ್ಪಳ ಮೇ 12 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಜೂನ್ 28 ರಿಂದ ಜುಲೈ 1 ರವರೆಗೆ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಮಗು ಲಸಿಕೆಯಿಂದ ತಪ್ಪಿಸಿಕೊಳ್ಳಬಾರದು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ತನ್ನ ಹೊಣೆಗಾರಿಕೆಯಾಗಿಸಿಕೊಂಡು ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಹೇಳಿದರು.
ಮಂಗಳವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ  ರಾಷ್ಟ್ರೀಯ   ಪಲ್ಸ್ ಪೊಲೀಯೋ ಕಾರ್ಯಕ್ರಮದ ಜಿಲ್ಲಾ ಮಟ್ಟದ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಜೂನ್ 28 ರಿಂದ ಜುಲೈ 1 ರವರೆಗೆ ನಾಲ್ಕು ದಿನಗಳ ಕಾಲ ನಡೆಯಲಿರುವ ಪಲ್ಸ್ ಪೋಲಿಯೋ ಅಭಿಯಾನವನ್ನು ಯಶಸ್ವಿಗೊಳಿಸಬೇಕು. “ಪೋಲಿಯೋ ನಿರ್ಮೂಲನೆ ಸರ್ಕಾರದ ಪ್ರಮುಖ ಗುರಿಯಾಗಿದ್ದು, ಮನೆ ಮನೆಗೆ ತೆರಳಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಲಸಿಕೆ ನೀಡಬೇಕು. ಯಾವುದೇ ಕಾರಣಕ್ಕೂ ಒಂದು ಮಗುವೂ ಲಸಿಕೆಯಿಂದ ವಂಚಿತವಾಗಬಾರದು ಎಂದು ಅವರು ಸೂಚನೆ ನೀಡಿದರು.
ಅಂಗನವಾಡಿ, ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಗ್ರಾಮೀಣ ಪ್ರದೇಶಗಳು, ಸ್ಲಂಗಳು, ವಲಸೆ ಕಾರ್ಮಿಕರ ವಸತಿ ಪ್ರದೇಶಗಳು ಸೇರಿದಂತೆ ಎಲ್ಲೆಡೆ ಮಕ್ಕಳನ್ನು ಗುರುತಿಸಿ ಲಸಿಕೆ ನೀಡಬೇಕು. ಅಂಗನವಾಡಿಗಳಿಗೆ ಬರುವ ತಾಯಂದಿರಿಗೆ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ತಿಳುವಳಿಕೆ ನೀಡಬೇಕು. ಶಾಲಾ ಮಕ್ಕಳಿಂದ ಪೋಲಿಯೋ ಲಸಿಕೆ ಕುರಿತು ಜಾಗೃತಿ ಜಾಥಾ ಹಮ್ಮಿಕೊಳ್ಳಬೇಕು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅತ್ಯಂತ ಮುಖ್ಯವಾಗಿದ್ದು, ಶಾಲೆಗಳು, ಧಾರ್ಮಿಕ ಸ್ಥಳಗಳು ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಪೋಷಕರಿಗೆ ಲಸಿಕೆಯ ಮಹತ್ವವನ್ನು ತಿಳಿಸಬೇಕು. ಹಾಗೂ ಬಸ್ ನಿಲ್ದಾಣಗಳಲ್ಲಿ 3 ದಿನಗಳ ಕಾಲ ಲಸಿಕೆ ಹಾಕಿಸುವಂತೆ ಪ್ರಕಟಣೆ ಹೊರಡಿಸಬೇಕು. ಜನರಲ್ಲಿ ಯಾವುದೇ ಅಪನಂಬಿಕೆ ಇದ್ದರೆ ಅದನ್ನು ಸೂಕ್ತ ತಿಳುವಳಿಕೆ ನೀಡುವ ಮೂಲಕ ಹೋಗಲಾಡಿಸಬೇಕು. ಈ ಕಾರ್ಯಕ್ರಮ ಆರೋಗ್ಯ ಇಲಾಖೆಯೊಂದರ ಕೆಲಸವಲ್ಲ. ಎಲ್ಲಾ ಇಲಾಖೆಗಳು, ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರು ಕೈಜೋಡಿಸಿದಾಗ ಮಾತ್ರ ಯಶಸ್ಸು ಸಾಧ್ಯ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಡಾ.ಲಿಂಗರಾಜು ಟಿ. ಅವರು ಮಾತನಾಡಿ, ಜೂನ್ 28 ರಂಧು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಿಗದಿತ ಬೂತ್‌ಗಳಲ್ಲಿ ಪೋಲಿಯೋ ಲಸಿಕೆ ಹಾಕಲಾಗುತ್ತದೆ. ಜೂನ್ 29 ರಿಂದ ಜುಲೈ 1 ರವರೆಗೆ ಮನೆ ಮನೆಗೆ ಭೇಟಿ ನೀಡಿ, ಲಸಿಕೆ ನೀಡಲಾಗುತ್ತದೆ. ಇದರೊಂದಿಗೆ ಜೂನ್ 28 ರಿಂದ ಜುಲೈ 1 ರವರೆಗೆ ವಲಸೆ ಕಾರ್ಮಿಕರ ವಸತಿ ಪ್ರದೇಶಗಳು, ಕಾರ್ಖಾನೆ ಕಾರ್ಮಿಕರ ಬಿಡಾರಗಳಿಗೆ ಭೇಟಿ ನೀಡಿ ಲಸಿಕೆ ನೀಡಲಾಗುವುದು ಎಂದು ಮಾಹಿತಿ ನೀಡಿದ ಅವರು, ಕಾರ್ಯಕ್ರಮದ ಯಶಸ್ವಿಗೆ ಆರೋಗ್ಯ ಇಲಾಖೆಯೊಂದಿಗೆ ವಿವಿಧ ಇಲಾಖೆಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ, ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ರವೀಂದ್ರನಾಥ ಎಂ.ಎಚ್., ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಕಾಶ ಎಚ್., ಮುನಿರಬಾದ್‌ನ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ತಜ್ಞರಾದ ಕೆ.ಹೆಚ್. ತೊಗರಿ, ಜಿಲ್ಲಾ ಆಸ್ಪತ್ರೆಯ ಮಕ್ಕಳ ತಜ್ಞ ವಿಭಾಗದ ಮುಖ್ಯಸ್ಥರು ಡಾ.ಗಿರೀಶ ಸೇರಿದಂತೆ ವಿವಿಧ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Total Views: 0
Share This Article