
Massive protest by Dalit Sangharsh Samiti against illegal sand, soil, stone mining, gambling and liquor sale

ಅಕ್ರಮ ಮರಳು, ಮಣ್ಣು, ಕಲ್ಲು ಗಣಿಗಾರಿಕೆ, ಜೂಜಾಟ ಹಾಗೂ ಮದ್ಯ ಮಾರಾಟ ವಿರುದ್ಧ ದಲಿತ ಸಂಘರ್ಷ ಸಮಿತಿಯಿಂದ ಬೃಹತ್ ಪ್ರತಿಭಟನೆ

ಕನಕಗಿರಿ, ಜೂನ್ 1: ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳು, ಮಣ್ಣು ಹಾಗೂ ಕಲ್ಲು ಗಣಿಗಾರಿಕೆ, ಓಸಿ, ಇಸ್ಪೀಟ್ ಜೂಜಾಟ ಮತ್ತು ಅಕ್ರಮ ಮದ್ಯ ಮಾರಾಟವನ್ನು ತಕ್ಷಣವೇ ನಿಲ್ಲಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಅಕ್ರಮ ದಂಧೆಗಳಿಗೆ ಕುಮ್ಮಕ್ಕು ನೀಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರ ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಅಧ್ಯಕ್ಷ ನಿಂಗಪ್ಪ ಜಿ.ಎಸ್. ಬೆಣಕಲ್, “ತಾಲೂಕಿನಲ್ಲಿ ಅಕ್ರಮ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದ್ದು, ಇದರಿಂದ ಸಾರ್ವಜನಿಕ ಜೀವನ ಹಾಗೂ ಯುವ ಜನಾಂಗದ ಭವಿಷ್ಯ ಹಾಳಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.
ಪ್ರತಿಭಟನೆಯ ವೇಳೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿ ಸರ್ಕಾರ ಮತ್ತು ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೆಲ ಪ್ರತಿಭಟನಾಕಾರರು ತಮ್ಮ ಬಟ್ಟೆಗಳನ್ನು ಬಿಚ್ಚಿ ಪ್ರತಿಭಟಿಸುವ ಮೂಲಕ ಅಕ್ರಮ ದಂಧೆಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಅಧ್ಯಕ್ಷ ನಿಂಗಪ್ಪ ಜಿ.ಎಸ್. ಬೆಣಕಲ್, ಉಪಾಧ್ಯಕ್ಷ ಗಾಳೆಪ್ಪ ಮಕ್ಕಳ್ಳಿ, ಮಹಿಳಾ ಜಿಲ್ಲಾ ಅಧ್ಯಕ್ಷೆ ಶಶಿಕಲಾ ಮಠದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕರಿಯಪ್ಪ ಸೇರಿದಂತೆ ಸಂಘಟನೆಯ ಹಲವಾರು ಸದಸ್ಯರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಕನಕಗಿರಿ ತಹಶೀಲ್ದಾರ್ ಚಂದ್ರಶೇಖರ್ ಶಂಬಣ್ಣ ಗಾಳಿ ಹಾಗೂ ಸಿಪಿಐ ನಾರಾಯಣ್ ಉಪಸ್ಥಿತರಿದ್ದು, ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು.
