
District Collector's request to cooperate with enumerators in revising the voter list

ಜಿಲ್ಲಾಧಿಕಾರಿಗಳಿಂದ ಪತ್ರಿಕಾಗೋಷ್ಠಿ

ಮತದಾರರ ಪಟ್ಟಿ ಪರಿಷ್ಕರಣೆಯ ಗಣತಿದಾರರಿಗೆ ಸಹಕರಿಸಲು ಜಿಲ್ಲಾಧಿಕಾರಿಗಳ ಮನವಿ
ಕೊಪ್ಪಳ ಜೂನ್ 04 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಹಿನ್ನೆಲೆಯಲ್ಲಿ 2026ರ ಜೂನ್ 30 ರಿಂದ ಜುಲೈ 29ರವರೆಗೆ ಮನೆಮನೆಗೆ ಭೇಟಿ ನೀಡಲಿರುವ ಗಣತಿದಾರರಿಗೆ ಅಗತ್ಯ ಮಾಹಿತಿ ನೀಡಿ ಸಹಕಾರ ನೀಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ ಅವರು ಕೊಪ್ಪಳ ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದ ಬಗ್ಗೆ ಕೊಪ್ಪಳ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಜೂನ್ 04ರಂದು ನಡೆದ ಸಂವಾದ ಬಳಿಕ ಅವರು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರು ಬಿಟ್ಟು ಹೋಗಬಾರದು ಎಂಬುದೇ ಈ ಮತದಾರರ ಪಟ್ಟಿ ಪರಿಷ್ಕರಣೆಯ ಪ್ರಮುಖ ಉದ್ದೇಶವಾಗಿದೆ ಎಂಬುದಾಗಿ ಭಾರತ ಚುನಾವಣಾ ಆಯೋಗವು ಸ್ಪಷ್ಟಪಡಿಸಿದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.
ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದಲ್ಲಿ ರಾಜಕೀಯ ಪಕ್ಷಗಳಿಂದ ನೇಮಕಗೊಂಡ ಬಿಎಲ್ ಎಗಳು ಸಹ ಭಾಗಿಯಾಗುತ್ತಾರೆ. ಅವರಿಗೂ ಸಹ ಜನತೆ ಸಹಕಾರ ನೀಡಬೇಕು ಎಂದು ಕೋರಿದರು.
ಉದ್ದೇಶ ಪೂರ್ವಕವಾಗಿಯೇ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಯಾರಿಂದಲೂ ದೂರುಗಳು ಬರಬಾರದು ಎಂದು ಈ ಪರಿಷ್ಕರಣಾ ಕಾರ್ಯದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಂದ ನೇಮಕಗೊಂಡ ಬಿಎಲ್ ಇ ಗಳು ಸಹ ಭಾಗಿಯಾಗಿ ಅವರಿಂದ ಸಲಹೆ ಸೂಚನೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಜಿಪಂ ಉಪ ಕಾರ್ಯದರ್ಶಿ ಟಿ ಕೃಷ್ಣಮೂರ್ತಿ ಇದ್ದರು.
