Students should make use of technology.

ವಿದ್ಯಾರ್ಥಿಗಳು ತಂತ್ರಜ್ಞಾನ ಬಳಸಿಕೊಳ್ಳಬೇಕು
ಕೊಪ್ಪಳ: ಇಂದಿನ ಯುಗದಲ್ಲಿ ಎಲ್ಲಾ ವ್ಯವಸ್ಥೆಗಳು ಆನ್‌ಲೈನ್ ಆಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಂಡು ಉನ್ನತ ಶಿಕ್ಷಣ ಪಡೆದು ಸಮಾಜಕ್ಕೆ ಕೀರ್ತಿ ತರಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ ತಿಳಿಸಿದರು.
ಜಿಲ್ಲೆಯ ಹನುಮಸಾಗರ ಪಟ್ಟಣದ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ದೇವಾಂಗ ಸಮಾಜ, ಡಾ. ಎಸ್.ಜಿ. ಬಿಜ್ಜಳ ಸ್ಮಾರಕ ಪ್ರತಿಷ್ಠಾನ, ಜಿಲ್ಲಾ ದೇವಾಂಗ ಕ್ಷೇಮಾಭಿವೃದ್ಧಿ ಸಂಘ, ಜಿಲ್ಲಾ ದೇವಾಂಗ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕುಷ್ಟಗಿ ತಾಲೂಕು ದೇವಾಂಗ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ೫ ಲಕ್ಷ ರೂ. ಅನುದಾನ ನೀಡುವುದಾಗಿ ಘೋಷಿಸಿದರು. ದೇವಾಂಗ ಸಮಾಜದ ಎಲ್ಲ ಅಭಿವೃದ್ಧಿ ಕಾರ್ಯಗಳಿಗೆ ತಮ್ಮ ಬೆಂಬಲ ಸದಾ ಇರುತ್ತದೆ ಎಂದರು. ಸಮಾಜದ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡುವುದಾಗಿ ಭರವಸೆ ನೀಡಿದರು.
ಜಿಲ್ಲಾ ದೇವಾಂಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಶಂಕರ ಕರಡಕಲ್ ಮಾತನಾಡಿ, ಜಿಲ್ಲಾಮಟ್ಟದಲ್ಲಿ ಪ್ರತಿಭಾ ಪುರಸ್ಕಾರ, ಸಾಧಕರ ಸನ್ಮಾನ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಮಾಜದಲ್ಲಿ ಅಪಾರ ಜ್ಞಾನ ಹಾಗೂ ಸಾಧನೆ ಮಾಡಿದ ಅನೇಕ ಮಂದಿಯನ್ನು ಗುರುತಿಸಿ ಗೌರವಿಸಲಾಗುತ್ತಿದೆ. ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಸಮಾಜದ ಪ್ರತಿಯೊಬ್ಬರೂ ಸಮರ್ಪಕವಾಗಿ ಪಡೆದುಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ. ಮಹೇಶ್ ಮಾತನಾಡಿ, ಇಂದಿನ ದಿನಗಳಲ್ಲಿ ನೇಕಾರರ ಬದುಕು ಸಂಕಷ್ಟದಲ್ಲಿದೆ. ಯುವಕರು ಉತ್ತಮ ಶಿಕ್ಷಣ ಪಡೆದು ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು. ಸಮಾಜದ ಅಗತ್ಯ ಕಾರ್ಯಗಳಿಗೆ ತಾವು ಸದಾ ಸಹಕಾರ ನೀಡುವುದಾಗಿ ತಿಳಿಸಿದರು.
ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ರವೀಂದ್ರ ಕಲಬುರ್ಗಿ ಮಾತನಾಡಿ, ಸಮಾಜ ಸಂಘಟಿತವಾದರೆ ಯಾವುದೇ ಗುರಿಯನ್ನು ಸಾಧಿಸಬಹುದು. ಶಿಕ್ಷಣವೇ ಸಮಾಜದ ಸುಧಾರಣೆಯ ಪ್ರಮುಖ ಸಾಧನವಾಗಿದ್ದು, ಜಿಲ್ಲೆಯಲ್ಲಿ ದೇವಾಂಗ ಸಮಾಜಕ್ಕೆ ಪ್ರತ್ಯೇಕ ವಸತಿ ನಿಲಯ ಸ್ಥಾಪಿಸುವ ಉದ್ದೇಶ ಹೊಂದಿದ್ದೇವೆ ಎಂದು ತಿಳಿಸಿದರು.
ದೇವಾಂಗ ಸಮಾಜದ ಜಗದ್ಗುರು ದಯಾನಂದ ಪುರಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.



