* ಡಾ. ಮಹಾಂತ ಶಿವಯೋಗಿ ಜನ್ಮದಿನದ ವಿಶೇಷ ಕಾರ್ಯಕ್ರಮ
* ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ ಸ್ಪರ್ಧೆ
ವ್ಯಸನ ಮುಕ್ತ ದಿನಾಚರಣೆಗೆ ಅಗತ್ಯ ಸಿದ್ಧತೆಯಾಗಲಿ: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸೂಚನೆ
Necessary preparations for Addiction-Free Day: Additional District Commissioner Sidrameshwar’s instructions
ಕೊಪ್ಪಳ ಜುಲೈ 23 (ಕರ್ನಾಟಕ ವಾರ್ತೆ): ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಜನ್ಮ ದಿನಾಚರಣೆ ಅಂಗವಾಗಿ ಪ್ರತಿ ವರ್ಷ ಆಗಸ್ಟ್ 1 ರಂ
ದು ಆಚರಿಸುವ ವ್ಯಸನ ಮುಕ್ತ ದಿನಾಚರಣೆಯನ್ನು ಜಿಲ್ಲಾ ಕೇಂದ್ರದಲ್ಲಿ ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಅಚ್ಚುಕಟ್ಟಾಗಿ ಆಚರಣೆ ಮಾಡಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಹಿನ್ನೆಲೆಯ ವ್ಯಸನಮುಕ್ತ ದಿನಾಚರಣೆಯ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜುಲೈ 22ರಂದು ಸಂಜೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಾಂತ ಶಿವಯೋಗಿಗಳು ವ್ಯಸನಮುಕ್ತ ಆಂದೋಲನದ ಹರಿಕಾರರಾಗಿದ್ದರು. ಶ್ರೀಗಳ ಜನ್ಮದಿನವನ್ನು ರಾಜ್ಯ ಸರ್ಕಾರವು ಪ್ರತಿ ವರ್ಷ ಆಗಸ್ಟ್ 1ರಂದು ವ್ಯಸನ ಮುಕ್ತ ದಿನವನ್ನಾಗಿ ಆಚರಣೆ ಮಾಡುತ್ತಿದ್ದು, ಈ ದಿನಾಚರಣೆ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ರವಾನೆಯಾಗಬೇಕಿದೆ. ಹಾಗಾಗಿ ಕೊಪ್ಪಳ ಜಿಲ್ಲಾ ಮಟ್ಟದ ವ್ಯಸನ ಮುಕ್ತ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಮ್ಮಕೊಳ್ಳಬೇಕು ಎಂದರು.
ವ್ಯಸನ ಮುಕ್ತ ದಿನಾಚರಣೆಯನ್ನು ಆ. 1ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಆಡಿಟೋರಿಯಂ ಹಾಲ್‌ನಲ್ಲಿ ಆಯೋಜಿಸಲು ಯೋಜಿಸಿದ್ದು, ವೇದಿಕೆಯ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಬೇಕು. ಕಾಲೇಜುಗಳು ಮತ್ತು ಹಾಸ್ಟೆಲ್ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತೆ ನೋಡಿಕೊಳ್ಳಬೇಕು ಎಂದರು.
ಡಾ.ಮಹಾಂತ ಶಿವಯೋಗಿಗಳ ವಿಚಾರಗಳ ಜೊತೆಗೆ ಮಧ್ಯಪಾನ, ಮಾದಕದ್ಯವ್ಯ ಮತ್ತು ತಂಬಾಕು ಸೇವೆನೆಯಿಂದಾಗುವ ದುಷ್ಪರಿಣಾಮಗಳ ವಿದ್ಯಾರ್ಥಿ ಯುವಜನರಿಗೆ ತಿಳಿಸುವ ದಿಶೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಮತ್ತು ಪ್ರೌಢ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಆಯೋಜನೆ ಮಾಡಿ ವಿಜೇತರಿಗೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ವ್ಯಸನಗಳಿಂದಾಗುವ ದುಷ್ಪರಿಣಾಮಗಳು ಹಾಗೂ ಕಾನೂನು ಮತ್ತು ಪರಿಹಾರ ವಿಷಯಗಳ ಬಗ್ಗೆ ಉಪನ್ಯಾಸ ಏರ್ಪಡಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಮಂಜುನಾಥ ಗೊಂಡಬಾಳ ಸಭೆಗೆ ಸಲಹೆ ಮಾಡಿದರು.
ಮಹಾಂತ ಶಿವಯೋಗಿಗಳ ಕುರಿತ ಉಪನ್ಯಾಸ ಏರ್ಪಡಿಸಲು ಜಾಗತಿಕ ಲಿಂಗಾಯತ ಮಹಾಸಭಾದ ಡಾ.ಸಂಗಮೇಶ ಕಲಹಾಳ ಅವರು ಸಭೆಗೆ ಸಲಹೆ ಮಾಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಗವಿಸಿದ್ದಪ್ಪ ಹೊಸಮನಿ ಅವರು ಮಾತನಾಡಿ, ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠ ಇಳಕಲ್‌ದ ಪೂಜ್ಯ ಲಿಂಗೈಕ್ಯ ಶ್ರೀ ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯನ್ನು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿದ ಸಹಯೋಗದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪ್ರತಿ ವರ್ಷ ವಿಭಿನ್ನವಾಗಿ ಆಚರಿಸಲಾಗುತ್ತಿದೆ. ಕಾರ್ಯಕ್ರಮಕ್ಕೆ ಎಲ್ಲ ಇಲಾಖೆಗಳ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಕೊಪ್ಪಳ ಜಿಲ್ಲಾಧ್ಯಕ್ಷರಾದ ಹನುಮೇಶ ಕಲ್ಮಂಗಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವಿಠ್ಠಲ್ ಜಾಬಗೌಡರ್, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಎನ್.ಪುಷ್ಪಲತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕರ್ಣಕುಮಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳಾದ ಎ.ಬಸವರಾಜ, ಮೈ ಭಾರತನ ಜಿಲ್ಲಾ ಯುವ ಅಧಿಕಾರಿಗಳಾದ ಮೇಘಾ ಜಿ.ಕೆ., ಪದವಿ ಪೂರ್ವ ಶಿಕ್ಷಣ ಇಲಾಖೆಯ ರಮೇಶ ಎಂ., ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮಾಲೋಚಕರಾದ ಸಂಗಪ್ಪ ಮಮಟಗೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಾರ್ತಾ ಇಲಾಖೆಯ ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Total Views:
0

