ಮೈ ಭಾರತ್-ಜಿಲ್ಲಾ ಸಲಹಾ ಸಮಿತಿ ಸಭೆ

H.Mallikarjun
H.Mallikarjun - Kalyanasiri
2 Min Read

My Bharat – District Advisory Committee Meeting

ಮೈ ಭಾರತ್-ಜಿಲ್ಲಾ ಸಲಹಾ ಸಮಿತಿ ಸಭೆ

ಮೈ ಭಾರತ್ ಪೋರ್ಟಲ್‌ನಲ್ಲಿ ಹೆಚ್ಚಿನ ಸಂಖ್ಯೆಯ ಯುವಜನ ನೋಂದಣಿ ಮಾಡಿಕೊಳ್ಳುವಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ
ಕೊಪ್ಪಳ ಆಗಸ್ಟ್ 01, (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿನ 15 ರಿಂದ 29 ವರ್ಷದ ಯುವಕ-ಯುವತಿಯರು ಮೈ ಭಾರತ್ ಪೋರ್ಟಲ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಶಾಲಾ ಕಾಲೇಜುಗಳ ಮುಖ್ಯಸ್ಥರು ಹಾಗೂ ವಸತಿ ನಿಲಯಗಳ ವಾರ್ಡನ್‌ಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಸೂಚಿಸಿದರು.
ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾದ ‘ಮೈ ಭಾರತ್’ (ಮೇರಾ ಯುವ ಭಾರತ್) ವತಿಯಿಂದ 2026-27ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯ ಅನುಮೋದನೆ, ವಿವಿಧ ಇಲಾಖೆಗಳ ಸಮನ್ವಯ ಬಲಪಡಿಸುವುದು ಹಾಗೂ ಯುವಜನರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೈ ಭಾರತ್ ಯೋಜನೆಯು ಸ್ವಯಂಸೇವಕತೆ, ಅನುಭವಾಧಾರಿತ ಕಲಿಕೆ, ನಾಯಕತ್ವ ಅಭಿವೃದ್ಧಿ, ಕೌಶಲ್ಯಾಭಿವೃದ್ಧಿ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ತಂತ್ರಜ್ಞಾನ ಆಧಾರಿತ ವೇದಿಕೆಯಾಗಿದೆ. ಮೈ ಭಾರತ್ ಪೋರ್ಟಲ್‌ನಲ್ಲಿ ಯುವಜನರ ನೋಂದಣಿ ಹೆಚ್ಚಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಎನ್‌ಸಿಸಿ, ಎನ್‌ಎಸ್‌ಎಸ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಇತರ ಇಲಾಖೆಗಳು ವಿಶೇಷ ಅಭಿಯಾನ ನಡೆಸಿ ಸಂಪೂರ್ಣ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಪೋಸ್ಟರ್ ಬಿಡುಗಡೆ:
‘ನಶಾ ಮುಕ್ತ ಯುವ – ವಿಕಸಿತ್ ಭಾರತ’ ಅಭಿಯಾನದ ಅಂಗವಾಗಿ 2026ರ ಆಗಸ್ಟ್ 3 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳದ ದದೇಗಲ್‌ನಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳು ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಭಿತ್ತಿಪತ್ರವನ್ನು (ಪೋಸ್ಟರ್) ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಬಿಡುಗಡೆ ಮಾಡಿದರು.
ಸಭೆಯಲ್ಲಿ ಮೈ-ಭಾರತ್ ಕೊಪ್ಪಳದ ಜಿಲ್ಲಾ ಯುವ ಅಧಿಕಾರಿ ಮೇಘಾ ಜಿ.ಕೆ., ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಗದೀಶ್ ಜಿ.ಎಚ್., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಠಲ್ ಜಾಬಗೌಡರ್, ಲೀಡ್ ಬ್ಯಾಂಕ್ ಮ್ಯಾನೇಜರ್ ಮಾರುತಿ ಕೆ.ಕೆ. ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Total Views: 0
Share This Article