Prioritize the protection of children's rights: Santhosh Kumar's directive

ಕೊಪ್ಪಳ ಜಿಲ್ಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು, ಸದಸ್ಯರ ಭೇಟಿ

* ವಸತಿ ನಿಲಯ, ಶಾಲೆ, ಪೊಲೀಸ್ ಠಾಣೆ, ಆಸ್ಪತ್ರೆಗಳ ಪರಿಶೀಲನೆ
* ನ್ಯೂನತೆಗಳನ್ನು ತ್ವರಿತವಾಗಿ ಸರಿಪಡಿಸಿ ವರದಿ ಸಲ್ಲಿಸಲು ನಿರ್ದೇಶನ
ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಸಂತೋಷ ಕುಮಾರ ಸೂಚನೆ
ಕೊಪ್ಪಳ ಆಗಸ್ಟ್ 07 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಸಂತೋಷ ಕುಮಾರ ಹಾಗೂ ಸದಸ್ಯರಾದ ಸತ್ಯನಾರಾಯಣ ಶೆಟ್ಟಿ ಅವರು ಆಗಸ್ಟ್ 5ರಂದು ಕೊಪ್ಪಳ ಜಿಲ್ಲೆಗೆ ಭೇಟಿ ನೀಡಿ, ವಿವಿಧ ಮಕ್ಕಳ ವಸತಿ ನಿಲಯಗಳು, ಶಾಲೆಗಳು, ಪೊಲೀಸ್ ಠಾಣೆಗಳು ಹಾಗೂ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಕಲ್ಪಿಸಲಾಗಿರುವ ಸೌಲಭ್ಯಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ, ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಗಣೇಶನಗರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ, ಹಿರೇಸಿಂದೋಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಗುನ್ನಾಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ, ಪಿಎಂ-ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಗಣೇಶನಗರ) ಹಾಗೂ ಶ್ರೀಶೈಲನಗರ ಪ್ರಾಥಮಿಕ ಶಾಲೆಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಭೇಟಿ ನೀಡಿ ಮೂಲಭೂತ ಸೌಕರ್ಯಗಳು, ಸ್ವಚ್ಛತೆ ಹಾಗೂ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ವಿತರಣೆಯ ಕುರಿತು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಕ್ಕಳ ರಕ್ಷಣಾ ನೀತಿ-2016 (ಪರಿಷ್ಕೃತ-2023) ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಿದ ಅಧ್ಯಕ್ಷರು, ನೀತಿಯನ್ನು ಶೇ.100ರಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಅದರ ವರದಿಯನ್ನು ಆಯೋಗಕ್ಕೆ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಬಳಿಕ ಕೊಪ್ಪಳ ನಗರ ಪೊಲೀಸ್ ಠಾಣೆ, ಮಹಿಳಾ ಪೊಲೀಸ್ ಠಾಣೆ, ಮಕ್ಕಳ ವಿಶೇಷ ಪೊಲೀಸ್ ಘಟಕ ಹಾಗೂ ಬೇವೂರು ಪೊಲೀಸ್ ಠಾಣೆಗಳ ಕಾರ್ಯವೈಖರಿಯನ್ನು ಪರಿಶೀಲಿಸಿದ ಅವರು, ಮಕ್ಕಳ ಸುರಕ್ಷತೆ ಕುರಿತು ನಿರಂತರ ಜಾಗೃತಿ ಕಾರ್ಯಕ್ರಮಗಳು ಹಾಗೂ “ತೆರೆದ ಮನೆ” ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸೂಚಿಸಿದರು. ಶಾಲೆ ಹಾಗೂ ಕಾಲೇಜುಗಳ ಆರಂಭ ಮತ್ತು ಮುಕ್ತಾಯದ ವೇಳೆಯಲ್ಲಿ ಬೀಟ್ ಸಿಬ್ಬಂದಿ ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಜಿಲ್ಲಾ ಆಸ್ಪತ್ರೆ ಹಾಗೂ ತಾಯಿ-ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ಸೇವೆಗಳು, ಚಿಕಿತ್ಸೆ ಮತ್ತು ಲಭ್ಯವಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು. ಬಳಿಕ ಪೌಷ್ಟಿಕ ಪುನರ್ವಸತಿ ಕೇಂದ್ರಕ್ಕೆ (ಎನ್‌ಆರ್‌ಸಿ) ಭೇಟಿ ನೀಡಿ ದಾಖಲಾದ ಮಕ್ಕಳ ಆರೋಗ್ಯದ ಕುರಿತು ವೈದ್ಯರಿಂದ ಮಾಹಿತಿ ಪಡೆದರು. ಬಾಲ ಗರ್ಭಿಣಿಯರ ಪ್ರಕರಣಗಳು ಕಂಡುಬಂದಲ್ಲಿ ವಿಶೇಷ ನಿಗಾವಹಿಸಿ ಚಿಕಿತ್ಸೆ ಒದಗಿಸುವುದರೊಂದಿಗೆ ಸಂಬಂಧಿತ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸೂಚಿಸಿದರು.
ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಬಿಸಿನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲದಿರುವುದನ್ನು ಗಮನಿಸಿದ ಅಧ್ಯಕ್ಷರು, ತಾಯಿ ಹಾಗೂ ಮಗುವಿನ ಅನುಕೂಲಕ್ಕಾಗಿ ಕುಡಿಯಲು ಮತ್ತು ಸ್ನಾನಕ್ಕೆ ಶೀಘ್ರವೇ ಬಿಸಿನೀರಿನ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು. ಅಲ್ಲದೆ ಸಾರ್ವಜನಿಕ ಶೌಚಾಲಯಗಳ ಸ್ವಚ್ಛತೆ ಕಾಪಾಡುವುದು ಹಾಗೂ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಸ್ವಚ್ಛ ಹಾಗೂ ಹೊಸ ಬೆಡ್‌ಶೀಟ್‌ಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ ಆಯೋಗದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಸಂತೋಷ ಕುಮಾರ ಹಾಗೂ ಸದಸ್ಯರಾದ ಸತ್ಯನಾರಾಯಣ ಶೆಟ್ಟಿ ಅವರು, ಪರಿಶೀಲನೆ ವೇಳೆ ಕಂಡುಬಂದ ನ್ಯೂನತೆಗಳನ್ನು ನಿರ್ಲಕ್ಷಿಸದೆ ಶೀಘ್ರದಲ್ಲಿ ಸರಿಪಡಿಸಿ ಕೈಗೊಂಡ ಕ್ರಮಗಳ ವರದಿಯನ್ನು ಆಯೋಗಕ್ಕೆ ಸಲ್ಲಿಸುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯ ಎಲ್ಲ ಇಲಾಖೆಗಳು ಮಕ್ಕಳ ಸುರಕ್ಷತೆ, ಮಕ್ಕಳ ಹಕ್ಕುಗಳ ಸಂರಕ್ಷಣೆ ಹಾಗೂ ಸಂಬಂಧಿತ ಕಾನೂನು ಮತ್ತು ನೀತಿಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು. ಜಿಲ್ಲೆಯ ವಸತಿ ನಿಲಯಗಳು, ಶಾಲೆಗಳು ಹಾಗೂ ಆಸ್ಪತ್ರೆಗಳಿಗೆ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ಅಗತ್ಯ ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಜಗದೀಶ, ಸಮಾಜ ಕಲ್ಯಣ ಇಲಾಖೆ ಉಪನಿರ್ದೇಶಕರಾದ ಅಜ್ಜಪ್ಪ ಸೊಗಲದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಅಮರೇಶ ಹಾವಿನ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರಾದ ಸೋಮಶೇಖರಗೌಡ ಪಾಟೀಲ್, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಮೀರ ಅಲಿ, ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಸುಧಾ ಗರಗ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಸಿಂಧು ಅಂಗಡಿ, ಕೊಪ್ಪಳ ಡಿವೈಎಸ್ಪಿ ಮುತ್ತಣ್ಣ ಸವರಗೋಳ, ಹಿಂದುಳಿ ವರ್ಗಗಳ ಕಲ್ಯಾಣ ಇಲಾಖೆ ವ್ಯವಸ್ಥಾಪಕರಾದ ಮಂಜುಳಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
