Make the necessary preparations for D. Devaraj Arasu’s birthday celebrations: District Commissioner Suresh Itnal
ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆ

ಡಿ.ದೇವರಾಜ ಅರಸು ಜನ್ಮ ದಿನಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಸುರೇಶ ಇಟ್ನಾಳ

ಡಿ.ದೇವರಾಜ ಅರಸು ಜನ್ಮ ದಿನಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಸುರೇಶ ಇಟ್ನಾಳ
ಕೊಪ್ಪಳ ಆಗಸ್ಟ್ 12, (ಕರ್ನಾಟಕ ವಾರ್ತೆ): ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಆಗಸ್ಟ್ 20 ರಂದು ಆಚರಿಸಲಾಗುವ ಡಿ.ದೇವರಾಜ ಅರಸು ರವರ 111ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಹೇಳಿದರು.
ಬುಧವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿ.ದೇವರಾಜ ಅರಸು ರವರ 111ನೇ ಜನ್ಮ ದಿನಾಚರಣೆಯ ಕುರಿತು ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಡಿ.ದೇವರಾಜ ಅರಸು ಜನ್ಮ ದಿನಾಚರಣೆಯ ಜಿಲ್ಲಾಮಟ್ಟದ ಕಾರ್ಯಕ್ರಮದ ಅಂಗವಾಗಿ ಮೆರವಣಿಗೆ ಸಾಗುವ ಮಾರ್ಗದ ರಸ್ತೆಗಳು ಹಾಗೂ ಸಾಹಿತ್ಯ ಭವನದ ಆವರಣವನ್ನು ಸ್ವಚ್ಛಗೊಳಿಸಬೇಕು. ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆಯಿಂದ ಕೈಗೊಳ್ಳಬೇಕು. ವೇದಿಕೆ ಕಾರ್ಯಕ್ರಮ ಶಿಷ್ಟಾಚಾರದಂತೆ ನಡೆಸಬೇಕು. ಮೆರವಣಿಗೆ ಸಾಗುವ ಮಾರ್ಗಕ್ಕೆ ಸೂಕ್ತ ಪೋಲಿಸ್ ಬಂದೋಬಸ್ತ್ ಒದಗಿಸಬೇಕು. ಡಿ.ದೇವರಾಜ ಅರಸ್ ಅವರ ಕುರಿತು ವಿಶೇಷ ಉಪನ್ಯಾಸದ ವ್ಯವಸ್ಥೆ ಮಾಡಬೇಕು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಇಲಾಖಾ ಮುಖ್ಯಸ್ಥರು ಹಾಗೂ ಸಿಬ್ಬಂದಿ ಕಡ್ಡಾಯ ಭಾಗವಹಿಸಬೇಕು. ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿ, ಶಾಲಾ ಕಾಲೇಜು ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಅಂದು ಅರಸು ಅವರ ಜನ್ಮದಿನಾಚರಣೆಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ಅವರು ಹೇಳಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ನಾಗಮಣಿ ಅವರು ಮಾತನಾಡಿ, ಆಗಸ್ಟ್ 20ರಂದು ಬೆಳಿಗ್ಗೆ 8 ಗಂಟೆಗೆ ಡಿ.ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆಯು ಶ್ರೀ ಗವಿಮಠದಿಂದ ಸಾಹಿತ್ಯ ಭವನದ ವರೆಗೆ ಗಡಿಯಾರ ಕಂಬದ ಮಾರ್ಗವಾಗಿ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲು ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ. ಕಾರ್ಯಕ್ರಮಕ್ಕೆ ಉಪನ್ಯಾಸಕರನ್ನು ಗುರುತಿಸಲಾಗುವುದು. ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು ಹಾಗೂ ಜಯಂತಿ ಆಚರಣೆಯ ರೂಪರೇಷೆಗಳನ್ನು ಸಭೆಗೆ ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ, ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಕರಿಯಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ರಮೇಶ ಹುಬ್ಬಳ್ಳಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.
Total Views:
0
