ಸಾರ್ವಜನಿಕರಿಗೆ ಹೆಚ್ಚು ಜಾಗೃತಿ ಮೂಡಿಸಿ, ತಂಬಾಕು ನಿಯಂತ್ರಣಕ್ಕೆ ಕ್ರಮ ವಹಿಸಲು ಸೂಚನೆ

H.Mallikarjun
H.Mallikarjun - Kalyanasiri
3 Min Read

Increase public awareness and instruct to take steps for tobacco control

ಸಾರ್ವಜನಿಕರಿಗೆ ಹೆಚ್ಚು ಜಾಗೃತಿ ಮೂಡಿಸಿ, ತಂಬಾಕು ನಿಯಂತ್ರಣಕ್ಕೆ ಕ್ರಮ ವಹಿಸಲು ಸೂಚನೆ
ಕೊಪ್ಪಳ ಆಗಸ್ಟ್ 28 (ಕರ್ನಾಟಕ ವಾರ್ತೆ): ಆರೋಗ್ಯಕ್ಕೆ ಹಾನಿಕರವಾಗಿರುವ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಹೆಚ್ಚು ಜಾಗೃತಿ ಮೂಡಿಸುವುದರ ಮೂಲಕ ತಂಬಾಕು ನಿಯಂತ್ರಣಕ್ಕೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿದ್ದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶ್ವದಾದ್ಯಂತ ಕ್ಯಾನ್ಸರ್, ಹೃದಯ ಸಂಬಂಧಿ ಖಾಯಿಲೆಗಳು, ಶ್ವಾಸಕೋಶದ ಖಾಯಿಲೆಗಳಿಗೆ ತಂಬಾಕು ಸೇವನೆಯೇ ಮುಖ್ಯ ಕಾರಣವಾಗಿದೆ. ತಂಬಾಕು ಸೇವನೆಯಿಂದಾಗುವ ಕಾಯಿಲೆಗಳು ಹಾಗೂ ಇತ್ಯಾದಿ ದುಷ್ಪರಿಣಾಮಗಳ ತಿಳುವಳಿಕೆ ಮೂಡಿಸಬೇಕು. ನಗರ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿ ಅಡಿಯಲ್ಲಿ ಬರುವ ಕಿರಾಣಿ ಅಂಗಡಿಗಳು, ಪಾನ್ ಶಾಪ್, ಹೊಟೇಲ್‌ಗಳಿಗೆ ಟಬಾಕೋ ವೆಂಡರ್ ಲೈಸನ್ಸ್ ನೀಡುಬ ಬಗ್ಗೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕೊಟ್ಟಾ-2003 ಕಾಯ್ದೆಯ ಸೆಕ್ಷನ್ 4ರಂತೆ ದೂಮಪಾನ ನಿಷೇಧಿತ ಪ್ರದೇಶ ಎಂಬ ನಾಮ ಫಲಕ ಹಾಕಿಕೊಳ್ಳುವಂತೆ ನೋಡಿಕೊಳ್ಳುವುದರ ಜೊತೆಗೆ ಸ್ವಚ್ಛತಾ ಸಿಬ್ಬಂದಿಗಳ ಮೂಲಕವು ಪ್ರಚಾರ ಕೈಗೊಳ್ಳಬೇಕು. ಸೆಕ್ಷನ್ 5ರ ಪ್ರಕಾರ ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹಿರಾತು, ಉತ್ತೇಜನ, ಪ್ರಾಯೋಜಕತ್ವವನ್ನು ಸಹ ನಿಷೇಧಿಸಲಾಗಿದೆ. ಸೆಕ್ಷನ್ 6ಎ ಪ್ರಕಾರ ಅಪ್ರಾಪ್ತ ವಯಸ್ಕರಿಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು ಹಾಗೂ ಅಪ್ರಾಪ್ತ ವಯಸ್ಕರಿಂದ ತಂಬಾಕು ಉತ್ಪನ್ನಗಳ ಮಾರಾಟ ನಡೆಸುವುದು ಶಿಕ್ಷಾರ್ಹ ಅಪರಾಧವಾಗಿದೆ, ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದರು.
ಸಾರಿಗೆ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಅಬಕಾರಿ ಇಲಾಖೆ ಮತ್ತು ಇತರೆ ಸಂಬಂಧಿತ ಇಲಾಖೆಗಳು ಕೋಟ್ಪಾ-2003ರ ಕಾಯ್ದೆಯಡಿಯಲ್ಲಿ ತಮ್ಮ ವ್ಯಾಪ್ತಿಗೆ ಒಳಪಡುವ ಪ್ರದೇಶದಲ್ಲಿ ಕಾಯ್ದೆ ಉಲ್ಲಂಘನೆಯಾದಲ್ಲಿ ಕ್ರಮ ಜರುಗಿಸಿ, ದಂಡ ವಿಧಿಸಿ ವರದಿಯನ್ನು ಕೊಪ್ಪಳ ಜಿಲ್ಲಾ ತಂಬಾಕು ನಿಯಂತ್ರಣ ಕೋಶಕ್ಕೆ ತಪ್ಪದೇ ನೀಡಬೇಕು. ಸೆಕ್ಷನ್ 6(ಬಿ) ಪ್ರಕಾರ ಶಿಕ್ಷಣ ಸಂಸ್ಥೆಯ 100 ಗಜದ ಒಳಗೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಶಿಕ್ಷಣ ಇಲಾಖೆಯು ತೀವ್ರ ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿಗಳು ಆಗಿರುವ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ ಅವರು ಕೊಟ್ಟಾ-2003 ಕಾಯ್ದೆಯ ಕುರಿತು ವಿವರವಾಗಿ ತಿಳಿಸಿದರು.
ಸಭೆಯಲ್ಲಿ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಈಶ್ವರ ಸವಡಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಪ್ರಕಾಶ ವಿ., ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರವೀಂದ್ರನಾಥ ಎಂ.ಎಚ್., ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಪ್ರಕಾಶ ಎಚ್., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಗೋನಾಳ ಕುಮಾರಸ್ವಾಮಿ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಶಶೀಧರ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಪರ್ವತಗೌಡ ಹಿರೇಗೌಡ್ರ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ತಾಲ್ಲೂಕುಗಳ ಆರೋಗ್ಯಾಧಿಕಾರಿಗಳು, ಕೊಪ್ಪಳ ಕಿಮ್ಸ್ ತಜ್ಞ ವೈದ್ಯರು, ವಿವಿಧ ಆರೋಗ್ಯ ಸಂಸ್ಥೆಗಳ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
****
Total Views: 0
ಜಾಹೀರಾತು
Share This Article