Indefinite non-cooperation movement by Panchayat Development Officers starting September 21 to press for demands
Panchayat Development Officers' Association decides on a state-wide agitation

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಬೇಡಿಕೆ ಈಡೇರಿಕೆಗೆ ಸೆ.21ರಿಂದ ಅನಿರ್ದಿಷ್ಟಾವಧಿ ಅಸಹಕಾರ ಚಳವಳಿ
ರಾಜ್ಯವ್ಯಾಪಿ ಹೋರಾಟಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘದ ನಿರ್ಧಾರ

ಕೊಪ್ಪಳ: ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸೇವಾ ವಿಷಯಗಳು ಹಾಗೂ ಗ್ರಾಮ ಪಂಚಾಯಿತಿಗಳ ಆಡಳಿತಾತ್ಮಕ ಮತ್ತು ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಸೇರಿದಂತೆ ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ (ರಿ.), ಬೆಂಗಳೂರು ವತಿಯಿಂದ ಸೆಪ್ಟೆಂಬರ್ 21, 2026ರ ಸೋಮವಾರದಿಂದ ರಾಜ್ಯವ್ಯಾಪಿ ಅನಿರ್ದಿಷ್ಟಾವಧಿ ಅಸಹಕಾರ ಚಳವಳಿ ಮತ್ತು ಹೋರಾಟ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.
ಕೊಪ್ಪಳ: ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸೇವಾ ವಿಷಯಗಳು ಹಾಗೂ ಗ್ರಾಮ ಪಂಚಾಯಿತಿಗಳ ಆಡಳಿತಾತ್ಮಕ ಮತ್ತು ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಸೇರಿದಂತೆ ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ (ರಿ.), ಬೆಂಗಳೂರು ವತಿಯಿಂದ ಸೆಪ್ಟೆಂಬರ್ 21, 2026ರ ಸೋಮವಾರದಿಂದ ರಾಜ್ಯವ್ಯಾಪಿ ಅನಿರ್ದಿಷ್ಟಾವಧಿ ಅಸಹಕಾರ ಚಳವಳಿ ಮತ್ತು ಹೋರಾಟ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.
ಸಂಘವು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸೇವಾ ವಿಷಯಗಳು ಹಾಗೂ ಗ್ರಾಮ ಪಂಚಾಯಿತಿಗಳ ಸಮಸ್ಯೆಗಳ ಕುರಿತು ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಪ್ರಮುಖ ಬೇಡಿಕೆಗಳು ಸಮರ್ಪಕವಾಗಿ ಈಡೇರದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲಾ ಘಟಕಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಸಭೆಯಲ್ಲಿ ಕೈಗೊಂಡ ಸರ್ವಾನುಮತದ ನಿರ್ಣಯದಂತೆ ಹೋರಾಟಕ್ಕೆ ಮುಂದಾಗಿರುವುದಾಗಿ ಸಂಘ ತಿಳಿಸಿದೆ.
ಪ್ರಮುಖ ಬೇಡಿಕೆಗಳು
ರಾಜ್ಯದ ಎಲ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ಏಕಕಾಲದಲ್ಲಿ ಗ್ರೂಪ್–ಬಿ ಹುದ್ದೆಗಳಾಗಿ ಉನ್ನತೀಕರಿಸಬೇಕು.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಜ್ಯೇಷ್ಠತಾ ಪಟ್ಟಿಯಲ್ಲಿರುವ ಗೊಂದಲಗಳನ್ನು ನಿವಾರಿಸಿ, ಅರ್ಹ ಅಧಿಕಾರಿಗಳಿಗೆ ವಿಳಂಬವಿಲ್ಲದೆ ಬಡ್ತಿ ನೀಡಬೇಕು.
ಗ್ರಾಮ ಪಂಚಾಯಿತಿಗಳಿಗೆ ಬಾಕಿಯಿರುವ 15ನೇ ಹಣಕಾಸು ಆಯೋಗದ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು.
ಗ್ರಾಮ ಪಂಚಾಯಿತಿಗಳ ಕುಡಿಯುವ ನೀರು ಮತ್ತು ನೈರ್ಮಲ್ಯ ಸೇವೆಗಳಿಗೆ ರಾಜ್ಯ ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡಬೇಕು. ನೈರ್ಮಲ್ಯ ಕಾರ್ಯಗಳಿಗೆ ವಾರ್ಷಿಕ ₹10 ಲಕ್ಷದಿಂದ ₹15 ಲಕ್ಷದವರೆಗೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮತ್ತು ನಿರ್ವಹಣೆಗೆ ₹25 ಲಕ್ಷದಿಂದ ₹35 ಲಕ್ಷದವರೆಗೆ ಅನುದಾನ ಒದಗಿಸಬೇಕು.
ಸೆ.21ರಿಂದ ರಾಜ್ಯದ ಎಲ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಅನಿರ್ದಿಷ್ಟಾವಧಿ ಅಸಹಕಾರ ಚಳವಳಿ ಪ್ರಾರಂಭಿಸಲಿದ್ದಾರೆ. ಹೋರಾಟದ ಮೊದಲ ಮೂರು ದಿನಗಳಾದ ಸೋಮವಾರ, ಮಂಗಳವಾರ ಮತ್ತು ಬುಧವಾರ, ಆಯಾ ಜಿಲ್ಲಾ ಪಂಚಾಯಿತಿ ಕಚೇರಿಗಳ ಮುಂಭಾಗದಲ್ಲಿ ಜಿಲ್ಲಾ ಮಟ್ಟದ ಪ್ರತಿಭಟನೆ ನಡೆಸಲಾಗುವುದು. ನಂತರ ರಾಜ್ಯ ಸಂಘದ ನಿರ್ದೇಶನದಂತೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯಮಟ್ಟದ ಅನಿರ್ದಿಷ್ಟಾವಧಿ ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಲಾಗಿದೆ.
ಹೋರಾಟದ ಅವಧಿಯಲ್ಲಿ ಗ್ರಾಮ ಪಂಚಾಯಿತಿಗಳ ಅತ್ಯಗತ್ಯ ಸೇವೆಗಳಾದ ಕುಡಿಯುವ ನೀರು ಪೂರೈಕೆ, ಬೀದಿದೀಪ ನಿರ್ವಹಣೆ ಮತ್ತು ನೈರ್ಮಲ್ಯ ಸೇವೆಗಳನ್ನು ಹೊರತುಪಡಿಸಿ, ಉಳಿದ ಯೋಜನೆಗಳು, ತಂತ್ರಾಂಶಗಳು, ಆಡಳಿತಾತ್ಮಕ ಕಾರ್ಯಗಳು ಹಾಗೂ ಹೆಚ್ಚುವರಿ ಜವಾಬ್ದಾರಿಗಳ ನಿರ್ವಹಣೆಯನ್ನು ಸ್ಥಗಿತಗೊಳಿಸಿ ಅಸಹಕಾರ ವ್ಯಕ್ತಪಡಿಸಲಾಗುವುದು ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಂಘದ ನ್ಯಾಯಸಮ್ಮತ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಅವುಗಳ ಕುರಿತು ಸರ್ಕಾರದ ಗಮನ ಸೆಳೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಜಿಲ್ಲಾ ಮಟ್ಟದಲ್ಲಿ ನಡೆಯಲಿರುವ ಶಾಂತಿಯುತ ಹೋರಾಟಕ್ಕೆ ಅಗತ್ಯ ಸಹಕಾರ ನೀಡಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯಿತಿಗೆ ಸಲ್ಲಿಸಿರುವ ಮಾಹಿತಿಯಲ್ಲಿ ಮನವಿ ಮಾಡಲಾಗಿದೆ.

