
Delay in Issuance of Original Mark Sheets: SFI Submits Memorandum to the Governor via Koppal Tahsildar's Office
ಮೂಲ ಅಂಕಪಟ್ಟಿ ವಿತರಣೆಗೆ ವಿಳಂಬ: ಕೊಪ್ಪಳ ತಹಶೀಲ್ದಾರ್ ಕಚೇರಿ ಮೂಲಕ ರಾಜ್ಯಪಾಲರಿಗೆ SFI ಮನವಿ
ಕೊಪ್ಪಳ ವಿಶ್ವವಿದ್ಯಾಲಯದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯ
ಕೊಪ್ಪಳ, ಅ.15: ಕೊಪ್ಪಳ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ 2023–24, 2024–25 ಹಾಗೂ 2025–26ನೇ ಶೈಕ್ಷಣಿಕ ಸಾಲಿನಲ್ಲಿ ವಿವಿಧ ಪದವಿ ಕೋರ್ಸ್ಗಳನ್ನು ಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ ಮೂಲ ಅಂಕಪಟ್ಟಿಗಳನ್ನು ತ್ವರಿತವಾಗಿ ವಿತರಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಕೊಪ್ಪಳ ಜಿಲ್ಲಾ ಸಮಿತಿ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಕೊಪ್ಪಳ ತಹಶೀಲ್ದಾರ್ ಕಚೇರಿ ಮೂಲಕ ರಾಜ್ಯಪಾಲರಿಗೆ ಸಲ್ಲಿಸಿದ ಮನವಿ ಪತ್ರವನ್ನು ಉಪ ತಹಶೀಲ್ದಾರ್ ಗವಿಸಿದ್ದಪ್ಪ ಮಣ್ಣೂರು ಅವರು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ SFI ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ಯು., ಕೊಪ್ಪಳ ವಿಶ್ವವಿದ್ಯಾಲಯದ ವ್ಯಾಪ್ತಿಯ ವಿವಿಧ ಕಾಲೇಜುಗಳಲ್ಲಿ ಬಿ.ಎಸ್ಸಿ., ಬಿ.ಎ., ಬಿ.ಕಾಂ., ಬಿಬಿಎ, ಬಿಇಡಿ ಸೇರಿದಂತೆ ವಿವಿಧ ಪದವಿ ಕೋರ್ಸ್ಗಳನ್ನು ಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ ಮೂಲ ಅಂಕಪಟ್ಟಿಗಳ ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿದರು.
ಪದವಿ ಪೂರ್ಣಗೊಳಿಸಿದ ಬಳಿಕ ಮೂಲ ಅಂಕಪಟ್ಟಿಗಳು ಸಮಯಕ್ಕೆ ದೊರೆಯದಿರುವುದರಿಂದ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವುದು, ಸ್ನಾತಕೋತ್ತರ ಪದವಿಗಳಿಗೆ ಅರ್ಜಿ ಸಲ್ಲಿಸುವುದು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ದಾಖಲೆಗಳನ್ನು ಸಲ್ಲಿಸುವುದು ಹಾಗೂ ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ತೊಂದರೆ ಅನುಭವಿಸುವಂತಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ತಮ್ಮ ಪದವಿ ಶಿಕ್ಷಣವನ್ನು ಪೂರ್ಣಗೊಳಿಸಿದ್ದರೂ ಅಗತ್ಯ ದಾಖಲೆಗಳಿಗಾಗಿ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ಅವರ ಮುಂದಿನ ಶೈಕ್ಷಣಿಕ ಮತ್ತು ಉದ್ಯೋಗ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಪರಿಹರಿಸಬೇಕು ಎಂದು ಒತ್ತಾಯಿಸಿದರು.
SFI ಪ್ರಮುಖ ಬೇಡಿಕೆಗಳು
- 2023–24, 2024–25 ಹಾಗೂ 2025–26ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಪೂರ್ಣಗೊಳಿಸಿರುವ ಅರ್ಹ ವಿದ್ಯಾರ್ಥಿಗಳಿಗೆ ಬಾಕಿ ಇರುವ ಮೂಲ ಅಂಕಪಟ್ಟಿಗಳನ್ನು ತಕ್ಷಣ ವಿತರಿಸಬೇಕು.
- ಅಂಕಪಟ್ಟಿ ವಿತರಣೆಯಲ್ಲಿ ವಿಳಂಬವಾಗಲು ಕಾರಣವೇನು ಎಂಬುದನ್ನು ಪರಿಶೀಲಿಸಿ, ಹೊಣೆಗಾರಿಕೆಯನ್ನು ನಿಗದಿಪಡಿಸಬೇಕು.
- ಅಂಕಪಟ್ಟಿ ವಿತರಣೆಗೆ ಸ್ಪಷ್ಟ ಕಾಲಮಿತಿ ನಿಗದಿಪಡಿಸಿ ವಿದ್ಯಾರ್ಥಿಗಳಿಗೆ ಅಧಿಕೃತವಾಗಿ ಮಾಹಿತಿ ನೀಡಬೇಕು.
- ಮೂಲ ಅಂಕಪಟ್ಟಿ ದೊರೆಯದ ಕಾರಣ ಉನ್ನತ ಶಿಕ್ಷಣ, ಉದ್ಯೋಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ತಾತ್ಕಾಲಿಕವಾಗಿ ಅಗತ್ಯ ದಾಖಲೆಗಳನ್ನು ಒದಗಿಸಬೇಕು.
- ಮುಂದಿನ ದಿನಗಳಲ್ಲಿ ಇಂತಹ ವಿಳಂಬ ಮರುಕಳಿಸದಂತೆ ಶಾಶ್ವತ ಹಾಗೂ ಪರಿಣಾಮಕಾರಿ ವ್ಯವಸ್ಥೆ ರೂಪಿಸಬೇಕು.
ಈ ಕುರಿತು ರಾಜ್ಯಪಾಲರು ಮಧ್ಯಪ್ರವೇಶಿಸಿ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿ ವಿದ್ಯಾರ್ಥಿಗಳ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಬೇಕೆಂದು SFI ಜಿಲ್ಲಾ ಸಮಿತಿ ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಸಹ ಕಾರ್ಯದರ್ಶಿಗಳಾದ ಹನುಮೇಶ್ ಹಾಗೂ ಆಕಾಶ್, ವಿದ್ಯಾರ್ಥಿಗಳಾದ ಸಾಂಕೇತ್, ಸಾಯಿ ಕೃಷ್ಣ, ರೋಹಿತ್ ಹಾಗೂ ಪ್ರಶಾಂತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.




