
Never compromise on values: Dr. Vishnu Bharath Alampalli
ಮೌಲ್ಯಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳಬೇಡಿ: ಡಾ. ವಿಷ್ಣು ಭರತ್ ಆಲಂಪಲ್ಲಿ
ಬೆಂಗಳೂರು, ಅ.16: ತಾತ್ಕಾಲಿಕ ಯಶಸ್ಸಿಗಾಗಿ ಜೀವನದ ಮೌಲ್ಯಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳಬಾರದು. ಪ್ರಾಮಾಣಿಕತೆ, ನೈತಿಕತೆ ಹಾಗೂ ಉತ್ತಮ ವ್ಯಕ್ತಿತ್ವವೇ ಶಾಶ್ವತ ಸಾಧನೆಯ ಅಡಿಪಾಯ ಎಂದು ಎಪಿಎಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಸಿ.ಎ. ಡಾ. ವಿಷ್ಣು ಭರತ್ ಆಲಂಪಲ್ಲಿ ಹೇಳಿದರು.
ಎಪಿಎಸ್ ಕಾಮರ್ಸ್ ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರತಿಭಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣವು ಕೇವಲ ಪಠ್ಯಜ್ಞಾನಕ್ಕೆ ಸೀಮಿತವಾಗಬಾರದು. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ, ಸೃಜನಶೀಲತೆ, ಶಿಸ್ತು, ಆತ್ಮವಿಶ್ವಾಸ ಹಾಗೂ ವ್ಯಕ್ತಿತ್ವವನ್ನು ಬೆಳೆಸುವಂತಿರಬೇಕು ಎಂದರು.
ವಿದ್ಯಾರ್ಥಿಗಳು ತಮ್ಮ ಸಾಧನೆಗೆ ಎಂದಿಗೂ ಮಿತಿ ವಿಧಿಸಿಕೊಳ್ಳಬಾರದು. ಜೀವನದಲ್ಲಿ ಎಷ್ಟೇ ಸವಾಲುಗಳು ಎದುರಾದರೂ ತಮ್ಮ ಗುರಿಯತ್ತ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ಆದರೆ ಯಾವುದೇ ಸಂದರ್ಭದಲ್ಲೂ ತಾತ್ಕಾಲಿಕ ಯಶಸ್ಸಿಗಾಗಿ ಮೌಲ್ಯಗಳನ್ನು ಬಲಿಕೊಡಬಾರದು ಎಂದು ಸಲಹೆ ನೀಡಿದರು.
ಪ್ರತಿಭಾ ದಿನಾಚರಣೆಯಲ್ಲಿ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆ, ಆತ್ಮವಿಶ್ವಾಸ, ಕಲಾತ್ಮಕ ಕೌಶಲ್ಯ ಹಾಗೂ ವೈವಿಧ್ಯಮಯ ಪ್ರತಿಭೆಗಳನ್ನು ಪ್ರದರ್ಶಿಸುವ ಮೂಲಕ ಗಮನ ಸೆಳೆದರು. ಕಾರ್ಯಕ್ರಮಕ್ಕೆ ನಟ ಶ್ರೀನಾಥ್ ವಸಿಷ್ಠ ಹಾಗೂ ಖ್ಯಾತ ಗಾಯಕಿ ಜೋಗಿ ಸುನಿತಾ ವಿಶೇಷ ಮೆರುಗು ನೀಡಿದರು.
ನಟ ಶ್ರೀನಾಥ್ ವಸಿಷ್ಠ ಮಾತನಾಡಿ, ಎಪಿಎಸ್ ಸಂಸ್ಥೆಯೊಂದಿಗಿನ ತಮ್ಮ ನಂಟು ಹಾಗೂ ಸಂಸ್ಥೆಯೊಂದಿಗಿನ ಹಳೆಯ ನೆನಪುಗಳನ್ನು ಆತ್ಮೀಯವಾಗಿ ಹಂಚಿಕೊಂಡರು. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಎಪಿಎಸ್ ಸಂಸ್ಥೆ ನೀಡುತ್ತಿರುವ ಆದ್ಯತೆಯನ್ನು ಶ್ಲಾಘಿಸಿದರು.
ಯುವ ಮನಸ್ಸುಗಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಅದನ್ನು ಪೋಷಿಸಿ, ಸೂಕ್ತ ವೇದಿಕೆ ಕಲ್ಪಿಸುವುದು ಅತ್ಯಂತ ಮುಖ್ಯ. ಶಿಕ್ಷಣ ಸಂಸ್ಥೆಗಳು ಕೇವಲ ಶೈಕ್ಷಣಿಕ ಚಟುವಟಿಕೆಗಳಿಗೆ ಸೀಮಿತವಾಗದೆ, ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಗುರುತಿಸಿಕೊಂಡು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗಾಯಕಿ ಜೋಗಿ ಸುನಿತಾ ಅವರ ಗಾಯನ ವಿದ್ಯಾರ್ಥಿಗಳ ಗಮನ ಸೆಳೆಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಎಚ್.ವಿ. ಗೌತಮ, ಜಂಟಿ ಕಾರ್ಯದರ್ಶಿ ಎ. ರಾಮಪ್ರಸಾದ್, ಪ್ರಾಂಶುಪಾಲ ಪರಮೇಶ್ವರ್ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




