ಬಾಲ್ಯವಿವಾಹ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ಜಾಗೃತಿ ಮೂಡಿಸಿ: ಸಿಂಧು ಅಂಗಡಿ

H.Mallikarjun
H.Mallikarjun - Kalyanasiri
3 Min Read
ಜಾಹೀರಾತು
ಜಾಹೀರಾತು
Create awareness to prevent child marriage and sexual abuse of children: Sindhu Angadi

ಬಾಲ್ಯವಿವಾಹ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ಜಾಗೃತಿ ಮೂಡಿಸಿ: ಸಿಂಧು ಅಂಗಡಿ

ಜಾಹೀರಾತು

ಸುರಕ್ಷಿತ ಬಚಪನ್ ಅಭಿಯಾನದಡಿ ಬೂದಗುಂಪಾ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳು ಮತ್ತು ಕಾನೂನುಗಳ ಕುರಿತು ಅರಿವು ಕಾರ್ಯಕ್ರಮ

ಕೊಪ್ಪಳ, ಅ. 29: ಮಕ್ಕಳ ಹಕ್ಕುಗಳ ರಕ್ಷಣೆ, ಬಾಲ್ಯವಿವಾಹ ತಡೆ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಕಾನೂನುಗಳ ಕುರಿತು ಪ್ರತಿಯೊಬ್ಬರೂ ಅರಿವು ಹೊಂದಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಅಂಗಡಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಗುರುವಾರ ಕೊಪ್ಪಳ ತಾಲ್ಲೂಕಿನ ಬೂದಗುಂಪಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ‘ಸುರಕ್ಷಿತ ಬಚಪನ್ ಅಭಿಯಾನ’ದ ಅಂಗವಾಗಿ ಆಯೋಜಿಸಿದ್ದ ಮಕ್ಕಳ ಹಕ್ಕುಗಳು ಮತ್ತು ಕಾನೂನುಗಳ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ರಕ್ಷಣೆಗೆ ಪೋಕ್ಸೊ ಕಾಯ್ದೆ ಪ್ರಮುಖ ಅಸ್ತ್ರ
ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳನ್ನು ತಡೆಗಟ್ಟಲು ಸರ್ಕಾರವು ವಿವಿಧ ಕಾನೂನುಗಳನ್ನು ಜಾರಿಗೊಳಿಸಿದೆ. ಅವುಗಳಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ (ಪೋಕ್ಸೊ)-2012 ಹಾಗೂ 2019ರ ತಿದ್ದುಪಡಿ ಪ್ರಮುಖವಾಗಿವೆ. ಕುಟುಂಬ, ಸ್ನೇಹಿತರು ಅಥವಾ ಸಾಮಾಜಿಕ ಮಾಧ್ಯಮಗಳ ಪ್ರಭಾವದಿಂದ ಪ್ರೀತಿ-ಪ್ರೇಮದ ಹೆಸರಿನಲ್ಲಿ ಕೆಲವು ಮಕ್ಕಳು ತಿಳಿದೋ ತಿಳಿಯದೆಯೋ ಸಂಕಷ್ಟಗಳಿಗೆ ಸಿಲುಕುತ್ತಿದ್ದಾರೆ. ಇಂತಹ ಸಂದರ್ಭಗಳಲ್ಲಿ ಮಕ್ಕಳು ಕಾನೂನಿನಡಿ ಸಂತ್ರಸ್ತರಾಗುವ ಅಥವಾ ಕಾನೂನಿನೊಂದಿಗೆ ಸಂಘರ್ಷಕ್ಕೆ ಒಳಗಾಗುವ ಸಾಧ್ಯತೆಗಳಿವೆ ಎಂದು ಎಚ್ಚರಿಸಿದರು.
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಕಿರುಕುಳ ಹಾಗೂ ಇಂತಹ ಕೃತ್ಯಗಳಿಗೆ ಸಹಾಯ ಅಥವಾ ಪ್ರೋತ್ಸಾಹ ನೀಡುವವರ ವಿರುದ್ಧವೂ ಕಾನೂನಿನಡಿ ಕಠಿಣ ಕ್ರಮ ಕೈಗೊಳ್ಳಲು ಅವಕಾಶವಿದೆ. ಆದ್ದರಿಂದ ಮಕ್ಕಳು ಯಾವುದೇ ರೀತಿಯ ಕಿರುಕುಳಕ್ಕೆ ಒಳಗಾದರೆ ಭಯಪಡದೆ ಪೋಷಕರು, ಶಿಕ್ಷಕರು ಅಥವಾ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ತಿಳಿಸಿದರು.
ಬಾಲ್ಯವಿವಾಹ ಮುಕ್ತ ಜಿಲ್ಲೆ ನಿರ್ಮಾಣಕ್ಕೆ ಸಹಕರಿಸಿ
ಬಾಲ್ಯವಿವಾಹ ನಿಷೇಧ ಕಾಯ್ದೆ-2006ರ ಕುರಿತು ಮಾಹಿತಿ ನೀಡಿದ ಸಿಂಧು ಅಂಗಡಿ, ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮದುವೆ ಮಾಡುವುದು ಕಾನೂನುಬಾಹಿರವಾಗಿದೆ. ಬಾಲ್ಯವಿವಾಹದಲ್ಲಿ ಭಾಗವಹಿಸುವವರು, ಆಯೋಜಿಸುವವರು ಹಾಗೂ ಪ್ರೋತ್ಸಾಹಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅವಕಾಶವಿದೆ. ತಪ್ಪಿತಸ್ಥರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದಾಗಿದೆ. ಹೀಗಾಗಿ ಪೋಷಕರು ತಮ್ಮ ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಬಾಲ್ಯವಿವಾಹಕ್ಕೆ ಮುಂದಾಗಬಾರದು. ಕೊಪ್ಪಳ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
ಅನಾಥ ಹಾಗೂ ಸಂಕಷ್ಟದಲ್ಲಿರುವ ಮಕ್ಕಳಿಗೆ ಸಹಾಯವಾಣಿ 1098
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ (ಅಸಾಂಸ್ಥಿಕ) ರವಿ ಬಡಿಗೇರ ಮಾತನಾಡಿ, ರಾಜ್ಯದಲ್ಲಿ ನವೆಂಬರ್ ತಿಂಗಳನ್ನು ‘ದತ್ತು ಜಾಗೃತಿ ಮಾಸ’ವನ್ನಾಗಿ ಆಚರಿಸಲಾಗುತ್ತದೆ. ಪೋಷಣೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳನ್ನು ರಸ್ತೆಬದಿ, ಕಸದ ತೊಟ್ಟಿ ಅಥವಾ ದೇವಸ್ಥಾನಗಳ ಬಳಿ ಬಿಟ್ಟುಹೋಗುವುದು ಅಮಾನವೀಯ ಹಾಗೂ ಕಾನೂನುಬಾಹಿರ ಕೃತ್ಯವಾಗಿದೆ ಎಂದು ಹೇಳಿದರು.
ಅಂತಹ ಮಕ್ಕಳು ಕಂಡುಬಂದರೆ ತಕ್ಷಣ ಮಕ್ಕಳ ಸಹಾಯವಾಣಿ 1098 ಅಥವಾ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮೂಲಕ ಕಾನೂನುಬದ್ಧ ಪ್ರಕ್ರಿಯೆಗೆ ಒಳಪಡಿಸಿ, ಅಗತ್ಯ ರಕ್ಷಣೆ ಮತ್ತು ಪುನರ್ವಸತಿ ಕಲ್ಪಿಸಲಾಗುತ್ತದೆ. ದತ್ತು ಪ್ರಕ್ರಿಯೆಯು ಕಾನೂನುಬದ್ಧವಾಗಿ ನಡೆಯಬೇಕು. ಈ ಸಂದರ್ಭದಲ್ಲಿ ಸಂಬಂಧಪಟ್ಟವರ ವಿವರಗಳನ್ನು ನಿಯಮಾನುಸಾರ ಗೌಪ್ಯವಾಗಿಡಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯ ಗುರುರಾಜ ಚಕ್ರಸಾಲಿ ವಹಿಸಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯೆ ಪ್ರತಿಭಾ ಕಾಶಿಮಠ, ಮಕ್ಕಳ ಸಹಾಯವಾಣಿ ಸಂಯೋಜಕ ಶರಣಪ್ಪ ಸಿಂಗನಾಳ, ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾವೇರಿ ಸಂಗಟಿ ಪ್ರಾರ್ಥಿಸಿದರು. ಸಹಶಿಕ್ಷಕಿ ಲಕ್ಷ್ಮವ್ವ ವಂದಿಸಿದರು.

Total Views: 0
ಜಾಹೀರಾತು
Share This Article
Leave a Comment