

ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ: ಶಾಸಕ ಪ್ರಭು ಚವ್ಹಾಣ
Respond immediately to the drinking water problem: MLA Prabhu Chauhan
ಅಧಿಕಾರಿಗಳ ನಿರ್ಲಕ್ಷ್ಯ ಸಹಿಸುವುದಿಲ್ಲ; ಸಮಸ್ಯೆ ಕಂಡರೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಸೂಚನೆ
ಔರಾದ (ಬಿ) ಹಾಗೂ ಕಮಲನಗರ ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು. ಕುಡಿಯುವ ನೀರಿನ ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಔರಾದ (ಬಿ) ಶಾಸಕ ಹಾಗೂ ಮಾಜಿ ಸಚಿವ ಪ್ರಭು ಬಿ.ಚವ್ಹಾಣ ಎಚ್ಚರಿಕೆ ನೀಡಿದರು.
ಪಟ್ಟಣದ ತಾಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನ.2ರಂದು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
ಈ ಬಾರಿ ಸರಾಸರಿಗಿಂತ ಅತ್ಯಂತ ಕಡಿಮೆ ಮಳೆಯಾಗಿದ್ದು, ಈಗಾಗಲೇ ಹಲವು ಗ್ರಾಮಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆ ಆರಂಭಕ್ಕೂ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವುದರಿಂದ ಗ್ರಾಮೀಣ ಪ್ರದೇಶದ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಮಸ್ಯೆಗೆ ತಕ್ಷಣ ಸ್ಪಂದಿಸಬೇಕು ಎಂದು ಸೂಚಿಸಿದರು.
ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಗ್ರಾಮಗಳಲ್ಲಿ ಕೂಡಲೇ ಟ್ಯಾಂಕರ್ ಅಥವಾ ಪರ್ಯಾಯ ವ್ಯವಸ್ಥೆ ಮೂಲಕ ನೀರು ಪೂರೈಸಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ ಸ್ಥಳೀಯ ಸಮಸ್ಯೆಗಳನ್ನು ಪರಿಶೀಲಿಸಬೇಕು. ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಲು ಅಧಿಕಾರಿಗಳು ತಮ್ಮ ಮೊಬೈಲ್ಗಳನ್ನು ಸದಾ ಚಾಲ್ತಿಯಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದರು.
ಅಧಿಕಾರಿಗಳು ಮೊಬೈಲ್ ಸ್ವಿಚ್ ಆಫ್ ಮಾಡುವುದು, ಸಾರ್ವಜನಿಕರೊಂದಿಗೆ ಅಗೌರವದಿಂದ ಮಾತನಾಡುವುದು ಅಥವಾ ಅಸಭ್ಯವಾಗಿ ವರ್ತಿಸುವುದು ಕಂಡುಬಂದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಶಾಸಕರು ಖಡಕ್ ಎಚ್ಚರಿಕೆ ನೀಡಿದರು.
ಗ್ರಾಮ ಪಂಚಾಯಿತಿವಾರು ಪ್ರಗತಿ ಪರಿಶೀಲನೆ

ಸಭೆಯಲ್ಲಿ ಗ್ರಾಮ ಪಂಚಾಯಿತಿವಾರು ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಶಾಸಕರು ಮಾಹಿತಿ ಪಡೆದರು. ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಇದುವರೆಗೆ ಕೈಗೊಂಡಿರುವ ಕ್ರಮಗಳು, ತುರ್ತು ಪರಿಹಾರ ಕ್ರಮಗಳು ಹಾಗೂ ಮುಂದಿನ ಯೋಜನೆಗಳ ಕುರಿತು ಅಧಿಕಾರಿಗಳಿಂದ ವಿವರಣೆ ಪಡೆದರು.
ನೀರಿನ ಸಂಪನ್ಮೂಲಗಳ ಕೊರತೆಯಿರುವ ಹಾಗೂ ಸಮಸ್ಯೆ ತೀವ್ರವಾಗಿರುವ ಎಲ್ಲ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಲಭ್ಯವಿರುವ ಜಲಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸೂಚಿಸಿದರು.
ಮೋಟಾರ್ ಕೆಟ್ಟಿದೆ, ವಾಟರ್ಮೆನ್ ಕೆಲಸ ಮಾಡುತ್ತಿಲ್ಲ, ವಿದ್ಯುತ್ ತಂತಿ ದೋಷವಾಗಿದೆ ಎಂಬ ಸಣ್ಣಪುಟ್ಟ ಕಾರಣಗಳನ್ನು ಮುಂದಿಟ್ಟುಕೊಂಡು ನೀರು ಪೂರೈಕೆ ಸ್ಥಗಿತಗೊಳಿಸಿರುವುದು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಭು ಚವ್ಹಾಣ ಎಚ್ಚರಿಸಿದರು.
ಸಭೆಯಲ್ಲಿ ತಹಸೀಲ್ದಾರರಾದ ಮಹೇಶ ಪಾಟೀಲ, ಅಮಿತಕುಮಾರ ಕುಲಕರ್ಣಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕಿರಣ ಪಾಟೀಲ, ಹಣಮಂತರಾಯ ಕೌಟಗೆ, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
ಕುಡಿಯುವ ನೀರಿಗಾಗಿ ಶಾಸಕರ ಕಚೇರಿಯಲ್ಲಿ ಸಹಾಯವಾಣಿ
ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸುವ ಉದ್ದೇಶದಿಂದ ಶಾಸಕ ಪ್ರಭು ಬಿ.ಚವ್ಹಾಣ ಅವರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ.
ಔರಾದ (ಬಿ) ಹಾಗೂ ಕಮಲನಗರ ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ ಸಾರ್ವಜನಿಕರು ಕೆಳಗಿನ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು.
ಸಹಾಯವಾಣಿ:
9108708774
7090157920



