
Koppal District-Level Youth Parliament Draws Attention, Modeled After the Legislative Assembly

ವಿಧಾನಸಭೆಯ ಮಾದರಿಯಲ್ಲಿ ಗಮನ ಸೆಳೆದ ಕೊಪ್ಪಳ ಜಿಲ್ಲಾ ಮಟ್ಟದ ಯುವ ಸಂಸತ್ತು

ಕೊಪ್ಪಳ, ನ. 13 (ಕರ್ನಾಟಕ ವಾರ್ತೆ): ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ (ನ. 13) ನಗರದ ಹೊಸಪೇಟೆ ರಸ್ತೆಯ ಮಧುಶ್ರೀ ಗಾರ್ಡನ್ನಲ್ಲಿ ‘ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮ’ ಅತ್ಯಂತ ಯಶಸ್ವಿಯಾಗಿ ಜರುಗಿತು.
ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಸುರೇಶ್ ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಯಿಲ್ ಬಾಗ್ಲಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಅಜ್ಜಪ್ಪ ಸೋಗಲದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ ಕಾಲೇಜುಗಳ ಶಿಕ್ಷಕರು ಹಾಗೂ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಈ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಪಾಲ್ಗೊಂಡಿದ್ದರು. ನಾಡಗೀತೆ ಹಾಗೂ ಸಂವಿಧಾನದ ಪೀಠಿಕೆ ವಾಚನದೊಂದಿಗೆ ಅಣಕು ಚಳಿಗಾಲದ ಅಧಿವೇಶನಕ್ಕೆ ಅಧಿಕೃತ ಚಾಲನೆ ನೀಡಲಾಯಿತು.
ರಾಜ್ಯ ವಿಧಾನಸಭೆಯ ಕಲಾಪಗಳ ಮಾದರಿಯಲ್ಲೇ ನಡೆದ ಈ ಯುವ ಸಂಸತ್ ಸ್ಪರ್ಧೆಗಳು ನೋಡುಗರ ಗಮನ ಸೆಳೆದವು. ಕಲಾಪದಲ್ಲಿ ಸಭಾಪತಿಗಳು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು, ವಿರೋಧ ಪಕ್ಷದ ನಾಯಕರು, ಉಪಸಭಾಪತಿಗಳು ಹಾಗೂ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ಪಾತ್ರಗಳನ್ನು ವಿದ್ಯಾರ್ಥಿಗಳು ನಿರ್ವಹಿಸಿದರು.
*ಬರಗಾಲದ ಚರ್ಚೆ:* ಪ್ರಶೋತ್ತರ ವೇಳೆ, ಶೂನ್ಯ ವೇಳೆ ಮತ್ತು ಗಮನ ಸೆಳೆಯುವ ಸೂಚನೆಯ ಅವಧಿಯಲ್ಲಿ ವಿರೋಧ ಪಕ್ಷದ ಸದಸ್ಯರು ರಾಜ್ಯದ ಬರ ಪರಿಸ್ಥಿತಿಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದರೆ, ಆಡಳಿತ ಪಕ್ಷದ ಸಚಿವರು ಮತ್ತು ಮುಖ್ಯಮಂತ್ರಿಗಳು ಸರ್ಕಾರ ಕೈಗೊಂಡಿರುವ ಪರಿಹಾರೋಪಾಯಗಳನ್ನು ಸಮರ್ಥವಾಗಿ ಮಂಡಿಸಿದರು. ಸಭಾಪತಿಗಳು ಕಲಾಪವನ್ನು ಅತ್ಯಂತ ಶಿಸ್ತುಬದ್ಧವಾಗಿ ನಿರ್ವಹಿಸಿದರು. ಮಧ್ಯಾಹ್ನದ ಅವಧಿಯಲ್ಲಿ ವಿಧೇಯಕಗಳ ಮಂಡನೆ, ಚರ್ಚೆ ಮತ್ತು ಅಂಗೀಕಾರ ಪ್ರಕ್ರಿಯೆಗಳೂ ಸಹ ನಡೆದವು.
*ನ್ಯಾಯಾಧೀಶರಿಂದ ಮೆಚ್ಚುಗೆ:* ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮ ಸ್ಥಳಕ್ಕೆ ಭೇಟಿ ನೀಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯಕಾರ್ಯದರ್ಶಿಗಳಾದ ಮಹಾಂತೇಶ ಎಸ್. ದರಗದ ಅವರು, ಯುವ ಸಂಸತ್ ಸ್ಪರ್ಧೆಯನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಸಂಸದೀಯ ವ್ಯವಸ್ಥೆಯ ಕಾರ್ಯವೈಖರಿಯನ್ನು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಪರಿಚಯಿಸುವ ಇಂತಹ ಕಾರ್ಯಕ್ರಮಗಳು ನಡೆಯಬೇಕು ಎಂದು ಅವರು ಹೇಳಿದರು.



