ಮೂಡಲಗಿಯಲ್ಲಿ ನ.21ರಂದು ದಮನಿತ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾ ಮಟ್ಟದ ಸಭೆ

H.Mallikarjun
H.Mallikarjun - Kalyanasiri
2 Min Read
ಜಾಹೀರಾತು

District-level meeting of the Federation of Oppressed Backward Castes to be held in Moodalagi on Nov 21

ಮೂಡಲಗಿಯಲ್ಲಿ ನ.21ರಂದು ದಮನಿತ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾ ಮಟ್ಟದ ಸಭೆ

ಜಾಹೀರಾತು
ಜಾಹೀರಾತು

ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟನೆ | ಮಾಜಿ ಶಾಸಕ ಮುಖ್ಯಮಂತ್ರಿ ಚಂದ್ರು ಅಧ್ಯಕ್ಷತೆ

ಮೂಡಲಗಿ: ದಮನಿತ ಹಾಗೂ ಹಿಂದುಳಿದ ಜಾತಿಗಳ ಸಂಘಟನೆಯನ್ನು ಬಲಪಡಿಸುವುದು, ಸಮುದಾಯಗಳ ಸಾಮಾಜಿಕ ನ್ಯಾಯ, ಹಕ್ಕುಗಳು ಮತ್ತು ರಾಜಕೀಯ ಪ್ರಾತಿನಿಧ್ಯಕ್ಕೆ ಧ್ವನಿಯಾಗುವ ಉದ್ದೇಶದಿಂದ ಕರ್ನಾಟಕ ರಾಜ್ಯ ದಮನಿತ ಹಿಂದುಳಿದ ಜಾತಿಗಳ ಒಕ್ಕೂಟ (ರಿ), ಬೆಂಗಳೂರು ವತಿಯಿಂದ ನವೆಂಬರ್ 21ರಂದು ಮೂಡಲಗಿಯಲ್ಲಿ ಬೆಳಗಾವಿ ಜಿಲ್ಲಾ ಮಟ್ಟದ ಸಭೆ ಆಯೋಜಿಸಲಾಗಿದೆ.

ಪಟ್ಟಣದ ಈರಣ್ಯ ನಗರದ ಈರಣ ದೇವರ ದೇವಸ್ಥಾನದ ಆವರಣದಲ್ಲಿರುವ ಕೆ.ಎಚ್. ಸೋನವಾಲ್ಕರ್ ಕಲ್ಯಾಣ ಮಂಟಪದಲ್ಲಿ ಶನಿವಾರ ಬೆಳಿಗ್ಗೆ 10.35ಕ್ಕೆ ಸಭೆ ನಡೆಯಲಿದೆ. ರಾಜ್ಯ ಸರ್ಕಾರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಭೆಯನ್ನು ಉದ್ಘಾಟಿಸಲಿದ್ದು, ಒಕ್ಕೂಟದ ರಾಜ್ಯಾಧ್ಯಕ್ಷರು, ಚಲನಚಿತ್ರ ನಟ ಹಾಗೂ ಮಾಜಿ ಶಾಸಕ ಮುಖ್ಯಮಂತ್ರಿ ಚಂದ್ರು ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಅರಭಾವಿ ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸಾಚಾರಿ, ಕರ್ನಾಟಕ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್. ದ್ವಾರಕನಾಥ್, ಆಯೋಗದ ಮಾಜಿ ಸದಸ್ಯರು ಹಾಗೂ ನಿವೃತ್ತ ಕೆಎಎಸ್ ಅಧಿಕಾರಿ ಕೆ.ಎನ್. ಲಿಂಗಪ್ಪ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯ ರಾಜಕೀಯ ಮುಖಂಡರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಹಾಗೂ ವಿವಿಧ ಸಮುದಾಯಗಳ ಮುಖಂಡರು ಭಾಗವಹಿಸಲಿದ್ದಾರೆ.

ಕರ್ನಾಟಕ ರಾಜ್ಯ ದಮನಿತ ಹಿಂದುಳಿದ ಜಾತಿಗಳ ಒಕ್ಕೂಟವು ಕಳೆದ ಒಂದು ವರ್ಷದಿಂದ ರಾಜ್ಯಾದ್ಯಂತ ಸಂಘಟನಾತ್ಮಕ ಹಾಗೂ ಸಾಮಾಜಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ. ಸಂಘಟನೆಯನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಸಭೆಗಳನ್ನು ಆಯೋಜಿಸಿ ಜಿಲ್ಲಾ ಸಮಿತಿಗಳನ್ನು ರಚಿಸುವ ಕಾರ್ಯಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ಸಮುದಾಯಗಳ ಮುಖಂಡರು ಹಾಗೂ ಸದಸ್ಯರನ್ನು ಒಂದೇ ವೇದಿಕೆಗೆ ತರುವ ಉದ್ದೇಶದಿಂದ ಈ ಸಭೆ ಹಮ್ಮಿಕೊಳ್ಳಲಾಗಿದೆ.

ದಮನಿತ ಹಾಗೂ ಹಿಂದುಳಿದ ಜಾತಿಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸುವುದು, ಸಮುದಾಯಗಳ ಹಕ್ಕುಗಳು ಮತ್ತು ಅವಕಾಶಗಳ ಕುರಿತು ಚರ್ಚಿಸುವುದು, ರಾಜಕೀಯ ಪ್ರಾತಿನಿಧ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸಂಘಟಿತ ಹೋರಾಟ ರೂಪಿಸುವುದು ಸಭೆಯ ಪ್ರಮುಖ ಉದ್ದೇಶಗಳಾಗಿವೆ. ಅಲ್ಲದೆ, ಜಿಲ್ಲೆಯಾದ್ಯಂತ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲಾ ಸಮಿತಿ ರಚನೆ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು.

ಜಿಲ್ಲೆಯ ದಮನಿತ ಹಾಗೂ ಹಿಂದುಳಿದ ಜಾತಿಗಳ ಮುಖಂಡರು, ವಿವಿಧ ಸಮುದಾಯಗಳ ಪ್ರತಿನಿಧಿಗಳು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಒಕ್ಕೂಟದ ಕಾರ್ಯಾಧ್ಯಕ್ಷ ಸುರೇಶ್ ಎಂ. ಲಾತೂರ್ ಹಾಗೂ ಪ್ರಧಾನ ಕಾರ್ಯದರ್ಶಿ ಸುದೇಶ ಕೆ.ಪಿ. ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ: 9611225557, 9606661762.

ವರದಿ: ಈಶ್ವರ ಢವಳೇಶ್ವರ, ಮೂಡಲಗಿ

Total Views: 0
Share This Article
Leave a Comment