
16 new canteens inaugurated; prioritize proper management and the supply of quality food: Minister Dr. Yathindra Siddaramaiah.

16 ಹೊಸ ಕ್ಯಾಂಟೀನ್ಗಳ ಲೋಕಾರ್ಪಣೆ; ಸಮರ್ಪಕ ನಿರ್ವಹಣೆ ಮತ್ತು ಗುಣಮಟ್ಟದ ಆಹಾರ ಪೂರೈಕೆಗೆ ಆದ್ಯತೆ ನೀಡಿ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ.
ಬೆಂಗಳೂರು: ಬಡವರು, ಕೂಲಿ ಕಾರ್ಮಿಕರು ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಇಂದಿರಾ ಕ್ಯಾಂಟೀನ್ಗಳ ಸಮರ್ಪಕ ನಿರ್ವಹಣೆ, ಸ್ವಚ್ಛತೆ ಹಾಗೂ ಆಹಾರದ ಗುಣಮಟ್ಟಕ್ಕೆ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸೂಚಿಸಿದರು.
ನಗರಾಭಿವೃದ್ಧಿ ಇಲಾಖೆ ಹಾಗೂ ಪೌರಾಡಳಿತ ನಿರ್ದೇಶನಾಲಯದ ವತಿಯಿಂದ ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 16 ಇಂದಿರಾ ಕ್ಯಾಂಟೀನ್ಗಳ ಲೋಕಾರ್ಪಣೆ ಹಾಗೂ ವಿವಿಧ ಸ್ವಚ್ಛತಾ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು
ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರ ಜನ್ಮದಿನದ ಅಂಗವಾಗಿ ನೂತನ ಇಂದಿರಾ ಕ್ಯಾಂಟೀನ್ಗಳನ್ನು ಜನಸೇವೆಗೆ ಸಮರ್ಪಿಸಲಾಗುತ್ತಿದೆ. ಬಡತನ ನಿರ್ಮೂಲನೆ ಹಾಗೂ ಹಸಿವು ಮುಕ್ತ ಸಮಾಜ ನಿರ್ಮಾಣದ ಆಶಯದೊಂದಿಗೆ ಇಂದಿರಾ ಕ್ಯಾಂಟೀನ್ಗಳ ಮೂಲಕ ಕೇವಲ ₹5ಕ್ಕೆ ಉಪಹಾರ ಹಾಗೂ ₹10ಕ್ಕೆ ಊಟ ಒದಗಿಸಲಾಗುತ್ತಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕೈಗೆಟುಕುವ ದರದಲ್ಲಿ ಪೌಷ್ಟಿಕ ಹಾಗೂ ಗುಣಮಟ್ಟದ ಆಹಾರ ದೊರೆಯಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದರು.
ಇಂದಿರಾ ಕ್ಯಾಂಟೀನ್ಗಳನ್ನು ಆರಂಭಿಸುವುದರ ಜೊತೆಗೆ ಅವುಗಳ ನಿರಂತರ ಹಾಗೂ ಸಮರ್ಪಕ ನಿರ್ವಹಣೆಯೂ ಅತ್ಯಂತ ಮುಖ್ಯವಾಗಿದೆ. ಕ್ಯಾಂಟೀನ್ಗಳಲ್ಲಿ ಸ್ವಚ್ಛತೆ ಕಾಪಾಡುವುದು, ಆಹಾರದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದಿರುವುದು ಹಾಗೂ ನಿಗದಿತ ಸಮಯಕ್ಕೆ ಆಹಾರ ಪೂರೈಸುವುದನ್ನು ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಅಧಿಕಾರಿಗಳು ನಿಯಮಿತವಾಗಿ ಕ್ಯಾಂಟೀನ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ನಿರ್ವಹಣೆಗೆ ಸಂಬಂಧಿಸಿದಂತೆ ಆಡಿಟ್ ನಡೆಸಿ, ಸೂಕ್ತ ದಾಖಲೆಗಳನ್ನು ನಿರ್ವಹಿಸಬೇಕು. ಲೋಪದೋಷಗಳು ಕಂಡುಬಂದಲ್ಲಿ ತಕ್ಷಣವೇ ಸರಿಪಡಿಸಿ, ನಿರ್ಲಕ್ಷ್ಯ ವಹಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಡವರು, ಶ್ರಮಿಕರು ಹಾಗೂ ದುರ್ಬಲ ವರ್ಗದವರ ಕಲ್ಯಾಣಕ್ಕೆ ರಾಜ್ಯ ಸರ್ಕಾರ ಸದಾ ಬದ್ಧವಾಗಿದೆ. ನಗರ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಸ್ವಚ್ಛತೆ ಹಾಗೂ ಜನಪರ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ಕರ್ನಾಟಕವನ್ನು ಅಭಿವೃದ್ಧಿಯ ಮಾದರಿ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಸಚಿವರು ತಿಳಿಸಿದರು.
ನಗರಗಳ ಅಭಿವೃದ್ಧಿ ಎಂದರೆ ಕೇವಲ ರಸ್ತೆ, ಫ್ಲೈಓವರ್, ಕಟ್ಟಡಗಳ ನಿರ್ಮಾಣವಲ್ಲ. ಸ್ವಚ್ಛ ಮತ್ತು ಆರೋಗ್ಯಕರ ನಗರಗಳ ನಿರ್ಮಾಣ ನಮ್ಮ ಸರ್ಕಾರದ ಗುರಿ. ಈ ಹಿನ್ನೆಲೆಯಲ್ಲಿ ನಗರಗಳ ಒಣ ತ್ಯಾಜ್ಯದ ವೈಜ್ಞಾನಿಕ ನಿರ್ವಹಣೆಗಾಗಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಸದಾಗಿ 309 ಮೆಟೀರಿಯಲ್ ರಿಕವರಿ ಫೆಸಿಲಿಟಿ (MRF) ಘಟಕಗಳನ್ನು ಸ್ಥಾಪಿಸಲಾಗಿದ್ದು ಇಂದು ಬೆಂಗಳೂರಿನಲ್ಲಿ ಅವುಗಳಿಗೆ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಮತ್ತು ಪೌರಾಡಳಿತ ಸಚಿವರಾದ ಶ್ರೀ ಹೆಚ್.ಸಿ. ಬಾಲಕೃಷ್ಣ ಅವರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು.
ಈ MRF ಘಟಕಗಳು ನಗರಗಳ ತ್ಯಾಜ್ಯ ನಿರ್ವಹಣೆಯಲ್ಲಿ ಮಹತ್ವದ ಬದಲಾವಣೆ ತರಲಿವೆ. ಪ್ಲಾಸ್ಟಿಕ್, ಕಾಗದ, ಲೋಹ, ಗಾಜು ಮತ್ತಿತರ ಒಣ ತ್ಯಾಜ್ಯಗಳನ್ನು ವಿಂಗಡಿಸಿ ಮರುಬಳಕೆಗೆ ಬೇಕಾಗುವ ರೀತಿಯಲ್ಲಿ ಸಿದ್ಧಪಡಿಸಲಿವೆ. ಇದರಿಂದ ಭೂಮಿಗೆ ಸೇರುವ ತ್ಯಾಜ್ಯದ ಪ್ರಮಾಣ ಕಡಿಮೆಯಾಗಲಿದೆ.
ಇದೆ ಸಂದರ್ಭದಲ್ಲಿ ಇಂದಿರಾ ಕ್ಯಾಂಟೀನ್ಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ ನಗರ ಸ್ಥಳೀಯ ಸಂಸ್ಥೆಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್, ಪೌರಾಡಳಿತ ಸಚಿವರಾದ ಶ್ರೀ ಹೆಚ್ ಸಿ ಬಾಲಕೃಷ್ಣ, ವಿಧಾನಪರಿಷತ್ ಸದಸ್ಯರಾದ ಶ್ರೀ ಸುದಾಮದಾಸ್, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ ಬಿ.ಬಿ. ಕಾವೇರಿ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


