
Stop the privatization of education and strengthen government schools; signature campaign launched in Koppal.

ಸರ್ಕಾರಿ ಶಾಲೆಗಳನ್ನು ಖಾಸಗಿಯವರೊಂದಿಗೆ ಜೋಡಿಸುವ ಹುನ್ನಾರಕ್ಕೆ ಎಸ್ಎಫ್ಐ ವಿರೋಧ
ಶಿಕ್ಷಣದ ಖಾಸಗೀಕರಣ ನಿಲ್ಲಿಸಿ, ಸರ್ಕಾರಿ ಶಾಲೆಗಳನ್ನು ಬಲಪಡಿಸಿ; ಕೊಪ್ಪಳದಲ್ಲಿ ಸಹಿ ಸಂಗ್ರಹ ಚಳವಳಿಗೆ ಚಾಲನೆ
ಕೊಪ್ಪಳ: ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸುವ ರಾಜ್ಯ ಸರ್ಕಾರದ ಪ್ರಸ್ತಾವಿತ ಕ್ರಮವನ್ನು ವಿರೋಧಿಸಿ, ಸರ್ಕಾರಿ ಶಾಲೆಗಳನ್ನು ಉಳಿಸಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಕೊಪ್ಪಳ ಜಿಲ್ಲಾ ಸಮಿತಿಯ ವತಿಯಿಂದ ಸಹಿ ಸಂಗ್ರಹ ಚಳವಳಿಗೆ ಚಾಲನೆ ನೀಡಲಾಯಿತು.
ಸಹಿ ಸಂಗ್ರಹ ಚಳವಳಿಗೆ ಚಾಲನೆ ನೀಡಿ ಮಾತನಾಡಿದ ಅಕ್ಷರ ದಾಸೋಹ ನೌಕರರ ಸಂಘದ ರಾಜ್ಯ ಅಧ್ಯಕ್ಷೆ ಲಕ್ಷ್ಮಿ ಸುಣಗಾರ, ಗ್ರಾಮೀಣ ಪ್ರದೇಶದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದ ಹೆಸರಿನಲ್ಲಿ ರಾಜ್ಯದ 2,000 ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸುವ ಯೋಜನೆಯನ್ನು ಸರ್ಕಾರ ಮುಂದಿಟ್ಟಿದೆ. 6,000 ಗ್ರಾಮ ಪಂಚಾಯಿತಿಗಳಲ್ಲಿ ಮೂರು ಹಂತಗಳಾಗಿ ಯೋಜನೆ ರೂಪಿಸಿ, ಮೊದಲ ಹಂತದಲ್ಲಿ 1,000 ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸಲು ಉದ್ದೇಶಿಸಲಾಗಿದೆ. ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿದರೆ ಆ ಶಾಲೆಗಳಿಗೆ ಖಾಸಗಿ ಶಾಲೆಗಳ ಹೆಸರನ್ನು ಸೇರಿಸಲು ಅವಕಾಶ ನೀಡುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಇದು ಸರ್ಕಾರಿ ಶಿಕ್ಷಣ ವ್ಯವಸ್ಥೆಯ ಅಸ್ತಿತ್ವಕ್ಕೆ ಧಕ್ಕೆ ತರುವ ಕ್ರಮವಾಗಿದ್ದು, ಎಸ್ಎಫ್ಐ ಈ ಯೋಜನೆಯನ್ನು ವಿರೋಧಿಸುತ್ತದೆ ಎಂದು ಹೇಳಿದರು.
ಸಿಐಟಿಯು ಜಿಲ್ಲಾ ಅಧ್ಯಕ್ಷ ಹನುಮಂತಪ್ಪ ಕಾಲ್ಮಂಗಿ ಮಾತನಾಡಿ, ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಮತ್ತು ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ನಿರಂತರವಾಗಿ ಕುಸಿಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. 2015-16ನೇ ಸಾಲಿನಲ್ಲಿ ಸರ್ಕಾರಿ ಶಾಲೆಗಳಲ್ಲಿ 47.1 ಲಕ್ಷ ವಿದ್ಯಾರ್ಥಿಗಳಿದ್ದರೆ, 2025-26ನೇ ಸಾಲಿನಲ್ಲಿ ಈ ಸಂಖ್ಯೆ 38.2 ಲಕ್ಷಕ್ಕೆ ಇಳಿದಿದೆ. ಅಂದರೆ ಸುಮಾರು ಶೇ.19ರಷ್ಟು ಕುಸಿತವಾಗಿದೆ. ಇದೇ ಅವಧಿಯಲ್ಲಿ ಖಾಸಗಿ ಅನುದಾನರಹಿತ ಶಾಲೆಗಳ ವಿದ್ಯಾರ್ಥಿಗಳ ಸಂಖ್ಯೆ 36.3 ಲಕ್ಷದಿಂದ 47 ಲಕ್ಷಕ್ಕೆ ಏರಿಕೆಯಾಗಿದೆ.
2025-26ನೇ ಸಾಲಿನಲ್ಲಿ 50 ಅಥವಾ ಅದಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಗಳ ಸಂಖ್ಯೆ 25,683ಕ್ಕೆ ತಲುಪಿದೆ. ಕಳೆದ 12 ವರ್ಷಗಳಲ್ಲಿ ರಾಜ್ಯದಲ್ಲಿ 29,635 ಶಾಲೆಗಳು ಮುಚ್ಚಲ್ಪಟ್ಟಿರುವುದು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ದುಸ್ಥಿತಿಯನ್ನು ತೋರಿಸುತ್ತದೆ. ಸರ್ಕಾರಿ ಶಾಲೆಗಳನ್ನು ಬಲಪಡಿಸುವ ಬದಲು ಅವುಗಳನ್ನು ವಿಲೀನಗೊಳಿಸುವುದು ಸಮಸ್ಯೆಗೆ ಪರಿಹಾರವಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
ಎಸ್ಎಫ್ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ಯು ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕಡಿಮೆಯಾಗಲು ಶಿಕ್ಷಣದ ಗುಣಮಟ್ಟ, ಮೂಲಸೌಕರ್ಯಗಳ ಕೊರತೆ ಹಾಗೂ ಶಿಕ್ಷಕರ ಅಭಾವ ಪ್ರಮುಖ ಕಾರಣಗಳಾಗಿವೆ. ಶಾಲೆಗಳಲ್ಲಿ ಅಗತ್ಯ ಶಿಕ್ಷಕರ ನೇಮಕಾತಿ ಮಾಡದೆ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸದೆ, ಸಮಯಕ್ಕೆ ಸರಿಯಾಗಿ ಪಠ್ಯಪುಸ್ತಕಗಳನ್ನು ವಿತರಿಸದೆ, ಸೈಕಲ್ ಯೋಜನೆ ಸ್ಥಗಿತಗೊಳಿಸಿ, ಪ್ರಯೋಗಾಲಯ ಮತ್ತು ಆಧುನಿಕ ತಂತ್ರಜ್ಞಾನ ಸೌಲಭ್ಯಗಳನ್ನು ಒದಗಿಸದೆ ಸರ್ಕಾರವೇ ಸರ್ಕಾರಿ ಶಾಲೆಗಳ ಪರಿಸ್ಥಿತಿಯನ್ನು ಹದಗೆಡಿಸುತ್ತಿದೆ ಎಂದು ಆರೋಪಿಸಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ 79,694 ಹುದ್ದೆಗಳು ಖಾಲಿ ಇವೆ. ಸಾವಿರಾರು ಅತಿಥಿ ಶಿಕ್ಷಕರ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಮುನ್ನಡೆಸಲಾಗುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದೊಳಗೆ 18 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದಾಗಿ ಸರ್ಕಾರ ಹೇಳುತ್ತಿದ್ದರೂ, ಈವರೆಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ನಿರ್ಲಕ್ಷ್ಯ ವಹಿಸಿದೆ. ಕಳಪೆ ಗುಣಮಟ್ಟದ ಶೂಗಳ ವಿತರಣೆ ಸೇರಿದಂತೆ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಲ್ಲಿಯೂ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.
ಕರ್ನಾಟಕ ಪಬ್ಲಿಕ್ ಶಾಲೆಗಳ ಹೆಸರಿನಲ್ಲಿ ಗ್ರಾಮ ಪಂಚಾಯಿತಿಗೊಂದು ಶಾಲೆಯನ್ನು ಉನ್ನತೀಕರಿಸುವ ಮೂಲಕ ಉಳಿದ ಗ್ರಾಮೀಣ ಸರ್ಕಾರಿ ಶಾಲೆಗಳನ್ನು ಮುಚ್ಚುವ ಅಪಾಯವಿದೆ. ಹೊಸದಾಗಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುವುದಾಗಿ ಹಾಗೂ ಕಲ್ಯಾಣ ಕರ್ನಾಟಕದಲ್ಲಿ 200 ಶಾಲೆಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದ ಸರ್ಕಾರ, ಇದೀಗ ಇರುವ ಶಾಲೆಗಳನ್ನೇ ವಿಲೀನಗೊಳಿಸುವ ಪ್ರಯತ್ನ ಮಾಡುತ್ತಿದೆ. ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ನಿಂದ 2,500 ಕೋಟಿ ರೂ. ಸಾಲ ಹಾಗೂ ಸಿಎಸ್ಆರ್ ನಿಧಿಯ ಬಳಕೆಯ ಕುರಿತು ಘೋಷಣೆ ಮಾಡಿದ್ದರೂ, ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ನಿರೀಕ್ಷಿತ ಕ್ರಮಗಳು ಜಾರಿಯಾಗಿಲ್ಲ ಎಂದು ದೂರಿದರು.
ಸಂವಿಧಾನದ ಅನುಚ್ಛೇದ 21(ಎ) ಮತ್ತು ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ 6ರಿಂದ 14 ವರ್ಷದ ಪ್ರತಿಯೊಂದು ಮಗುವಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯುವ ಹಕ್ಕಿದೆ. ಹೀಗಿರುವಾಗ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸುವುದು ಹಾಗೂ ಗ್ರಾಮ ಪಂಚಾಯಿತಿಗೊಂದು ಶಾಲೆ ಎಂಬ ಹೆಸರಿನಲ್ಲಿ ಗ್ರಾಮೀಣ ಶಾಲೆಗಳನ್ನು ಮುಚ್ಚುವ ಕ್ರಮ ಸಾರ್ವಜನಿಕ ಶಿಕ್ಷಣದ ಹಕ್ಕಿಗೆ ಧಕ್ಕೆ ತರುತ್ತದೆ. ಸರ್ಕಾರ ಕೂಡಲೇ ಈ ಯೋಜನೆಗಳನ್ನು ಕೈಬಿಟ್ಟು ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು ಎಂದು ಒತ್ತಾಯಿಸಿದರು.
ಎಸ್ಎಫ್ಐ ಪ್ರಮುಖ ಹತ್ತು ಆಗ್ರಹಗಳು
2,000 ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸುವ ಯೋಜನೆಯನ್ನು ತಕ್ಷಣ ಕೈಬಿಡಬೇಕು.
ಸರ್ಕಾರಿ ಶಾಲೆಗಳ ವಿಲೀನ ಮತ್ತು ಮುಚ್ಚುವ ಪ್ರಕ್ರಿಯೆಯನ್ನು ಕೂಡಲೇ ನಿಲ್ಲಿಸಬೇಕು.
ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.
ರಾಜ್ಯದ ಎಲ್ಲಾ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು.
ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಗುಣಮಟ್ಟದ ಶೂ, ಸೈಕಲ್ ಸೇರಿದಂತೆ ಅಗತ್ಯ ಕಲಿಕಾ ಸೌಲಭ್ಯಗಳನ್ನು ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಒದಗಿಸಬೇಕು.
ಗ್ರಾಮೀಣ ಪ್ರದೇಶದ ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು.
ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸುವ ಬದಲು ಹೊಸ ಸರ್ಕಾರಿ ಶಾಲೆಗಳನ್ನು ಆರಂಭಿಸಬೇಕು.
ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಎಲ್ಲ ಕ್ರಮಗಳನ್ನು ಕೈಬಿಡಬೇಕು.
ಖಾಸಗಿ ಶಾಲೆಗಳ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಂಡು, ನಿಯಮಬಾಹಿರವಾಗಿ ಹೊಸ ಶಿಕ್ಷಣ ಸಂಸ್ಥೆಗಳಿಗೆ ಅನುಮತಿ ನೀಡಬಾರದು.
ಈಗಾಗಲೇ ಅನುಮತಿ ಪಡೆದಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಗುಣಮಟ್ಟ ಪರಿಶೀಲಿಸಿ, ಸರ್ಕಾರದ ನಿಯಮಗಳನ್ನು ಪಾಲಿಸದ ಹಾಗೂ ಪರವಾನಗಿ ಇಲ್ಲದ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.
ಈ ಸಂದರ್ಭದಲ್ಲಿ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಲಲಿತ, ಕಾರ್ಯದರ್ಶಿ ದುರ್ಗಮ್ಮ ಹೊಸಗರ, ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಜಂಟಿ ಕಾರ್ಯದರ್ಶಿ ಬಾಳಪ್ಪ ಹುಲಿಹೈದರ್ ಹಾಗೂ ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಹನುಮೇಶ್ ರಮೇಶ್ ಸೇರಿದಂತೆ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಸರ್ಕಾರಿ ಶಾಲೆಗಳನ್ನು ಉಳಿಸುವುದು ಕೇವಲ ಒಂದು ಸಂಘಟನೆಯ ಹೋರಾಟವಲ್ಲ; ಅದು ಬಡ ಮತ್ತು ಗ್ರಾಮೀಣ ಮಕ್ಕಳ ಶಿಕ್ಷಣದ ಹಕ್ಕನ್ನು ಉಳಿಸುವ ಜನಪರ ಹೋರಾಟವಾಗಿದೆ ಎಂಬ ಸಂದೇಶದೊಂದಿಗೆ ಎಸ್ಎಫ್ಐ ಸಹಿ ಸಂಗ್ರಹ ಚಳವಳಿಯನ್ನು ಮುಂದುವರಿಸಲು ನಿರ್ಧರಿಸಿದೆ.


