
Demand for action against illegal madrasas and schools: High Court issues notice to State Government

ಅಕ್ರಮ ಮದರಸಾ, ಶಾಲೆ ವಿರುದ್ಧ ಕ್ರಮಕ್ಕೆ ಆಗ್ರಹ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ನೋಂದಣಿ, ಮಾನ್ಯತೆ ಇಲ್ಲದೆ ಶಿಕ್ಷಣ ಸಂಸ್ಥೆ ನಡೆಸಿದ ಆರೋಪ – ₹5 ಲಕ್ಷ ಅನುದಾನ ಪಡೆದಿರುವ ಬಗ್ಗೆಯೂ ತನಿಖೆಗೆ ಮನವಿ
ಬೆಂಗಳೂರು, ನ.20: ಬೆಂಗಳೂರಿನ ಥಣಿಸಂದ್ರದಲ್ಲಿ ಅಕ್ರಮವಾಗಿ ಮದರಸಾ ಹಾಗೂ ಶಾಲೆ ನಡೆಸಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರದ ಗೃಹ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ಸಂಬಂಧಪಟ್ಟ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ಅಲ್ ಜಾಮಿಯಾ ಮೊಹಮ್ಮದೀಯ ಎಜುಕೇಷನ್ ಸೊಸೈಟಿಯ ಅಡಿಯಲ್ಲಿ ನಡೆಯುತ್ತಿದೆ ಎನ್ನಲಾದ ಜಾಮಿಯಾ ಮೊಹಮ್ಮದೀಯ ಮನ್ಸೂರಾ ರೆಸಿಡೆನ್ಸಿಯಲ್ ಸ್ಕೂಲ್ (ಮದರಸಾ) ಹಾಗೂ ಸಮರ್ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬೆಂಗಳೂರಿನ ಪಾದರಾಯನಪುರದ ಚಾಂದ್ ಪಾಷಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ನ್ಯಾಯಮೂರ್ತಿ ಅನು ಶಿವರಾಮನ್ ಹಾಗೂ ನ್ಯಾಯಮೂರ್ತಿ ಕೆ.ಎಸ್. ಭರತ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ ಅರ್ಜಿಯ ವಿಚಾರಣೆ ನಡೆಸಿ ರಾಜ್ಯ ಸರ್ಕಾರ, ಗೃಹ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ ಜಾಮಿಯಾ ಎಜುಕೇಷನ್ ಸೊಸೈಟಿ ಸೇರಿದಂತೆ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ಅರ್ಜಿದಾರರ ಪರ ಹಿರಿಯ ವಕೀಲರಾದ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿ, ಸಂಸ್ಥೆಯು ಮಹಾರಾಷ್ಟ್ರ ಸೊಸೈಟಿಗಳ ನೋಂದಣಿ ಕಾಯ್ದೆ-1979ರ ಅಡಿಯಲ್ಲಿ ನೋಂದಣಿಯಾಗಿದೆ ಎಂದು ಹೇಳಿಕೊಂಡಿದ್ದರೂ, ಅದಕ್ಕೆ ಸಂಬಂಧಿಸಿದ ದಾಖಲೆಗಳು ಲಭ್ಯವಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.
ಅಲ್ಲದೆ, ಶಿಕ್ಷಣ ಇಲಾಖೆಯು 2025ರ ಮೇ 30ರಂದು ಶಾಲೆಯ ಮಾನ್ಯತೆಯನ್ನು ರದ್ದುಗೊಳಿಸಿದ್ದರೂ ಸಂಸ್ಥೆ ಶಾಲೆಯನ್ನು ಮುಂದುವರಿಸಿಕೊಂಡು ಬರುತ್ತಿದೆ. ಈ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಸಂಸ್ಥೆಯಲ್ಲಿ ಉತ್ತರ ಭಾರತದಿಂದ ವಲಸೆ ಬಂದ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ನಕಲಿ ದಾಖಲೆಗಳನ್ನು ಸಲ್ಲಿಸಿ ಐದು ಲಕ್ಷ ರೂಪಾಯಿ ಸರ್ಕಾರಿ ಅನುದಾನ ಪಡೆದಿರುವ ಆರೋಪವನ್ನೂ ಅರ್ಜಿದಾರರು ಮಾಡಿದ್ದಾರೆ.
ಸಮಗ್ರ ತನಿಖೆಗೆ ಒತ್ತಾಯ
ಅಕ್ರಮವಾಗಿ ನಡೆಯುತ್ತಿದೆ ಎನ್ನಲಾದ ಮದರಸಾ ಮತ್ತು ಶಾಲೆಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು. ಸಂಸ್ಥೆಯ ನೋಂದಣಿ ಹಾಗೂ ಅನುದಾನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ಸಮಗ್ರ ತನಿಖೆ ನಡೆಸಬೇಕು. ಅಗತ್ಯವಿದ್ದಲ್ಲಿ ಸ್ವತಂತ್ರ ತನಿಖಾ ಸಂಸ್ಥೆಗೆ ಪ್ರಕರಣವನ್ನು ವಹಿಸಬೇಕು. ಬಿಡುಗಡೆ ಮಾಡಿರುವ ಐದು ಲಕ್ಷ ರೂಪಾಯಿ ಅನುದಾನವನ್ನು ವಾಪಸ್ ಪಡೆಯಬೇಕು ಹಾಗೂ ಮದರಸಾ ಮತ್ತು ಶಾಲೆಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳ ಪ್ರತಿಕ್ರಿಯೆ ಏನಿರಲಿದೆ ಎಂಬುದು ಕುತೂಹಲ ಮೂಡಿಸಿದ್ದು, ಹೈಕೋರ್ಟ್ನ ಮುಂದಿನ ವಿಚಾರಣೆ ಮಹತ್ವ ಪಡೆದುಕೊಂಡಿದೆ.


