
Instead of handing over schools for adoption, hand over the government itself: Basavaraja Magalamani’s sharp demand to the CM!

ಶಾಲೆಗಳನ್ನು ದತ್ತು ನೀಡುವ ಬದಲು ಸರ್ಕಾರವನ್ನೇ ದತ್ತು ಕೊಡಿ: ಸಿಎಂಗೆ ಬಸವರಾಜ ಮ್ಯಾಗಳಮನಿ ತೀಕ್ಷ್ಣ ಆಗ್ರಹ!
ಸರ್ಕಾರಿ ಶಾಲೆಗಳ ಖಾಸಗೀಕರಣದ ಪ್ರಯತ್ನ ಸಂವಿಧಾನ ವಿರೋಧಿ – ಜನಾಂದೋಲನದ ಎಚ್ಚರಿಕೆ
ಗಂಗಾವತಿ, ನ.20: ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ಹಾಗೂ ಕಾರ್ಪೊರೇಟ್ ಸಂಸ್ಥೆಗಳಿಗೆ ದತ್ತು ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿರುವ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಅವರು, ಶಿಕ್ಷಣ ನೀಡುವ ಜವಾಬ್ದಾರಿಯಿಂದ ಸರ್ಕಾರ ನುಣುಚಿಕೊಳ್ಳುವ ಬದಲು ಶಾಲೆಗಳನ್ನು ದತ್ತು ನೀಡುವ ಯೋಜನೆಯನ್ನೇ ಕೈಬಿಡಬೇಕು. ಒಂದು ವೇಳೆ ಸರ್ಕಾರಕ್ಕೆ ಶಿಕ್ಷಣ ನೀಡಲು ಸಾಧ್ಯವಾಗದಿದ್ದರೆ ಶಾಲೆಗಳನ್ನು ದತ್ತು ನೀಡುವ ಬದಲು ಸರ್ಕಾರವನ್ನೇ ದತ್ತು ನೀಡಲಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಆಗ್ರಹಿಸಿದ್ದಾರೆ.
‘ನಮ್ಮ ಶಾಲೆ, ನಮ್ಮ ಜವಾಬ್ದಾರಿ’ ಎಂಬ ಘೋಷವಾಕ್ಯದೊಂದಿಗೆ ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳು ಹಾಗೂ ಕಾರ್ಪೊರೇಟ್ ಕಂಪನಿಗಳಿಗೆ ದತ್ತು ನೀಡಲು ಮುಂದಾಗಿರುವುದು ಸರ್ಕಾರದ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವ ಪ್ರಯತ್ನವಾಗಿದೆ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧವಾದ ನಿರ್ಧಾರವಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಕಿಡಿಕಾರಿದ್ದಾರೆ.
ಎಲ್ಲ ಮಕ್ಕಳಿಗೂ ಉಚಿತ ಮತ್ತು ಸಮಾನ ಶಿಕ್ಷಣ ಒದಗಿಸುವುದು ಸಂವಿಧಾನದ ಆಶಯ ಮಾತ್ರವಲ್ಲ, ಸರ್ಕಾರದ ಆದ್ಯ ಕರ್ತವ್ಯವೂ ಆಗಿದೆ. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಶಿಕ್ಷಣದ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುವ ಮೂಲಕ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಬಡ ಮಕ್ಕಳ ಸ್ವಾಭಿಮಾನ ಮತ್ತು ಶಿಕ್ಷಣದ ಹಕ್ಕಿಗೆ ಧಕ್ಕೆ ಉಂಟುಮಾಡುತ್ತಿದೆ. ಈ ಮೂಲಕ ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸುವ ಅಪಾಯಕ್ಕೆ ಸರ್ಕಾರವೇ ದಾರಿ ಮಾಡಿಕೊಡುತ್ತಿದೆ ಎಂದು ಆರೋಪಿಸಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿರುವ ಶಿಕ್ಷಕರು ಎಲ್ಲ ಅಗತ್ಯ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ, ಅರ್ಹತೆಯ ಆಧಾರದ ಮೇಲೆ ನೇಮಕಗೊಂಡವರಾಗಿದ್ದಾರೆ. ಅಲ್ಲದೆ DSERT, DIET, BRC ಮತ್ತು CRC ಮೂಲಕ ಹಂತ ಹಂತವಾಗಿ ತರಬೇತಿ ಪಡೆದ ಪರಿಣತಿ ಹಾಗೂ ಅನುಭವ ಹೊಂದಿದ್ದಾರೆ. ಇಷ್ಟಾದರೂ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಏಕೆ ದೊರೆಯುತ್ತಿಲ್ಲ ಎಂಬುದರ ಕುರಿತು ಸರ್ಕಾರ ಗಂಭೀರ ಚಿಂತನೆ ಮತ್ತು ಚರ್ಚೆ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಶಿಕ್ಷಕರನ್ನು ಬೋಧಕೇತರ ಕಾರ್ಯಗಳಾದ ಜಾತಿ ಗಣತಿ, ಸಾಮಾಜಿಕ ಗಣತಿ, ಮತದಾರರ ಪಟ್ಟಿ ಪರಿಷ್ಕರಣೆ, ಮನೆ ಗಣತಿ ಸೇರಿದಂತೆ ವಿವಿಧ ಸರ್ಕಾರಿ ಕೆಲಸಗಳಿಗೆ ನಿಯೋಜಿಸಲಾಗುತ್ತಿದೆ. ಮತ್ತೊಂದೆಡೆ ಶಾಲೆಗಳಿಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಒದಗಿಸುವಲ್ಲಿಯೂ ಸರ್ಕಾರ ವಿಫಲವಾಗಿದೆ. ಇಂತಹ ಆಡಳಿತಾತ್ಮಕ ಲೋಪಗಳನ್ನು ಸರಿಪಡಿಸುವ ಬದಲು ಶಾಲೆಗಳನ್ನು ಖಾಸಗಿ ಸಂಸ್ಥೆಗಳಿಗೆ ದತ್ತು ನೀಡಲು ಮುಂದಾಗಿರುವುದು ಎಷ್ಟು ಸಮಂಜಸ? ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಣದ ಗುಣಮಟ್ಟ ಕುಸಿಯಲು ಸರ್ಕಾರದ ನಿರ್ಲಕ್ಷ್ಯವೇ ಪ್ರಮುಖ ಕಾರಣ ಎಂದು ಮ್ಯಾಗಳಮನಿ ನೇರವಾಗಿ ಆರೋಪಿಸಿದ್ದಾರೆ.
ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಮುಂದುವರಿದಿದ್ದರೆ ಇಂತಹ ಪರಿಸ್ಥಿತಿ ಎದುರಾಗುತ್ತಿರಲಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಈಗಲಾದರೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರಿ ಶಾಲೆಗಳನ್ನು ದತ್ತು ನೀಡುವ ಯೋಜನೆಯನ್ನು ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.
ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದಿದ್ದರೆ ಇದರ ವಿರುದ್ಧ ರಾಜ್ಯಾದ್ಯಂತ ಜನಾಂದೋಲನ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಇಂತಹ ನಿರ್ಧಾರಕ್ಕೆ ರಾಜ್ಯಪಾಲರು ಯಾವುದೇ ಕಾರಣಕ್ಕೂ ಅಂಕಿತ ಹಾಕಬಾರದು. ಸರ್ಕಾರ ತನ್ನ ಹಠಮಾರಿ ಧೋರಣೆಯನ್ನು ಮುಂದುವರಿಸಿದರೆ ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರು ಕ್ರಮ ಕೈಗೊಳ್ಳಬೇಕು ಎಂದು ಮಾಧ್ಯಮಗಳ ಮೂಲಕ ಮನವಿ ಮಾಡಿದ್ದಾರೆ.


