
Demand to make the observance of Constitution Day and the singing of the state anthem mandatory in all schools and colleges.
ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ದಿನಾಚರಣೆ, ನಾಡಗೀತೆ ಕಡ್ಡಾಯಗೊಳಿಸಲು ಆಗ್ರಹ
ಆದೇಶ ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ಒತ್ತಾಯ
ಗಂಗಾವತಿ, ನ.23: ತಾಲೂಕಿನ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ದಿನಾಚರಣೆ ಮತ್ತು ನಾಡಗೀತೆ ಗಾಯನವನ್ನು ಕಡ್ಡಾಯಗೊಳಿಸಬೇಕೆಂದು ಆಗ್ರಹಿಸಿ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಸದಸ್ಯರು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಗ್ರೇಡ್-2 ತಹಶೀಲ್ದಾರ್ ವೆಂಕಟೇಶ್ ಆಶ್ರಿತ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಮಾತನಾಡಿ, ಸರ್ಕಾರದ ಆದೇಶದಂತೆ ಪ್ರತಿ ವರ್ಷ ನವೆಂಬರ್ 26ರಂದು ಸಂವಿಧಾನ ದಿನಾಚರಣೆ ಆಚರಿಸಲಾಗುತ್ತದೆ. ಸರ್ಕಾರಿ ಕಚೇರಿಗಳಲ್ಲಿ ಆಚರಿಸುವಂತೆ ತಾಲೂಕಿನ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ ಶಾಲಾ-ಕಾಲೇಜುಗಳಲ್ಲಿಯೂ ಸಂವಿಧಾನ ದಿನವನ್ನು ಕಡ್ಡಾಯವಾಗಿ ಆಚರಿಸಲು ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.
ಅದೇ ರೀತಿ ಸರ್ಕಾರಿ ಶಾಲೆಗಳಲ್ಲಿ ಪ್ರತಿದಿನ ಬೆಳಗಿನ ಪ್ರಾರ್ಥನಾ ಸಮಯದಲ್ಲಿ ನಾಡಗೀತೆ ಹಾಡುವ ಪದ್ಧತಿ ಜಾರಿಯಲ್ಲಿದೆ. ಇದೇ ನಿಯಮವನ್ನು ಖಾಸಗಿ ಅನುದಾನಿತ ಹಾಗೂ ಅನುದಾನರಹಿತ, ಇಂಗ್ಲಿಷ್ ಮಾಧ್ಯಮ ಸೇರಿದಂತೆ ತಾಲೂಕಿನ ಎಲ್ಲ ಶಾಲಾ-ಕಾಲೇಜುಗಳಲ್ಲಿಯೂ ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಸಂವಿಧಾನದ ಆಶಯಗಳು, ರಾಷ್ಟ್ರಪ್ರೇಮ ಹಾಗೂ ಕನ್ನಡ ನಾಡಿನ ಸಾಂಸ್ಕೃತಿಕ ಗೌರವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ನಿಟ್ಟಿನಲ್ಲಿ ಈ ಕ್ರಮ ಅಗತ್ಯವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಸ್ಪಷ್ಟ ಆದೇಶ ಹೊರಡಿಸಿ, ಅದರ ಪಾಲನೆಯ ಬಗ್ಗೆ ಪರಿಶೀಲನೆ ನಡೆಸಬೇಕು. ಆದೇಶ ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಸಮಿತಿಯ ತಾಲೂಕು ಅಧ್ಯಕ್ಷ ಜಡಿಯಪ್ಪ ಹಂಚಿನಾಳ, ಪದಾಧಿಕಾರಿಗಳಾದ ರಾಮಣ್ಣ ರುದ್ರಾಕ್ಷಿ, ಗಣೇಶ್, ಶಿವು ಸೇರಿದಂತೆ ಇತರರು ಉಪಸ್ಥಿತರಿದ್ದರು.


