
ಕೊಪ್ಪಳ : ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ನಿಗದಿಪಡಿಸಿರುವ ಶುಲ್ಕದ ವಿವರ ಪ್ರಕಟಿಸಲು ಎಲ್ಲಾ ತಾಲ್ಲೂಕಿನ ವಲಯ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸೂಚನೆ ನೀಡಿದ್ದಾರೆ.
ಖಾಸಗಿ ಅನುದಾನರಹಿತ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ದಾಖಲಾತಿ ಮತ್ತು ಶುಲ್ಕ ವಸೂಲಾತಿ ಪ್ರಕ್ರಿಯೆ ಪ್ರಾರಂಭವಾಗಿರುತ್ತದೆ.
ದಾಖಲಾತಿ ಪ್ರಕ್ರಿಯೆ, ದಾಖಲಾತಿ ಶುಲ್ಕ ಮತ್ತು ಇನ್ನಿತರೆ ಶುಲ್ಕವನ್ನು ಪಡೆಯುವ ಸಂಬಂಧ ಶಿಕ್ಷಣ ಹಕ್ಕು ಕಾಯಿದೆ-2009 ರನ್ವಯ ಕ್ರಮ ವಹಿಸಲು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಮೇ ಮಾಹೆಯಲ್ಲಿಯೇ ಸುತ್ತೋಲೆ ಹೊರಡಿಸಿ ಸೂಚನೆ ನೀಡಿದ್ದಾರೆ.
ಈ ಸುತ್ತೋಲೆಯಲ್ಲಿ ತಿಳಿಸಿದಂತೆ ಅಗತ್ಯ ಕ್ರಮ ವಹಿಸಲು ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಆಯಾ ತಾಲ್ಲೂಕಿನ ಖಾಸಗಿ ಶಾಲೆಗಳ ಮುಖ್ಯಸ್ಥರಿಗೆ ಸುತ್ತೋಲೆಯ ಮಾಹಿತಿಯನ್ನು ತಿಳಿಸಿ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಶಿಕ್ಷಣ ಹಕ್ಕು ಕಾಯ್ದೆ-2009 ರ ಸೆಕ್ಷನ್-2(ಬಿ) ರಂತೆ ಎಲ್ಲಾ ಖಾಸಗಿ ಶಾಲೆಗಳು ತಾವು ಅಧಿಸೂಚಿಸಿದ ಶುಲ್ಕವನ್ನು ತಮ್ಮ ಶಾಲಾ ಜಾಲತಾಣದಲ್ಲಿ, ಶಾಲಾ ಸೂಚನಾ ಫಲಕದಲ್ಲಿ ಮತ್ತು ಇಲಾಖಾ ಜಾಲತಾಣದಲ್ಲಿ (ಎಸ್.ಎ.ಟಿ.ಎಸ್) ಸಾರ್ವಜನಿಕರು ಮತ್ತು ಪೋಷಕರಿಗೆ ಲಭ್ಯವಾಗುವಂತೆ ಪ್ರಕಟಪಡಿಸಲು ಹಾಗೂ ಶುಲ್ಕ ವಸೂಲಾತಿ ಮತ್ತು ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಕ್ಷನ್-13ರ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಲು ತಿಳಿಸಿದೆ.
ಯಾವುದೇ ಶಾಲೆಗಳು ಸೆಕ್ಷನ್-2 (ಬಿ) ಮತ್ತು ಸೆಕ್ಷನ್ 13 (1) ಅನ್ನು ಉಲ್ಲಂಘಿಸಿರುವ ಬಗ್ಗೆ ದೂರುಗಳು ದಾಖಲಾದಲ್ಲಿ, ಸೆಕ್ಷನ್ 13 (2)ಎ ಮತ್ತು ಸೆಕ್ಷನ್ 13 (2) ಬಿ ರಂತೆ ಹಾಗೂ ಕರ್ನಾಟಕ ಕಡ್ಡಾಯ ಮತ್ತು ಉಚಿತ ಪ್ರಾಥಮಿಕ ಶಿಕ್ಷಣ ಹಕ್ಕು ನಿಯಮಗಳು-2012 ರ ನಿಯಮ-23ರಲ್ಲಿ ತಿಳಿಸಿದಂತೆ ಅಗತ್ಯ ಕ್ರಮವಹಿಸಲು ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಉಪನಿರ್ದೇಶಕರಿಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೂಚಿಸಿದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.