Action based on three-member committee report for comprehensive investigation of appointment of PDO posts: CM
ಬೆಳಗಾವಿ ಸುವರ್ಣಸೌಧ,ಡಿ.12(ಕರ್ನಾಟಕ ವಾರ್ತೆ): ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು 3 ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ಅಂತಿಮ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನ ಪರಿಷತ್‌ನಲ್ಲಿ ಸದಸ್ಯ ಶಶಿಲ್ ನಮೋಶಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು. ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ. ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಈಗಾಗಲೇ ಆಯೋಗದಲ್ಲಿ ಉಪ ಸಮಿತಿಯನ್ನು ರಚಿಸಲಾಗಿದ್ದು, ವರದಿ ಸ್ವೀಕೃತವಾದ ನಂತರ ಪರಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.