
Koppal District Hospital District Collector Dr. Suresh Itna's Sudden Visit: Review
ಕೊಪ್ಪಳ ಜನವರಿ 12 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಸೋಮವಾರ ದಿಢೀರ್ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಸ್ಥಿತಿಗತಿಗಳ ಪರಿಶೀಲಿಸಿ, ಆಸ್ಪತ್ರೆಯ ವೈದ್ಯರ ಮತ್ತು ಸಿಬ್ಬಂದಿಗಳ ಹಾಜರಾತಿಯನ್ನು ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿಗಳು ಮಾತನಾಡಿ, ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡಬೇಕು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಚೀಟಿ ಪಡೆಯುವವರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಬೇಗನೆ ಚೀಟಿಯನ್ನು ನೀಡಲು ಇನ್ನೂ ಹೆಚ್ಚಿನ ಕೌಂಟರ್‌ಗಳನ್ನು ತೆಗೆದು, ಹೆಚ್ಚು ಸಿಬ್ಬಂದಿಗಳನ್ನು ನಿಯೋಜಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಂಬಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಸ್ಪತ್ರೆಯ ಸೈಕಿಯಾಟ್ರಿ ವಿಭಾಗದಲ್ಲಿ ರೋಗಿಗಳ ಉಪಚಾರಕ್ಕೆ ಪ್ರತ್ಯೇಕ ವ್ಯವಸ್ಥೆ ಇದೆಯೆ. ಡ್ರಗ್ ಅಡಿಕ್ಟ್ ಆದವರಿಗೆ ದುಶ್ಚಟಗಳನ್ನು ಬಿಡಿಸಲು ಅವರಿಗೆ ಕೌನ್ಸಿಲಿಂಗ್ ಯಾವ ರೀತಿಯಲ್ಲಿ ಮಾಡುತ್ತಿರಾ. ಡ್ರಗ್ ಅಡಿಕ್ಟನಂತಹ ದುಶ್ಚಟಗಳಿಗೆ ಜನರು ಬಲಿಯಾಗದಂತೆ ಹೆಚ್ಚಿನ ಜಾಗೃತಿ ಮೂಡಿಸಲು ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.
ಇದೇ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ಸೇರಿದಂತೆ ಇತರೆ ಹಲವಾರು ಜನರು ಉಪಸ್ಥಿತರಿದ್ದರು.





