
ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ:ಫೆಬ್ರವರಿ ಮಾಹೆಯಲ್ಲಿ ಗ್ಯಾರಂಟಿ ಉತ್ಸವ- ರೆಡ್ಡಿ ಶ್ರೀನಿವಾಸ

Progress review meeting of five guarantee schemes: Guarantee festival in February - Reddy Srinivas

ಕೊಪ್ಪಳ ಜನವರಿ 29 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಉತ್ಸವವನ್ನು ಫೆಬ್ರವರಿ ಮಾಹೆಯಲ್ಲಿ ಕೊಪ್ಪಳದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕೊಪ್ಪಳ ಜಿಲ್ಲಾ ಗ್ರಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಹೇಳಿದರು.
ಅವರು ಗುರುವಾರ ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬAಧ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಉತ್ಸವವನ್ನು ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಮಧುಶ್ರೀ ಗಾರ್ಡನ್‌ನಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಸನ್ಮಾನಿಸಲಾಗುವುದು. ಗೃಹಲಕ್ಷ್ಮೀ, ಗೃಹಜೋತಿ, ಶಕ್ತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳಡಿ ಲಾಭ ಪಡೆದುಕೊಂಡ ಕೊಪ್ಪಳ ಜಿಲ್ಲೆಯ ಫಲಾನುಭವಿಗಳನ್ನು ಈ ಗ್ಯಾರಂಟಿ ಉತ್ಸವದಲ್ಲಿ ಕರೆ ತರಬೇಕು. ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಮ್ಮಿಕೊಳ್ಳಲು ಐದು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ವಿಶೇಷ ಕ್ರಮ ವಹಿಸಬೇಕು ಎಂದರು.
ಗ್ಯಾರAಟಿ ಉತ್ಸವಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು ಹೆಚ್ಚಿನ ಜವಾಬ್ದಾರಿ ತೆಗೆದುಕೊಂಡು ಕಾರ್ಯಕ್ರಮವನ್ನು ಯಾಶಸ್ವಿಗೊಳಿಸಬೇಕು. ಪಂಚ ಗ್ಯಾರಂಟಿ ಯೋಜನೆಗಳು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಸ್ಥಿರತೆಯನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ಹಾಗಾಗಿ ಪಂಚ ಗ್ಯಾರಂಟಿ ಯೋಜನೆಗಳ ಲಾಭ ಎಲ್ಲಾ ಫಲಾನುಭವಿಗಳಿಗೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಮುಖ್ಯ ಉದ್ದೇಶವಾಗಿದ್ದು, ಈ ಐದು ಯೋಜನೆಗಳ ಲಾಭಗಳು, ಅರ್ಹತೆ, ಅರ್ಜಿ ಪ್ರಕ್ರಿಯೆ ಮತ್ತು ಅನುಷ್ಠಾನ ಸ್ಥಿತಿಯ ಕುರಿತು ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ವಿವರವಾದ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದರು.
ಜನಪರವಾದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಿ ಇವುಗಳ ಲಾಭವನ್ನು ಜಿಲ್ಲೆಯ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ಸಿಗಬೇಕು. ಯಾವುದೇ ಅರ್ಹ ಫಲಾನುಭವಿಗಳು ಈ ಯೋಜನೆಗಳಿಂದ ಹೊರಗುಳಿಯದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ, ಯುವನಿಧಿ ಯೋಜನೆ ಫಲಾನುಭವಿಗಳಿಗೆ ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ವಿವಿಧ ಕೌಶಲ್ಯ ತರಬೇತಿಗಳನ್ನು ನೀಡಬೇಕು. ಇದರಿಂದ ಅವರಿಗೆ ಮುಂದಿನ ದಿನಗಳಲ್ಲಿ ಉದ್ಯೋಗಕ್ಕಾಗಿ ಅನುಕೂಲವಾಗಲಿದೆ. ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ತರಬೇತಿಯಲ್ಲಿ ಪಾಲ್ಗೊಳ್ಳುವ ಫಲಾನುಭವಿಗಳಿಗೆ ಯಾವುದೇ ರೀತಿಯ ಯುವನಿಧಿ ಯೋಜನೆಯ ನಿರುದ್ಯೋಗ ಭತ್ಯೆ ಕಡಿತವಾಗುವುದಿಲ್ಲ. ಈ ಬಗ್ಗೆ ಎಲ್ಲರಿಗೂ ಸೂಕ್ತ ಮಾಹಿತಿ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಪ್ಪಳ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ ಮಾತನಾಡಿ, ಗ್ಯಾರಂಟಿ ಉತ್ಸವದಲ್ಲಿ ಹಾಕುವ ಐದು ಸ್ಟಾಲುಗಳಲ್ಲಿ ಫಲಾನುಭವಿಗಳಿಗೆ ಬೇಕಿರುವ ಅಗತ್ಯ ಮಾಹಿತಿ ಮತ್ತು ಸಮಸ್ಯೆಗಳಿಗೆ ಪರಿಹಾರ ನೀಡುವ ಉದ್ದೇಶದಿಂದ ಲ್ಯಾಪ್ಟಾಪ್ ಇಟ್ಟು ಹಾಗೂ ಕಂಪ್ಯೂಟರ್ ಆಪರೇಟರ್ ಮತ್ತು ಮಾಹಿತಿ ನೀಡುವವರು ಇರಬೇಕು ಹಾಗೂ ಜಿಲ್ಲೆಗೆ ಇದುವರೆಗೂ ಕೊಟ್ಟಿರುವ ಯೋಜನೆಯ ಮಾಹಿತಿಯನ್ನು ಪ್ಲೆಕ್ಸ್ ಮೂಲಕ ಅಳವಡಿಸಬೇಕು. ವಯಸ್ಸಾದ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯ ಸುವಿಧ ಕುರಿತು ಹೆಚ್ಚಿನ ಪ್ರಚಾರ ಮತ್ತು ನಾಯಬೆಲೆ ಅಂಗಡಿ ಮಾಲೀಕರಿಗೆ ಸೂಚನೆ ಕೊಡುವಂತೆ ಆಹಾರ ಇಲಾಖೆಯ ಅಧಿಕಾರಿಗಳು ಅಗತ್ಯಕ್ರಮ ಕೈಗೊಳ್ಳಬೇಕು. ಯುವ ನಿಧಿ ಫಲಾನುಭವಿಗಳು ಕಡ್ಡಾಯವಾಗಿ ಯುವ ನಿಧಿ ಪ್ಲಸ್ ನಲ್ಲಿ ನೋಂದಾಯಿಸಿಕೊಳ್ಳುವಂತೆ ಹಾಗೂ ಅವರಿಗೆ ಅಗತ್ಯವಿರುವ ತರಬೇತಿಗಳನ್ನು ಆಯೋಜಿಸಲು ಕ್ರಮಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳಡಿ ಕೊಪ್ಪಳ ಜಿಲ್ಲೆಯ ಪ್ರಗತಿ ವಿವರ ಕುರಿತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಕಾಸಿಮ್ ಸಾಬ್ ಹಾಗೂ ಅಮರೇಶಪ್ಪ ಎಸ್.ಜಿ. ಸೇರಿದಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು, ಜಿಲ್ಲೆಯ ವಿವಿಧ ತಾಲ್ಲೂಕುಗಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರು ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.




