
ಜಿಲ್ಲಾ ಮಟ್ಟದ 3ನೇ ತ್ರೈಮಾಸಿಕ ಕೆ.ಡಿ.ಪಿ ಸಭೆ
ಜನರಿಗೆ ಆರೋಗ್ಯ ಸೇವೆಗಳು ತ್ವರಿತವಾಗಿ ಸಿಗಬೇಕು- ಸಚಿವ ಶಿವರಾಜ ತಂಗಡಗಿ
People should get health services quickly - Minister Shivraj Thangadgi

ಕೊಪ್ಪಳ ಫೆಬ್ರುವರಿ 16 (ಕರ್ನಾಟಕ ವಾರ್ತೆ): ಜನರಿಗೆ ಆರೋಗ್ಯ ಸೇವೆಗಳು ಮತ್ತಷ್ಟು ಸುಲಭ ಮತ್ತು ತ್ವರಿತವಾಗಿ ಸಿಗಲು ಕೊಪ್ಪಳ ಜಿಲ್ಲೆಯ ಎಲ್ಲಾ ಹೋಬಳಿಗಳಲ್ಲಿ ಕನಿಷ್ಠ 30 ಹಾಸಿಗೆಯುಳ್ಳ ಸಮುದಾಯ ಆರೋಗ್ಯ ಕೇಂದ್ರಗಳಿರಬೇಕು. ಇದಕ್ಕಾಗಿ ಹೆಚ್ಚಿನ ಪ್ರಸ್ತಾವನೆ ಸಲ್ಲಿಸಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಹೇಳಿದರು.
ಅವರು ಸೋಮವಾರ ಕೊಪ್ಪಳ ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ(20 ಅಂಶಗಳು ಸೇರಿದಂತೆ) 2025-26ನೇ ಸಾಲಿನ 3ನೇ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಕೊಪ್ಪಳ ಜಿಲ್ಲೆಯಲ್ಲಿ ಸದ್ಯ 12 ಹೋಬಳಿಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಿವೆ. ಇನ್ನೂ ಎಂಟು ಕಡೆ ಸಮುದಾಯ ಆರೋಗ್ಯ ಕೇಂದ್ರಗಳ ನಿರ್ಮಾಣ ಆಗಬೇಕು. ಅವುಗಳ ಉನ್ನತೀಕರಣಕ್ಕೆ ಮತ್ತು ಜಿಲ್ಲೆಯ ಇಪ್ಪತ್ತು ಹೋಬಳಿಗಳಲ್ಲಿ ಕನಿಷ್ಠ 30 ಬೆಡ್‌ಗಳ ಆಸ್ಪತ್ರೆ ಜೊತೆಗೆ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಇತರೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಗ್ರಾಮೀಣ ಭಾಗದ ಜನರಿಗೆ ವೇಗವಾಗಿ ಆರೋಗ್ಯ ಸೇವೆಯನ್ನು ನೀಡಬೇಕು. ಇದಕ್ಕಾಗಿ ರಾಜ್ಯ ಸರ್ಕಾರದಿಂದ ಅನುದಾನ ನೀಡಲಾಗುತ್ತದೆ ಮತ್ತು ವಿಶೇಷವಾಗಿ ನಮಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿAದಲೂ ಹೆಚ್ಚುವರಿ ಅನುದಾನ ಸಿಗಲಿದ್ದು, ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಆರೋಗ್ಯಾಧಿಕಾರಿಗಳು ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯದ ಆರೋಗ್ಯ ಕೇಂದ್ರಗಳು, ತಾಲ್ಲೂಕು ಆಸ್ಪತ್ರೆಗಳು, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗಳು ಹಾಗೂ ಇತರೆ ಆರೋಗ್ಯ ಕೇಂದ್ರಗಳಿಗೆ ಆಗಾಗ್ಗೆ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳನ್ನು ಪರಿಹರಿಸಿ, ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆ ನೀಡುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಎಂ.ಸಿ.ಹೆಚ್ ಆಸ್ಪತ್ರೆ ಹಾಗೂ ತಾಲ್ಲೂಕು ಕೇಂದ್ರಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತು ವಿಶೇಷವಾಗಿ ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಜನರು ಚೀಟಿ ಮಾಡಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಬೇಕು. ಇದಕ್ಕಾಗಿ ಹೆಚ್ಚಿನ ಕೌಂಟರ್‌ಗಳನ್ನು ತೆರೆಯಬೇಕು. ಆಸ್ಪತ್ರೆಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ. ಔಷಧಿಗಳ ಖರೀದಿಗೆ ಯಾವುದೇ ರೀತಿಯ ಅನುದಾನ ಕೊರತೆಯಿಲ್ಲ. ಹೊರಗಡೆಯಿಂದ ಔಷಧಿ ಕೊಂಡುಕೊಳ್ಳುವAತೆ ರೋಗಿಗಳಿಗೆ ಹೇಳುವಂತಿಲ್ಲಿ. ಇಂತಹ ದೂರುಗಳು ಕಂಡುಬಂದಲ್ಲಿ ಸಂಬಂಧಿಸಿದ ವೈದ್ಯಾಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಕಿಮ್ಸ್ ನಿರ್ದೇಶಕರಿಗೆ ಸೂಚಿಸಿದರು.
ಆಸ್ಪತ್ರೆಗಳ ವೈದ್ಯಾಧಿಕಾರಿಗಳ ಸಮನ್ವಯತೆ ಕೊರತೆಯಿದೆ. ಜನರಿಗೆ ಸರಿಯಾದ ರೀತಿಯಲ್ಲಿ ಆರೋಗ್ಯ ಸೇವೆಗಳು ಸಿಗುತ್ತಿಲ್ಲ ಎಂಬ ದೂರುಗಳಿವೆ. ಜೀವನ ರೂಪಿಸುವವರು ಶಿಕ್ಷಕರು ಮತ್ತು ಜೀವ ರಕ್ಷಿಸುವರು ವೈದ್ಯರು. ಹಾಗಾಗಿ ವೈದ್ಯರು ಮಾನವೀಯತೆಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.
ಕೊಪ್ಪಳ ಜಿಲ್ಲೆಯಲ್ಲಿ ತೋಟಗಾರಿಕೆ ಕ್ಷೇತ್ರವು ಪ್ರತಿವರ್ಷ ಹೆಚ್ಚಾಗುತ್ತಿದ್ದು, ಜಿಲ್ಲೆಯ ಇಪ್ಪತ್ತು ಹೋಬಳಿಗಳ ಪೈಕಿ ಹದಿನೈದು ಹೋಬಳಿಗಳ ರೈತರು ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಜಿಲ್ಲೆಯ ತೋಟಗಾರಿಕೆ ಕ್ಷೇತ್ರದ ಹೆಚ್ಚಳಕ್ಕೆ ನಮ್ಮ ಸರ್ಕಾರದ ಕೃಷಿ ಹೊಂಡ, ಕೆರೆ ತುಂಬಿಸುವ ಯೋಜನೆ ಪ್ರಮುಖ ಕಾರಣವಾಗಿವೆ. ಹಾಗಾಗಿ ಈ ಯೋಜನೆಗಳ ಅನುಷ್ಠಾನಕ್ಕೆ ಇನ್ನೂ ಹೆಚ್ಚಿನ ಒತ್ತು ನೀಡಬೇಕು. ರೈತರಿಗೆ ಉತ್ತಮ ಮಾರುಕಟ್ಟೆ ಜೊತೆಗೆ ಪ್ರೊಸೆಸ್ಸಿಂಗ್ ಯುನಿಟ್ ಮಾಡಬೇಕು. ಈ ಬಗ್ಗೆ ರೈತರಿಗೆ ಅರಿವು ಮೂಡಿಸುವ ಕೆಲಸ ಆಗಬೇಕು. ಕೃಷಿ ಯಂತ್ರೋಪಕರಣಗಳ ಖರೀದಿಗಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಇರುವ ಸಹಾಯಧನ ಬಿಡುಗಡೆಗಾಗಿ ಮೇಲಾಧಿಕಾರಿಗಳ ಮೂಲಕ ಕೇಂದ್ರ ಕಚೇರಿಗಳಿಗೆ ಪತ್ರ ಬರೆಯಲು ಅಗತ್ಯ ಕ್ರಮಕೈಗೊಳ್ಳುವಂತೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಡಿ ಬರುವ ಎಲ್ಲಾ ವಸತಿ ಶಾಲೆ ಹಾಗೂ ವಸತಿ ನಿಲಗಳ ಯಾವುದೇ ರೀತಿಯ ಆಹಾರ ಸಮಸ್ಯೆಯಾಗಬಾದರು. ಈ ನಿಟ್ಟಿನಲ್ಲಿ ಸಂಬಂಧಿಸಿದ ವಸತಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಹಾಸ್ಟೆಲ್‌ಗಳಿಗೆ ವಾರದಲ್ಲಿ ಕನಿಷ್ಠ ಎರಡು ಅಥವಾ ಮೂರು ಬಾರಿ ಭೇಟಿ ನೀಡಿ, ಕಡ್ಡಾಯವಾಗಿ ಹಾಸ್ಟೆಲ್ ಊಟ ಸವೆದು ಪರಿಶೀಲಿಸಬೇಕು. ಅಲ್ಲದೇ ಸ್ವಚ್ಛತೆ ಮತ್ತು ಮಕ್ಕಳ ಆರೋಗ್ಯದ ಕಡೆ ವಿಶೇಷ ಕಾಳಜಿ ವಹಿಸಬೇಕು. ಶಿಷ್ಯವೇತನ ಮಂಜೂರು ಕುರಿತಂತೆ ಇರುವ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಿ ಅರ್ಹ ವಿದ್ಯಾರ್ಥಿಗಳಿಗೆ ಶಿಷ್ಯವೇತನ ದೊರೆಕಿಸಿಕೊಡಬೇಕು. ಮೆಟ್ರಿಕ್ ನಂತರದ ವಸತಿ ನಿಲಯಗಳಲ್ಲಿ ಪದವಿ ಪೂರ್ಣಗೊಂಡ ಮಕ್ಕಳನ್ನು ನಿಯಮ ಬಾಹಿರವಾಗಿ ಮುಂದುವರೆಯಲು ಅವಕಾಶ ನೀಡಬಾರದು. ಜಿಲ್ಲೆಯಲ್ಲಿ ಅವಶ್ಯವಿರುವ ಹೊಸ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಮತ್ತು ಇತರೆ ವಸತಿನಿಲಯಗಳ ಮಂಜೂರಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಈ ವರ್ಷದ ಜಿಲ್ಲೆಯ ಎಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಮುಂಬರುವ ಬೇಸಿಗೆಯಲ್ಲಿ ಜನರಿಗೆ ಮತ್ತು ಜಾನುವಾರುಗಳಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಬೇಸಿಗೆ ಸಂದರ್ಭದಲ್ಲಿ ಜಾನುವಾರುಗಳಿಗೆ ಅವಶ್ಯವಿರುವ ಮೇವನ್ನು ಸಂಗ್ರಹಿಸಿಟ್ಟುಕೊಂಡು ಯಾವುದೇ ರೀತಿಯ ಮೇವಿನ ಸಮಸ್ಯೆಯಾಗದಂತೆ ಮುಂಜಾಗೃತಿ ವಹಿಸಬೇಕು ಎಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಂಚ ಗ್ಯಾರಂಟಿ ಯೋಜನೆಗಳು ಬಡವರು ಮೆಚ್ಚುವಂತಹ ಯೋಜನೆಗಳಾಗಿವೆ. ಗೃಹಲಕ್ಷ್ಮೀ ಯೋಜನೆಯ ಹಣದಿಂದ ಬಹಳಷ್ಟು ಮಹಿಳೆಯರು ಕಿರಾಣಿ ಅಂಗಡಿ, ಬಟ್ಟೆ ವ್ಯಾಪಾರ, ಹೊಲಿಗೆಯಂತ್ರ ಖರೀದಿ, ಪಶು ಸಾಕಾಣಿಕೆಯಂತಹ ಹಲವಾರು ವ್ಯಾಪಾರ ಮತ್ತು ಉದ್ಯೋಗವನ್ನು ಮಾಡುವ ಮೂಲಕ ತಮ್ಮ ಸ್ವಾವಲಂಭಿ ಬದುಕನ್ನು ಕಟ್ಟಿಕೊಂಡು ಇತರರಿಗೆ ಮಾದರಿಯಾಗುತ್ತಿದ್ದಾರೆ ಎಂದು ಹೇಳಿದರು.
ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಮಾತನಾಡಿ, ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಛತಾ ಕಾರ್ಯ ಸರಿಯಾದ ರೀತಿಯಲ್ಲಿ ನಿರ್ವಹಣೆಯಾಗುತ್ತಿಲ್ಲ. ಸ್ವಚ್ಛತಾ ಕಾರ್ಯಕ್ಕಾಗಿ ಪ್ರಸ್ತುತ ದಿನಗಳಲ್ಲಿ ಹಲವಾರು ಆಧುನಿಕ ಯಂತ್ರೋಪಕರಣಗಳು ಮಾರುಕಟ್ಟೆಯಲ್ಲಿ ಬಂದಿವೆ. ಹಾಗಾಗಿ ಜಿಲ್ಲಾಸ್ಪತ್ರೆಗೆ ಕೂಡಲೆ ಜೆಟ್ಟಿಂಗ್ & ಸಕ್ಕಿಂಗ್ ಮಷಿನ್‌ನಂತಹ ಸ್ವಚ್ಛತಾ ಯಂತ್ರಗಳನ್ನು ಖರೀದಿಸುವ ಮೂಲಕ ಆಸ್ಪತ್ರೆಯ ಸ್ವಚ್ಛತೆಗೆ ಕ್ರಮ ವಹಿಸಬೇಕೆಂದು ಕಿಮ್ಸ್ ನಿರ್ದೇಶಕರು ಸೂಚನೆ ನೀಡಿದರು.
ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಜನಾರ್ಧನರೆಡ್ಡಿ ಅವರು ಮಾತನಾಡಿ, ಗಂಗಾವತಿ ತಾಲ್ಲೂಕಿನ ಆನೆಗೊಂದಿ ಗ್ರಾಮವು ಐತಿಹಾಸಿಕ ಪ್ರವಾಸಿ ತಾಣಗಳನ್ನು ಹೊಂದಿದ್ದು, ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದೇಶ ಮತ್ತು ವಿದೇಶಿ ಪ್ರಾಸಿಗರು ಭೇಟಿ ನೀಡುತ್ತಾರೆ. ಭದ್ರತೆಯ ದೃಷ್ಠಿಯಿಂದ ಆನೆಗೊಂದಿಯಲ್ಲಿ ಒಂದು ಪೊಲೀಸ್ ಠಾಣೆ ನಿರ್ಮಾಣದ ಅತ್ಯವಶ್ಯಕತೆಯಿದೆ ಎಂದರು.
ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡಿ, ಈ ಬಗ್ಗೆ ಗೃಹ ಸಚಿವರಲ್ಲಿ ಪ್ರಸ್ತಾಪಿಸಿ, ಆನೆಗೊಂದಿಗೆ ಪೊಲೀಸ್ ಠಾಣೆ ಮಂಜೂರಾತಿಗೆ ಕ್ರಮ ಕೈಗೊಳ್ಳಲಾಗವುದು ಎಂದರು.
ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಅವರು ಮಾತನಾಡಿ, ಜಿಲ್ಲಾಸ್ಪತ್ರೆಯಲ್ಲಿ ಔಷಧಿಗಳನ್ನು ರೋಗಿಗಳು ಹೊರಗಿನಿಂದ ಕೊಂಡುಕೊಳ್ಳುವAತೆ ವೈದ್ಯರು ಶಿಫಾರಸ್ಸು ಮಾಡುತ್ತಿದ್ದಾರೆ. ಇದು ಆಗಬಾರದು. ಕೊಪ್ಪಳ ನಗರದ ಹುಲಿ ಕೆರೆಯಲ್ಲಿ ನೀರು ಬಹಾಳ ಕಲುಷಿತವಾಗಿದ್ದು, ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ವಸತಿ ನಿಲಯಗಳಲ್ಲಿ ಮಕ್ಕಳಿಗೆ ಸರಿಯಾದ ಊಟೋಪಹಾರ ನೀಡುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಇದನ್ನು ಸಹ ಕೂಡಲೇ ಸರಿಪಸಿಬೇಕು ಎಂದರು.
ಸಭೆಯಲ್ಲಿ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ವಸತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನ್‌ರಾಜ್, ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ, ಕೊಪ್ಪಳ ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಕೆ. ನಿರ್ಮಲಾ, ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಹೇಮಂತ ಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ, ತ್ರೈಮಾಸಿಕ ಕೆ.ಡಿ.ಪಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ರವಿ ಕುರಗೋಡ, ಹನುಮಂತಗೌಡ ಚಂಡೂರು ಹಾಗೂ ಮತ್ತಿತರರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
****




