
ರಸ್ತೆ ಸುರಕ್ಷತೆಗೆ ಅಗತ್ಯ ಕ್ರಮವಹಿಸಿ- ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ
Take necessary measures for road safety - Deputy Commissioner Dr. Suresh B. Itnal

ಕೊಪ್ಪಳ ಫೆಬ್ರುವರಿ 18 (ಕರ್ನಾಟಕ ವಾರ್ತೆ): ರಸ್ತೆ ಸುರಕ್ಷತೆ ಕುರಿತು ಈ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳುವ ನಿರ್ಣಯಗಳನ್ನು ಪಾಲಿಸುವ ಮೂಲಕ ಜಿಲ್ಲೆಯ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಸೂಚನೆ ನೀಡಿದರು.
ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ರಸ್ತೆ ಸುರಕ್ಷತೆ ಕುರಿತು ಇರುವ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಪಾಲನೆ ಮಾಡಬೇಕು. ಇಲ್ಲದಿದ್ದರೆ ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗುತ್ತದೆ. ಹಾಗಾಗಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳ ಹಾಗೂ ಫ್ಲೈ ಓವರ್‌ಗಳಲ್ಲಿರುವ ರಸ್ತೆ ಗುಂಡಿಗಳನ್ನು ಕೂಡಲೇ ಮುಚ್ಚುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಕುರಿತು ಸರ್ವಿಸ್ ರಸ್ತೆಗಳಲ್ಲಿಯೂ ಗಮನ ಹರಿಸಬೇಕು. ರಸ್ತೆಗಳಲ್ಲಿ ಬ್ಲ್ಯಾಕ ಸ್ಪಾಟಗಳಿದ್ದರೆ ತಕ್ಷಣ ಅವುಗಳನ್ನು ಸರಿಪಡಿಸಬೇಕು. ಬ್ಲಾಕ್‌ಸ್ಪಾಟ್ ರಸ್ತೆಗಳಲ್ಲಿ ಸಿಸಿಟಿವಿ ಹಾಗೂ ವಿದ್ಯುತ್ ದೀಪಗಳನ್ನು ಅಳವಡಿಕೆ ಕಡ್ಡಾಯವಾಗಿದೆ ಎಂದರು.
ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸಿದಾಗ ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತವೆ. ಈ ನಿಟ್ಟಿನಲ್ಲಿ ರಸ್ತೆ ಸುರಕ್ಷತೆಗೆ ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ಬಸ್ಸುಗಳಿಗೆ ಜಿ.ಪಿ.ಆರ್.ಎಸ್. ಅಳವಡಿಸಬೇಕು. ಜಿ.ಪಿ.ಆರ್.ಎಸ್. ಅಳವಡಿಸದ ಶಾಲಾ ವಾಹನಗಳನ್ನು ಸೀಜ್ ಮಾಡಲು ಕ್ರಮ ಕೈಗೊಳ್ಳಬೇಕು. ವಾಹನ ಚಾಲಕರಿಗೆ ಮಕ್ಕಳ ಸುರಕ್ಷೆತೆಯ ಬಗ್ಗೆಯೂ ತಿಳಿಸಬೇಕು. ಎಲ್ಲಾ ಶಾಲಾ ಕಾಲೇಜು ಬಸ್ಸುಗಳಿಗೆ ಹಾಗೂ ಸರ್ಕಾರಿ ಕಚೇರಿ ವಾಹನಗಳನ್ನು ಸರಿಯಾಗಿ ಪರಿಶೀಲಿಸಿ ವಾಹನದ ಸುಸ್ಥಿತಿ ಪ್ರಮಾಣ ಪತ್ರವನ್ನು ನೀಡಬೇಕು ಎಂದು ಹೇಳಿದರು.
ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಅವರು ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಹೊಸಳ್ಳಿ ರಸ್ತೆ ಮೇಲ್ಸೇತುವಯ ಸರ್ವಿಸ್ ರಸ್ತೆಯನ್ನು ಅಗಲೀಕರಣ ಮಾಡಿ, ಟ್ರಾಪಿಕ್ ಆಗದಂತೆ ಕ್ರಮ ವಹಿಸಬೇಕು. ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲಾ ಹೆದ್ದಾರಿಗಳಲ್ಲಿ ವಿದ್ಯುತ್ ದೀಪ, ಸಿಸಿಟಿವಿ ಮತ್ತು ಸಾರ್ವಜನಿಕರಿಗೆ ಇತರೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿನ ಅನಧಿಕೃತ ರಸ್ತೆ ಉಬ್ಬುಗಳನ್ನು ತೆರವುಗೊಳಿಸಲು ನಿಯಮಾನುಸಾರ ಕ್ರಮ ಕೈಗೊಳ್ಳಿ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಈಗಾಗಲೇ ಅಳವಡಿಸಿರುವ ವಿದ್ಯುತ್ ದೀಪ, ಸ್ಪೀಡ್‌ಗನ್ ಮತ್ತು ಸಿ.ಸಿ.ಟಿ.ವಿ ಕ್ಯಾಮೆರಾಗಳು ಎಲ್ಲವೂ ಕಾರ್ಯನಿರ್ವಹಿಸುತ್ತಿರಬೇಕು. ರಸ್ತೆ ಸುರಕ್ಷತೆ ಕುರಿತು ರಸ್ತೆಗಳಲ್ಲಿ ಕಡ್ಡಾಯವಾಗಿ ಮಾಹಿತಿ ಫಲಕ ಹಾಗೂ ಸೂಚನಾ ಫಲಕಗಳ ಅಳವಡಿಸಿರಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಹೇಮಂತ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಹೇಮಂತ್ ಕುಮಾರ, ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಭುಸ್ವಾಮಿ ಹಿರೇಮಠ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಧಾರವಾಡದ ಎಇಇ ಶ್ರೀದೇವಿ, ಹೊಸಪೇಟೆಯ ಎಇಇ ದಾನೇಶ, ಹುಬ್ಬಳಿ-ಹೊಸಪೇಟೆ ಆರ್.ಇ ನಾಗರಾಜ ಪಾಟೀಲ್, ಕೊಪ್ಪಳ ಲೋಕೋಪಯೋಗಿ ಇಲಾಖೆಯ ಎಇಇ ವೆಂಕಟೇಶ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಇತರೆ ಪ್ರತಿನಿಧಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.



