
Take steps to ensure uninterrupted power supply during the Sri Huligemma Devi Jatra period and arrange electrical decorations and lighting for the temples and towers: Dr. Suresh

ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಅವಧಿಯಲ್ಲಿ ನಿರಂತರ ವಿದ್ಯುತ್ ಸರಬರಾಜಿಗೆ ಕ್ರಮವಹಿಸಿ ಗುಡಿ-ಗೋಪುರಗಳಿಗೆ ವಿದ್ಯುತ್ ಅಲಂಕಾರ, ಬೆಳಕಿನ ವ್ಯವಸ್ಥೆ ಮಾಡಿ: ಡಾ. ಸುರೇಶ ಇಟ್ನಾಳ

ಕೊಪ್ಪಳ ಏಪ್ರಿಲ್ 24 (ಕರ್ನಾಟಕ ವಾರ್ತೆ): ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಅವಧಿಯಲ್ಲಿ ನಿರಂತರ ವಿದ್ಯುತ್ ಸರಬರಾಜು ಆಗಬೇಕು ಹಾಗೂ ಗುಡಿ-ಗೋಪುರಗಳಿಗೆ ವಿದ್ಯುತ್ ಅಲಂಕಾರ ಮತ್ತು ಬೆಳಕಿನ ವ್ಯವಸ್ಥೆ ಮಾಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ 2026ರ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಯಾವುದೇ ರೀತಿಯ ವಿದ್ಯುತ್ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಜಾತ್ರಾ ಅವಧಿಯಲ್ಲಿ ಹೆಚ್ಚುವರಿ ವಿದ್ಯುತ್ ಸರಬರಾಜು ಮಾಡಲು ಅನುಕೂಲವಾಗುವಂತೆ ಹೆಚ್ಚುವರಿಯಾಗಿ ಒಂದು ವಿದ್ಯುತ್ ಪರಿವರ್ತಕವನ್ನು ಅಳವಡಿಸಿಕೊಂಡು ಒಟ್ಟಾರೆಯಾಗಿ 100 ಕಿ.ವ್ಯಾ ಹೆಚ್ಚುವರಿ ವಿದ್ಯುತ್ ಸರಬರಾಜು ಮಾಡಿಕೊಂಡು, ಜೆಸ್ಕಾಂ ಇಲಾಖೆಯ ಹೆಚ್ಚಿನ ಸಿಬ್ಬಂದಿಗಳನ್ನು ಜಾತ್ರಾ ಕಾಲದಲ್ಲಿ ನಿಯೋಜನೆ ಮಾಡಬೇಕು.
ನೀರಿನ ಸರಬರಾಜಿಗೆ ಹಾಗೂ ಬೆಳಕಿನ ವ್ಯವಸ್ಥೆಗೆ ಅಡಚಣೆಯಾಗದಂತೆ ನಿರಂತರ ವಿದ್ಯುತ್ ಸರಬರಾಜು ಮಾಡಲು ಮತ್ತು ರಾತ್ರಿ ಸಮಯದಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಸ್ಥಗಿತಗೊಳಿಸದಂತೆ ತೀವ್ರ ನಿಗಾವಹಿಸಬೇಕು. ಈ ಜಾತ್ರೆ ವೇಳೆಯಲ್ಲಿ ಮುಖ್ಯವಾಗಿ ಮೂರು ಸ್ಥಳಗಳಲ್ಲಿ ವಾಹನ ನಿಲುಗಡೆ ಪ್ರದೇಶವನ್ನು ಮಾಡಲಾಗುತ್ತಿದ್ದು, ಯಾವುದೇ ವಿದ್ಯುತ್ ಅವಘಡಗಳು ಜರುಗದಂತೆ ಮುಂಜಾಗ್ರತಾ ಕ್ರಮ ವಹಿಸುವಂತೆ ಜೆಸ್ಕಾಂ ಮುನಿರಾಬಾದ್ ಡ್ಯಾಮ್ ಸಹಾಯಕ ಕಾರ್ಯಪಾಲಕ ಅಭಿಯಂತರರು, ಕೊಪ್ಪಳ ಜೆಸ್ಕಾಂ ಕಾರ್ಯಪಾಲಕ ಅಭಿಯಂತರರು ಹಾಗೂ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
