
Ambedkar and Babu Jagjivan Ram Jayanti celebrated in Koppal: Talented students felicitated


ಕೊಪ್ಪಳದಲ್ಲಿ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಕೊಪ್ಪಳ: ನಗರದ ಸಾಹಿತ್ಯ ಭವನದಲ್ಲಿ ಏಪ್ರಿಲ್ 30ರಂದು ದಲಿತ ಸೇನೆ ಜಿಲ್ಲಾ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಹಾಗೂ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು.
ದಲಿತ ಸೇನೆಯ ಜಿಲ್ಲಾಧ್ಯಕ್ಷ ಉಡಚಪ್ಪ ಶ್ರೀರಾಮನಗರ ಹಾಗೂ ಪ್ರಮುಖ ಪದಾಧಿಕಾರಿಗಳು ಮತ್ತು ಮುಖ್ಯ ಅತಿಥಿಗಳು ಮಹನೀಯರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಯಂತಿ ಅಂಗವಾಗಿ ಏಪ್ರಿಲ್ 5ರಂದು ಗಂಗಾವತಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಏರ್ಪಡಿಸಲಾಗಿತ್ತು. ಈ ಪರೀಕ್ಷೆಯಲ್ಲಿ ವಿಜೇತರಾದ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಬಹುಮಾನ ನೀಡಿ ಗೌರವಿಸಲಾಯಿತು.
ಇದರೊಂದಿಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮುಖ್ಯ ಅತಿಥಿಗಳು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಮೂಡಿಸಲು ದಲಿತ ಸೇನೆಯು ಹಮ್ಮಿಕೊಂಡಿರುವ ಈ ಕಾರ್ಯಕ್ರಮವು ಅತ್ಯಂತ ಶ್ಲಾಘನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಡಾ. ಬಿ.ಆರ್. ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ಜ್ಯೋತಿರಾವ್ ಫುಲೆ ಹಾಗೂ ಡಾ. ಬಾಬು ಜಗಜೀವನ್ ರಾಮ್ ಅವರ ಜೀವನ ಮತ್ತು ಸಾಧನೆಗಳು ಇಂದಿನ ಯುವ ಪೀಳಿಗೆಗೆ ದಾರಿದೀಪವಾಗಿದ್ದು, ಇಂತಹ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.
ಸನ್ಮಾನಿತ ವಿದ್ಯಾರ್ಥಿಗಳು ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಾ, ಸಾಮಾನ್ಯ ಜ್ಞಾನ ವೃದ್ಧಿಸುವ ನಿಟ್ಟಿನಲ್ಲಿ ಇಂತಹ ಪರೀಕ್ಷೆಗಳನ್ನು ಆಯೋಜಿಸಿರುವ ದಲಿತ ಸೇನೆಯ ಜಿಲ್ಲಾಧ್ಯಕ್ಷರ ಹಾಗೂ ತಂಡದ ಕಾರ್ಯ ವೈಖರಿಗೆ ಕೃತಜ್ಞತೆ ಸಲ್ಲಿಸಿದರು. ಅಧ್ಯಕ್ಷತೆ ವಹಿಸಿದ್ದ ಉಡಚಪ್ಪ ಶ್ರೀರಾಮನಗರ ಅವರು ಮಾತನಾಡಿ, ಮಹಾನ್ ನಾಯಕರ ಕುರಿತು ಅರಿವು ಮೂಡಿಸಲು ಪಾರದರ್ಶಕವಾಗಿ ಈ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಮೌಲ್ಯಮಾಪನ ಪ್ರಕ್ರಿಯೆ ನಡೆಸಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ರತ್ನಕಾರ್, ಹನುಮಂತಪ್ಪ ತಳಕಲ್, ಮಂಜುನಾಥ ಜಿ., ಮುದಿಯಪ್ಪ ಯಟ್ಟಿ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
