ತ್ಯಾಜ್ಯ ಸಂಸ್ಕರಿಸಿ ನೀಡದಿದ್ದರೆ ನೀರು, ವಿದ್ಯುತ್ ಕಟ್: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ

H.Mallikarjun
H.Mallikarjun - Kalyanasiri
3 Min Read
ಜಾಹೀರಾತು





ತ್ಯಾಜ್ಯ ಸಂಸ್ಕರಿಸಿ ನೀಡದಿದ್ದರೆ ನೀರು, ವಿದ್ಯುತ್ ಕಟ್: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ

ಜಾಹೀರಾತು
Water and electricity will be cut if waste is not processed and provided: Deputy Commissioner Dr. Suresh Itnal


ಕೊಪ್ಪಳ ಮೇ 21 (ಕರ್ನಾಟಕ ವಾರ್ತೆ): ಸುಪ್ರೀಂ ಕೋರ್ಟ್ನ ಆದೇಶದನುಸಾರ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಸ್ತು ವಿಲೇವಾರಿಗೆ ಸೂಕ್ತ ಕ್ರಮ ಕೈಗೊಂಡು, ತ್ಯಾಜ್ಯ ಸಂಸ್ಕರಸಿದವರಿಗೆ ನೀರು ಹಾಗೂ ವಿದ್ಯುತ್ ಸ್ಥಗಿತಗೊಳಿಸಲು ಅಗತ್ಯ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
 ಘನ ತ್ಯಾಜ್ಯ ವಸ್ತುಗಳ ನಿರ್ವಹಣಾ ನಿಯಮಗಳು-2026ರ ಕುರಿತು ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಮತ್ತು ಇತರೆ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
 ಘನ ತ್ಯಾಜ್ಯ ವಸ್ತು ವಿಲೇವಾರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನ ನಿರ್ದೇಶನದ ರೀತ್ಯಾ, ಕೇಂದ್ರ ಸರ್ಕಾರವು ದಿನಾಂಕ: 01/04/2026 ರಿಂದ ಅನ್ವಯವಾಗುವಂತೆ “ಘನ ತ್ಯಾಜ್ಯ ವಸ್ತುಗಳ ನಿರ್ವಹಣಾ ನಿಯಮಗಳ”ನ್ನು ಜಾರಿಗೊಳಿಸಲಾಗಿದ್ದು, ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಸ್ತುಗಳ ನಿರ್ವಹಣಾ ನಿಯಮಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಕ್ರಮ ವಹಿಸಬೇಕು. ಸರಕಾರದ ಆದೇಶದನುಸಾರ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಂಬಂಧಿಸದಂತೆ ಜಿಲ್ಲಾ ಮಟ್ಟದ ವಿಜಿಲನ್ಸ್ ಕಮೀಟಿ ಹಾಗೂ ವಿಶೇಷ ಶೆಲ್ ರಚಿಸಲಾಗಿದ್ದು, ತ್ಯಾಜ್ಯ ಸಂಸ್ಕರಣೆಯ ಬಗ್ಗೆ ಸಮಿತಿಯ ಆದೇಶ ಪಾಲಿಸಬೇಕೆಂದು ನಿರ್ದೇಶಿಸಿದರು.
 ಘನ ತ್ಯಾಜ್ಯ ವಸ್ತುಗಳ ನಿರ್ವಹಣೆಯ 2026ರ ಹೊಸ ನಿಯಮಾವಳಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಬೇಕು. ಈ ಬಗ್ಗೆ ನಾಗರೀಕರಿಗೆ ವ್ಯಾಪಕವಾಗಿ ಅರಿವು ಮೂಡಿಸಬೇಕು. ಸ್ವಚ್ಛ ಮತ್ತು ಆರೋಗ್ಯ ಪರಿಸರ ರೂಪಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಘನ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮತ್ತು ನಿರ್ವಹಣೆ ಮಾಡದಿರುವುದು ಪರಿಸರ ಹಾಗೂ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹಾಗಾಗಿ ಘನ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಸೂಕ್ತ ಕ್ರಮವಹಿಸುವಂತೆ ಸೂಚನೆ ನೀಡಿದರು.
 ಹೊಸ ನಿಯಮಾವಳಿಗಳನ್ವಯ ಪ್ರತಿ ಸ್ಥಳೀಯ ಸಂಸ್ಥೆಗಳಲ್ಲಿ 4 ವಿಧದ ತ್ಯಾಜ್ಯ ವಿಂಗಡಣೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಹಿನ್ನೆಲೆಯಲ್ಲಿ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ ಹಾಗೂ ಸ್ಪೆಷಲ್ ಕೇರ್ ತ್ಯಾಜ್ಯ (ಬಲ್ಬ್ ಗಳು, ಬ್ಯಾಟರಿಗಳು, ಅವಧಿ ಮೀರಿದ ಔಷಧಿಗಳು, ಪೇಂಟ್ ಡಬ್ಬಿಗಳು ಇತ್ಯಾದಿ) ವಿಧದ ತ್ಯಾಜ್ಯವನ್ನು ಸಂಗ್ರಹಣೆ, ಸಾಗಾಣಿಕೆ ಹಾಗೂ ಸಂಸ್ಕರಣೆ ಮತ್ತು ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಘನ ತ್ಯಾಜ್ಯ ನಿರ್ವಹಣೆಯ ಬಗ್ಗೆ ಪ್ರತಿಯೊಬ್ಬ ನಾಗರೀಕರಿಗೆ ಸಮರ್ಪಕ ಅರಿವನ್ನು ಮೂಡಿಸಿ. ತ್ಯಾಜ್ಯ ಉತ್ಪಾದನೆ ಮಾಡುವ ಘಟಕಗಳನ್ನು ಗುರುತಿಸಿ ನೋಂದಾಯಿಸುವುದು ಮತ್ತು ಬೃಹತ್ ತ್ಯಾಜ್ಯವನ್ನು ಉತ್ಪಾದಿಸುವ ಸ್ಥಳಗಳಲ್ಲಿಯೇ ಘನ ತ್ಯಾಜ್ಯವನ್ನು ಸಂಸ್ಕರಿಸಲು ಕ್ರಮವಹಿಸಿ ಎಂದು ಹೇಳಿದರು.
 ನೂತನ ನಿಯಮಾವಳಿಗಳನ್ನು ಉಲ್ಲಂಘನೆ ಮಾಡುವ ವ್ಯಕ್ತಿ ಅಥವಾ ಸಂಘ-ಸಂಸ್ಥೆಗಳ ವಿರುದ್ಧ ಕಡ್ಡಾಯವಾಗಿ ದಂಡ ವಿಧಿಸಬೇಕು ಹಾಗೂ ಅಂತಹ ವ್ಯಕ್ತಿ ಅಥವಾ ಸಂಘ-ಸಂಸ್ಥೆಗಳಿಗೆ ನೀರಿನ ಸಂಪರ್ಕವನ್ನು ಕಡಿತಗೊಳಿಸಲು ಕ್ರಮವಹಿಸಿ. ಪ್ರತಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಸ್ತೆ ಸ್ವಚ್ಛತೆಗಾಗಿ ನಿಯಮಿತವಾಗಿ ಬ್ಲಾಕ್ ಸ್ಪಾಟ್‌ಗಳನ್ನು ಕಾಲಕಾಲಕ್ಕೆ ತೆರವುಳಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
 ಒಣತ್ಯಾಜ್ಯವನ್ನು ಪ್ರತ್ಯೇಕವಾಗಿ ಸಂಸ್ಕರಣೆಗೊಳಿಸಿ, ಈ ತ್ಯಾಜ್ಯವನ್ನು ಮರುಸಂಸ್ಕರಣೆಗೊಳಿಸಲು ಸಹ ಕ್ರಮವಹಿಸಬೇಕು. ಪ್ರತಿ ಮನೆ ಮಟ್ಟದಲ್ಲಿ ಕಾಂಪೊಸ್ಟಿಂಗ್ ಬಯೋಗ್ಯಾಸ್(Composting Biogas) ಉತ್ಪಾದನೆಗೆ ಪ್ರೋತ್ಸಾಹ ಕೊಡುವಂತೆ ಸೂಚಿಸಲಾಯಿತು. ಪ್ರತಿ ನಿತ್ಯ ಮನೆ ಮನೆಗಳಲ್ಲಿ ಹಾಗೂ ರಸ್ತೆಗಳಲ್ಲಿನ ತ್ಯಾಜ್ಯ ಸಂಗ್ರಹಣೆಗೆ ಒತ್ತು ನೀಡಬೇಕು. ಒಟ್ಟಾರೆ ಕೊಪ್ಪಳ ಜಿಲ್ಲೆಯಲ್ಲಿನ ಎಲ್ಲಾ ಸ್ಥಳೀಯ ಸಂಸ್ಥೆಗಳ ಮೂಲಕ ಸ್ವಚ್ಛತೆಗೆ ಆದ್ಯತೆ ನೀಡಿ, ಸುತ್ತಮುತ್ತಲಿನ ಪರಿಸರ ಹಾಗೂ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವಲ್ಲಿ ಆದ್ಯತೆಯ ಮೇರೆಗೆ ಕ್ರಮವಹಿಸಬೇಕು. ಮಾನ್ಯ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದನ್ವಯ ಘನ ತ್ಯಾಜ್ಯ ವಸ್ತುಗಳ ನಿರ್ವಹಣಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಭೆಯಲ್ಲಿ ಹಾಜರಿದ್ದ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

 ಸಭೆಯಲ್ಲಿ ಕೊಪ್ಪಳ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಗುಂಡೂರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಟಿ.ಲಿಂಗರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಸೋಮಶೇಖರಗೌಡ ಪಾಟೀಲ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಜಗದೀಶ, ಕೊಪ್ಪಳ ವಿಶ್ವವಿದ್ಯಾಲಯದ ಕುಲ ಸಚಿವರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Total Views: 0
Share This Article