12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಡಾ. ಸುರೇಶ ಇಟ್ನಾಳ

H.Mallikarjun
H.Mallikarjun - Kalyanasiri
2 Min Read
ಜಾಹೀರಾತು
Make necessary preparations for the 12th International Yoga Day: Dr. Suresh Itnal




12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಡಾ. ಸುರೇಶ ಇಟ್ನಾಳ

ಕೊಪ್ಪಳ ಜೂನ್ 06 (ಕರ್ನಾಟಕ ವಾರ್ತೆ): ಜಿಲ್ಲಾ ಕೇಂದ್ರದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಮತ್ತು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕುರಿತಂತೆ ಶನಿವಾರ (ಜೂ. 6ರಂದು) ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೂನ್ 21 ರಂದು ಕೊಪ್ಪಳದ ತಾಲ್ಲೂಕು ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಏರ್ಪಡಿಸಲಾಗುವುದು. ಅಂದು ಬೆಳಿಗ್ಗೆ 6.30 ಗಂಟೆಗೆ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದೊಂದಿಗೆ ಯೋಗಭ್ಯಾಸ ನಡೆಯಲಿದೆ. ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಎಲ್ಲರ ಸಹಭಾಗೀತ್ವ ಬಹುಮುಖ್ಯವಾಗಿದ್ದು, ಸೂಕ್ತ ಪ್ರಚಾರ ಕೈಗೊಂಡು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗಿಯಾಗುವಂತೆ ನೋಡಿಕೊಳ್ಳಬೇಕು ಎಂದರು.
ಯೋಗ ದಿನಾಚರಣೆಗೆ ಆಗಮಿಸುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಲಘು ಉಪಹಾರದ ವ್ಯವಸ್ಥೆ ಮಾಡಿ. ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಕಡ್ಡಾಯ ಪಾಲ್ಗೊಳ್ಳಬೇಕು. ಕಾರ್ಯಕ್ರಮ ಸ್ಥಳದಲ್ಲಿ ಅಗತ್ಯ ಕುಡಿಯುವ ನೀರು ಮತ್ತು ಯೋಗಾಸನಕ್ಕೆ ಸಂಬಂಧಿಸಿದಂತೆ ಅಗತ್ಯ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮ ದಿನದಂದು ಅಗತ್ಯ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವ ಕುರಿತಂತೆ ಪೊಲೀಸ್ ಇಲಾಖೆಗೆ ಪತ್ರ ಬರೆದು ಕ್ರಮ ಕೈಗೊಳ್ಳಬೇಕು. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಧ್ಯಮವರು, ವಕೀಲರು, ಪೊಲೀಸರು ಹಾಗೂ ಮಾಜಿ ಸೈನಿಕರಿಗೆ ಮಾಹಿತಿ ನೀಡಬೇಕು ಎಂದು ಆಯುಷ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ಪಿ.ಬಿ.ಹಿರೇಗೌಡರ ಅವರು ಮಾತನಾಡಿ, ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಈ ಬಾರಿ “ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಆಚರಣೆ ಮಾಡಲಾಗುತ್ತಿದೆ. ಭಾರತ ಸರ್ಕಾರದ ಆಯುಷ್ ಮಂತ್ರಾಲಯದ ನಿರ್ದೇಶನದಂತೆ ಜೂನ್ 21ರಂದು ದೇಶಾದ್ಯಂತ “12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ–2026”ಯನ್ನು ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಸಾರ್ವಜನಿಕರು ಹಾಗೂ ಸರ್ಕಾರಿ ಅಧಿಕಾರಿಗಳಿಗೆ ಅನುಕೂಲವಾಗುವಂತೆ ಉಚಿತ ಆನ್‌ಲೈನ್ ಯೋಗ ತರಬೇತಿ ಕಾರ್ಯಕ್ರಮವನ್ನು ಈಗಾಗಲೇ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಂಗವಾಗಿ ಜೂನ್ 20 ರಂದು ಯೋಗಾಜಾಥಾ ಹಮ್ಮಿಕೊಳ್ಳಲಾಗುತ್ತಿದೆ. ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಯೋಗಭ್ಯಾಸದ ನಂತರ ಪ್ರಜಾಪಿತ ಬ್ರಹ್ಮಕುಮಾರಿ ಅಕ್ಕನವರಿಂದ ಧ್ಯಾನದ ಮಹತ್ವ ಕುರಿತು ಉಪನ್ಯಾಸ ಇರಲಿದೆ. ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಯೋಗ ದಿನಾಚರಣೆ ನಡೆಸಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಿದರು.
ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠಲ್ ಜಾಬಗೌಡರ್, ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಬಸವರಾಜ, ಬ್ರಹ್ಮಕುಮಾರಿ ಯೋಗಿನಿ ಅಕ್ಕನವರು,ಕೊಪ್ಪಳ ಜಿಲ್ಲೆಯ ಆಯುಷ್ ವೈದ್ಯಾಧಿಕಾರಿಗಳಾದ ಡಾ.ಯಮನಪ್ಪ ಶಿರವಾರ, ಡಾ.ಗುರುರಾಜ್ ಉಮಚಗಿ, ಡಾ.ರಾಜಶೇಖರ ನಾರಿನಾಳ, ಡಾ. ಕವಿತಾ ಹೆಚ್.ಎಫ್., ಡಾ.ಶರಣಪ್ಪ ಹೈದ್ರಿ ಹಾಗೂ ಇತರೆ ವೈದ್ಯಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಆಯುಷ್ ಇಲಾಖೆ ಸಿಬ್ಬಂದಿ, ವಿವಿಧ ಯೋಗ ತರಬೇತಿ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
Total Views: 0
Share This Article