ಹಿರೇಖೇಡ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಹೇಳೋರಿಲ್ಲ, ಕೇಳೋರಿಲ್ಲ – ಸಾರ್ವಜನಿಕರ ಆಕ್ರೋಶ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Hirekheda Gram Panchayat staff not being told or listened to – public outrage




ಹಿರೇಖೇಡ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಹೇಳೋರಿಲ್ಲ, ಕೇಳೋರಿಲ್ಲ – ಸಾರ್ವಜನಿಕರ ಆಕ್ರೋಶ

ಜಾಹೀರಾತು

ಕನಕಗಿರಿ, ಜೂನ್ 19: ಕನಕಗಿರಿ ತಾಲೂಕಿನ ಹಿರೇಖೇಡ ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಗ್ರಾಮ ಪಂಚಾಯಿತಿ ಕಚೇರಿ ಬೀಗ ಹಾಕಿರುವ ಘಟನೆ ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಿಯಮಿತವಾಗಿ ಹಾಜರಾಗದೆ ತಮ್ಮ ಇಷ್ಟದಂತೆ ಬಂದು ಹೋಗುತ್ತಿರುವುದರಿಂದ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವವರೇ ಇಲ್ಲದಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕಚೇರಿಯ ಕೊಠಡಿಗಳಿಗೆ ಬೀಗ ಹಾಕಿರುವುದರಿಂದ ತಮ್ಮ ಸಮಸ್ಯೆಗಳನ್ನು ಯಾರಿಗೆ ಹೇಳಿಕೊಳ್ಳಬೇಕು ಎಂಬ ಆತಂಕದಲ್ಲಿ ಗ್ರಾಮಸ್ಥರು ಇದ್ದಾರೆ.

ಹಿರೇಖೇಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ಏಳು ಗ್ರಾಮಗಳು ಸೇರಿದ್ದು, ಕುಡಿಯುವ ನೀರಿನ ಸಮಸ್ಯೆ, ಚರಂಡಿ ವ್ಯವಸ್ಥೆಯ ಕೊರತೆ, ಸರ್ಕಾರಿ ಶಾಲೆಗಳ ಗೋಡೆಗಳ ದುರವಸ್ಥೆ, ರಸ್ತೆ ಸಮಸ್ಯೆ ಸೇರಿದಂತೆ ಹಲವು ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಲು ಗ್ರಾಮ ಪಂಚಾಯಿತಿಗೆ ಬಂದಾಗ ಕಚೇರಿ ಬಾಗಿಲು ಮುಚ್ಚಿರುವುದನ್ನು ಕಂಡು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ನಿರುಪಾದಿ ಕುಂಬಾರ ಮಲ್ಲಿಗೆವಾಡ ಅವರು, ಹಿರೇಖೇಡ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯವೈಖರಿಯನ್ನು ಮೇಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಗ್ರಾಮ ಪಂಚಾಯಿತಿ ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಅಧಿಕಾರಿಗಳ ನಿಯಮಿತ ಹಾಜರಾತಿ ಖಚಿತಪಡಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Total Views: 0
Share This Article