Scholarships for SC/ST Researchers at Mysore University: Minister Dr. Yathindra Siddaramaiah Resolves the Crisis
ಮೈಸೂರು ವಿವಿ ಎಸ್.ಸಿ. ಎಸ್.ಟಿ. ಸಂಶೋಧಕರಿಗೆ ಶಿಷ್ಯವೇತನ: ಬಿಕ್ಕಟ್ಟು ಬಗೆಹರಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನದ (ಸ್ಕಾಲರ್ಶಿಪ್) ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಅಧಿಕಾರಿಗಳ ಸಭೆ ಜರುಗಿತು.
ಸಚಿವರ ಗೃಹ ಕಛೇರಿ “ಕಾವೇರಿ”ಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದ ಸಚಿವರು, ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ತಲಾ 58 ವಿದ್ಯಾರ್ಥಿಗಳಿಗೆ ಹಂಚಿಕೆ:
ಪ್ರವೇಶ ಪರೀಕ್ಷೆಯಲ್ಲಿ (ಎಂಟ್ರೆನ್ಸ್) ಉತ್ತೀರ್ಣರಾಗಿರುವ ಒಟ್ಟು 116 ವಿದ್ಯಾರ್ಥಿಗಳಿಗೂ ಪ್ರವೇಶಾತಿ ನೀಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.
ಆದರೆ, ಮಂಡ್ಯ ಮತ್ತು ಚಾಮರಾಜನಗರ ವಿಶ್ವವಿದ್ಯಾಲಯಗಳು ಪ್ರತ್ಯೇಕಗೊಂಡಿರುವುದರಿಂದ ಮೈಸೂರು ವಿಶ್ವವಿದ್ಯಾಲಯಕ್ಕೆ ಆರ್ಥಿಕ ಸಂಪನ್ಮೂಲಗಳ ಕೊರತೆ ಎದುರಾಗಿದೆ. ಈ ಕಾರಣದಿಂದಾಗಿ ಇಷ್ಟೊಂದು ದೊಡ್ಡ ಮಟ್ಟದ ಆರ್ಥಿಕ ಹೊರೆಯನ್ನು ಸಂಪೂರ್ಣವಾಗಿ ಭರಿಸಲು ಹಾಗೂ ಇಷ್ಟು ಸಂಖ್ಯೆಯ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡಲು ವಿಶ್ವವಿದ್ಯಾಲಯಕ್ಕೆ ಸಾಧ್ಯವಾಗುವುದಿಲ್ಲ ಎಂದು ಮೈಸೂರು ವಿವಿ ಕುಲಪತಿಗಳು ಸಭೆಯಲ್ಲಿ ಅಸಹಾಯಕತೆ ವ್ಯಕ್ತಪಡಿಸಿದರು.
ಇದಕ್ಕೆ ಪರ್ಯಾಯ ಮಾರ್ಗ ಸೂಚಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು, ಒಟ್ಟು ವಿದ್ಯಾರ್ಥಿಗಳಲ್ಲಿ 58 ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಹಾಗೂ ಉಳಿದ 58 ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ವತಿಯಿಂದ ಸ್ಕಾಲರ್ಶಿಪ್ ಹಂಚಿಕೆ ಮಾಡಿ ನೀಡುವಂತೆ ಜಂಟಿ ತೀರ್ಮಾನಕ್ಕೆ ಬರಲು ಸೂಚಿಸಿದರು. ಸಚಿವರ ಈ ಸೂಕ್ತ ನಿರ್ಧಾರಕ್ಕೆ ಸಮಾಜ ಕಲ್ಯಾಣ ಇಲಾಖೆ ಮತ್ತು ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು ಪೂರಕವಾಗಿ ಪ್ರತಿಕ್ರಿಯಿಸಿದರು.
ಮಾರ್ಗದರ್ಶಕರು(ಗೈಡ್) ಸಾಮರ್ಥ್ಯ ಮೀರಿ ವಿದ್ಯಾರ್ಥಿಗಳ ಆಯ್ಕೆ – ಸಚಿವರ ಕಿವಿಮಾತು:
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಸಂಶೋಧಕ ವಿದ್ಯಾರ್ಥಿಗಳ ಸಂಘದ ಮುಖಂಡರೊಂದಿಗೆ ಮಾತನಾಡಿದ ಸಚಿವರು, “ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಗೈಡ್‌ಗಳು (ಮಾರ್ಗದರ್ಶಕರು) ತಮ್ಮ ಸಾಮರ್ಥ್ಯ ಮೀರಿ ವಿದ್ಯಾರ್ಥಿಗಳನ್ನು ಸಂಶೋಧನೆಗೆ ತಗೆದುಕೊಂಡಿದ್ದಾರೆ. ಆ ಕಾರಣದಿಂದಾಗಿಯೇ ಪ್ರಸ್ತುತ ಈ ಸಮಸ್ಯೆ ಉದ್ಭವಿಸಿದೆ. ಮುಂದಿನ ವರ್ಷಗಳಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಸಹ ಪರಿಸ್ಥಿತಿಯನ್ನು ಅರ್ಥೈಸಿಕೊಂಡು ಸಹಕಾರ ನೀಡಬೇಕು” ಎಂದು ತಿಳಿಸಿದರು.
ಸಚಿವರ ಈ ಸಕಾಲಿಕ ಮಧ್ಯಸ್ಥಿಕೆ ಹಾಗೂ ಸೂಕ್ತ ನಿರ್ಧಾರದಿಂದಾಗಿ ಸಂಶೋಧಕ ವಿದ್ಯಾರ್ಥಿಗಳ ಶಿಷ್ಯವೇತನದ ಗೊಂದಲಕ್ಕೆ ಸುಖದಾಂತ್ಯ ಸಿಕ್ಕಂತಾಗಿದೆ.
ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ರಾಜ್, ಮೈಸೂರು ವಿಶ್ವವಿದ್ಯಾಲಯದ ಕುಲಪತಿಗಳು ಡಾ. ಲೋಕನಾಥ್, ಮತ್ತಿತರರು ಉಪಸ್ಥಿತರಿದ್ದರು.


