Accelerate development works in Belagavi city: Urban Development Minister Dr. Yathindra Siddaramaiah

ಬೆಳಗಾವಿ ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಿ: ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ
ಬೆಳಗಾವಿ, ಜುಲೈ 28: ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ನಾಗರಿಕ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಕೊಠಡಿ ಸಂಖ್ಯೆ 354ರಲ್ಲಿ ಬೆಳಗಾವಿ ಮಹಾನಗರ ಪಾಲಿಕೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ (BUDA) ಹಾಗೂ ಸ್ಮಾರ್ಟ್ ಸಿಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಸಭೆಯಲ್ಲಿ ವಿವಿಧ ನಗರಾಭಿವೃದ್ಧಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಯಾವುದೇ ಕಾಮಗಾರಿಗಳು ಅನಗತ್ಯವಾಗಿ ವಿಳಂಬವಾಗದಂತೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಸಾರ್ವಜನಿಕ ಶೌಚಾಲಯಗಳು ದಿನದ ಎಲ್ಲ ಸಮಯದಲ್ಲೂ ಸಾರ್ವಜನಿಕರ ಬಳಕೆಗೆ ಮುಕ್ತವಾಗಿರಬೇಕು. ಅವುಗಳ ಸ್ವಚ್ಛತೆ, ನೈರ್ಮಲ್ಯ ಹಾಗೂ ನಿರ್ವಹಣೆಗೆ ಮೊದಲ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ರಾಜ್ಯ ಸರ್ಕಾರದ ಕನ್ನಡ ಪರ ನಿಲುವಿಗೆ ಅನುಗುಣವಾಗಿ, ಸರ್ಕಾರಿ ಕಚೇರಿಗಳು ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ಕನ್ನಡ ನಾಮಫಲಕಗಳ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಉಲ್ಲಂಘನೆ ಕಂಡುಬಂದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ನಗರದಲ್ಲಿ ಬಾಕಿ ಉಳಿದಿರುವ ಹಳೆಯ ಘನತ್ಯಾಜ್ಯ (Legacy Waste) ನಿರ್ವಹಣೆಯನ್ನು ತ್ವರಿತಗೊಳಿಸಿ ಪರಿಸರ ಸ್ನೇಹಿ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಜೊತೆಗೆ ಹಾಳಾಗಿರುವ ರಸ್ತೆಗಳನ್ನು ಆದ್ಯತೆಯ ಮೇರೆಗೆ ದುರಸ್ತಿಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಹಕಾರದೊಂದಿಗೆ ಬೆಳಗಾವಿಯನ್ನು ಮಾದರಿ ನಗರವನ್ನಾಗಿ ರೂಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದರು.
ಸಭೆಯಲ್ಲಿ ಬೆಳಗಾವಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಆಸೀಫ್ ರಾಜ ಶೇಠಿ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ (BUDA) ಅಧ್ಯಕ್ಷ ಶ್ರೀ ಲಕ್ಷ್ಮಣ ರಾವ್ ಜಿಂಗಳೆ, ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ಪ್ರೀತಿ ಕಾಮ್ಕರ್, ಉಪ ಮಹಾಪೌರರಾದ ಶ್ರೀ ಹಣಮಂತ ಕೊಂಗಾಲಿ, ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಶ್ರೀ ಕಾರ್ತಿಕ್, ಬೆಳಗಾವಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಕವಿತಾ ವಾರಂಗಲ್, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶ್ರೀ ಶಕೀಲ್ ಅಹ್ಮದ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
